
ಹೈದರಾಬಾದ್: ಹೈದರಾಬಾದ್ ಕ್ರಿಕೆಟ್ ಅಸೋಸಿಯೇಷನ್‌ನಲ್ಲಿ ನಡೆದ ಹಣಕಾಸು ಅವ್ಯವಹಾರಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ಮತ್ತು ಕಾಂಗ್ರೆಸ್ ನಾಯಕ ಮೊಹಮ್ಮದ್ ಅಜರುದ್ದೀನ್ ಮಂಗಳವಾರ ED ಅಧಿಕಾರಿಗಳ ಮುಂದೆ ವಿಚಾರಣೆಗೆ ಹಾಜರಾಗಿದ್ದಾರೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.
ಇಡಿ ಅವರನ್ನು ಪ್ರಶ್ನಿಸಲಿದ್ದು, ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ (PMLA)ಯಡಿ ಹೇಳಿಕೆ ದಾಖಲಿಸಿಕೊಳ್ಳಲಿದೆ ಎಂದು ಮೂಲಗಳು ಹೇಳಿವೆ.
ಈ ಹಿಂದೆ ಅಕ್ಟೋಬರ್ 3 ರಂದು ಇಲ್ಲಿನ ಫತೇ ಮೈದಾನ್ ರಸ್ತೆಯಲ್ಲಿರುವ ಇಡಿ ಕಚೇರಿಯಲ್ಲಿ ವಿಚಾರಣೆಗೆ ಹಾಜರಾಗುವಂತೆ ಅಜರುದ್ದೀನ್ ಅವರಿಗೆ ಸಮನ್ಸ್ ನೀಡಲಾಗಿತ್ತು. ಆದರೆ, ಬೇರೆ ದಿನದಂದು ವಿಚಾರಣೆಗೆ ಹಾಜರಾಗುವುದಾಗಿ ಅವರು ಮನವಿ ಮಾಡಿದ್ದರಿಂದ ಇಂದು ವಿಚಾರಣೆಗೆ ಅವರನ್ನು ಕರೆಸಲಾಗಿದೆ.
ಹೈದರಾಬಾದ್ ಕ್ರಿಕೆಟ್ ಅಸೋಸಿಯೇಷನ್‌ನಲ್ಲಿ (ಎಚ್‌ಸಿಎ) ಹಣಕಾಸು ಅವ್ಯವಹಾರ ನಡೆದಿದೆ ಎಂಬ ಆರೋಪ ಕುರಿತು ತನಿಖೆ ನಡೆಸುತ್ತಿರುವ ಇಡಿ ಕಳೆದ ವರ್ಷ ನವೆಂಬರ್ ನಲ್ಲಿ ಶೋಧ ಕಾರ್ಯಾಚರಣೆ ನಡೆಸಿತ್ತು.
HCA ಅಧ್ಯಕ್ಷರಾಗಿದ್ದ ಅವಧಿಯಲ್ಲಿ ಅಜರುದ್ದೀನ್ ಅವರ ಪಾತ್ರದ ಕುರಿತು ಇಡಿ ವಿಚಾರಣೆ ನಡೆಸಲಿದೆ ಎಂದು ಮೂಲಗಳು ತಿಳಿಸಿವೆ.
ಕಳೆದ ವರ್ಷ ನಡೆದ ಅಸೆಂಬ್ಲಿ ಚುನಾವಣೆಯಲ್ಲಿ ಸೋತಿದ್ದ ಅಜರುದ್ದೀನ್ ಅವರಿಂದ ತಕ್ಷಣದ ಪ್ರತಿಕ್ರಿಯೆ ಬಂದಿಲ್ಲ. ಕಳೆದ ವರ್ಷ ತೆಲಂಗಾಣ ಪೊಲೀಸರು ಪ್ರಕರಣ ದಾಖಲಿಸಿದ ನಂತರ ತನ್ನ ವಿರುದ್ಧ ಹೊರಿಸಲಾದ ಆರೋಪಗಳು ಸುಳ್ಳು ಮತ್ತು "ಪ್ರಚೋದಿತವಾಗಿದ್ದು, ರಾಜಕೀಯ ಎದುರಾಳಿಗಳು ತಮ್ಮ ವರ್ಚಸ್ಸು ಹಾಳುಮಾಡಲು ಮಾಡಿರುವ ಸಂಚು ಎಂದು ಆರೋಪಿಸಿದ್ದರು.
Advertisement