ಜಲ್ನಾ: ಮಹಾರಾಷ್ಟ್ರದ ಜಲ್ನಾ ನಗರದಲ್ಲಿ ಒಂಬತ್ತು ವರ್ಷದ ಬಾಲಕಿಗೆ ಅಪರಿಚಿತ ವ್ಯಕ್ತಿಯೊಬ್ಬ ಮಾದಕ ದ್ರವ್ಯ ನೀಡಿ, ಅತ್ಯಾಚಾರವೆಸಗಿದ್ದು, ನಂತರ ಬೀದಿಯಲ್ಲಿ ಬಿಟ್ಟು ಹೋಗಿದ್ದಾನೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ.
ಚಂದನ್‌ಜಿರಾ ಪ್ರದೇಶದಲ್ಲಿ ಭಾನುವಾರ ರಾತ್ರಿ 11 ಗಂಟೆ ಸುಮಾರಿಗೆ ಈ ಘಟನೆ ನಡೆದಿದ್ದು, ಗಂಭೀರ ಸ್ಥಿತಿಯಲ್ಲಿದ್ದ ಬಾಲಕಿಯನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದ್ದು, ನಂತರ ಛತ್ರಪತಿ ಸಂಭಾಜಿನಗರದ ಸರ್ಕಾರಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.
ಬಾಲಕಿ ಅಪಾಯದಿಂದ ಪಾರಾಗಿದ್ದಾಳೆ. ಈ ಸಂಬಂಧ ಐವರನ್ನು ಬಂಧಿಸಲಾಗಿದ್ದು, ಪ್ರಾಥಮಿಕ ಪುರಾವೆಗಳ ಪ್ರಕಾರ, ಒಬ್ಬ ವ್ಯಕ್ತಿ ಅಪರಾಧದಲ್ಲಿ ಭಾಗಿಯಾಗಿರುವ ಶಂಕೆ ಇದೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಅಜಯ್ ಕುಮಾರ್ ಬನ್ಸಾಲ್ ಸುದ್ದಿಗಾರರಿಗೆ ತಿಳಿಸಿದ್ದಾರೆ.
ಈ ಘಟನೆಯಿಂದ ಆಕ್ರೋಶಗೊಂಡ ಸ್ಥಳೀಯರು ಛತ್ರಪತಿ ಸಂಭಾಜಿನಗರ ರಸ್ತೆಯಲ್ಲಿ ರಸ್ತೆ ತಡೆ ನಡೆಸಿ, ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದರು. ಬಾಲಕಿ ಮನೆಯಲ್ಲಿ ಒಂಟಿಯಾಗಿದ್ದಾಗ ಆಕೆಯನ್ನು ಮನೆಯಿಂದ ಕರೆದೊಯ್ದ ಆರೋಪಿ ಮಾದಕ ದ್ರವ್ಯ ನೀಡಿ ಅತ್ಯಾಚಾರವೆಸಗಿದ್ದಾನೆ. ನಂತರ ಬೀದಿಯಲ್ಲಿ ಬಿಟ್ಟು ಹೋಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ಸಂತ್ರಸ್ತ ಬಾಲಕಿ ತನ್ನ ತಾಯಿಯೊಂದಿಗೆ ವಾಸಿಸುತ್ತಿದ್ದಳು. ಆಕೆ ಮನೆಯಿಂದ ಹೊರಗೆ ಹೋಗಿದ್ದಾಗ ಘಟನೆ ನಡೆದಿದ್ದು, ಮನೆಗೆ ಹಿಂದಿರುಗಿದಾಗ ಮಗಳು ಕಂಡಿಲ್ಲ. ತೀವ್ರ ಹುಡುಕಾಟದ ನಂತರ ಸಮೀಪದ ಬೀದಿಯಲ್ಲಿ ಬಾಲಕಿ ಪತ್ತೆಯಾಗಿದ್ದು, ನಂತರ ಮಹಿಳೆ ಚಂದನ್‌ಜಿರಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
Advertisement