ಮಣಿಪುರದಲ್ಲಿ ಮತ್ತೆ ಹಿಂಸಾಚಾರ: ಜಿರಿಬಾಮ್ ಜಿಲ್ಲೆಯ ಹಳ್ಳಿಯ ಮೇಲೆ ಉಗ್ರರ ದಾಳಿ
ಇಂಫಾಲ್: ಜಿರಿಬಾಮ್ ಜಿಲ್ಲೆಯ ಹಳ್ಳಿಯೊಂದರ ಮೇಲೆ ಉಗ್ರರು ಶನಿವಾರ ದಾಳಿ ನಡೆಸಿದ್ದರಿಂದ ಮಣಿಪುರದಲ್ಲಿ ಹೊಸ ಹಿಂಸಾಚಾರ ಭುಗಿಲೆದ್ದಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಅತ್ಯಾಧುನಿಕ ಶಸ್ತ್ರಾಸ್ತ್ರಗಳನ್ನು ಬಳಸಿ, ಇಂದು ಬೆಳಗಿನ ಜಾವ 5 ಗಂಟೆ ಸುಮಾರಿಗೆ ಬೊರೊಬೆಕ್ರಾ ಪೊಲೀಸ್ ಠಾಣೆ ವ್ಯಾಪ್ತಿಯ ಗ್ರಾಮವನ್ನು ಗುರಿಯಾಗಿಸಿಕೊಂಡು ಉಗ್ರರು ಗುಂಡಿನ ದಾಳಿ ನಡೆಸಿದ್ದಾರೆ ಎಂದು ಅವರು ಹೇಳಿದ್ದಾರೆ.
ಸಿಆರ್‌ಪಿಎಫ್ ಮತ್ತು ಪೊಲೀಸ್ ಸಿಬ್ಬಂದಿ ಪ್ರತಿದಾಳಿ ನಡೆಸಿದ್ದು, ಭಾರೀ ಗುಂಡಿನ ಚಕಮಕಿ ನಡೆಯುತ್ತಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.
ಸ್ಥಳಕ್ಕೆ ಹೆಚ್ಚುವರಿ ಭದ್ರತಾ ಪಡೆಗಳು ಧಾವಿಸುತ್ತಿವೆ. ಇದುವರೆಗೆ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಎಂದು ಅವರು ಹೇಳಿದ್ದಾರೆ.
ಹಿಂಸಾಚಾರ ಭುಗಿಲೇಳುತ್ತಿದ್ದಂತೆ ವೃದ್ಧರು, ಮಹಿಳೆಯರು ಮತ್ತು ಮಕ್ಕಳನ್ನು ಭದ್ರತಾ ಪಡೆಗಳು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸುತ್ತಿದ್ದಾರೆ.
ಜಿರಿಬಾಮ್ ಪಟ್ಟಣದಿಂದ ಸುಮಾರು 30 ಕಿಮೀ ದೂರದಲ್ಲಿರುವ ಬೊರೊಬೆಕ್ರಾ, ದಟ್ಟವಾದ ಕಾಡುಗಳು ಮತ್ತು ಪರ್ವತಮಯ ಭೂಪ್ರದೇಶದಿಂದ ಆವೃತವಾಗಿದೆ.
ಕಳೆದ ವರ್ಷ ಮೇ ತಿಂಗಳಲ್ಲಿ ರಾಜ್ಯದಲ್ಲಿ ನಡೆದ ಜನಾಂಗೀಯ ಹಿಂಸಾಚಾರದ ನಂತರ ಈ ಪ್ರದೇಶವು ಇಂತಹ ಹಲವಾರು ದಾಳಿಗಳಿಗೆ ಸಾಕ್ಷಿಯಾಗುತ್ತಿದೆ.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ