
ಮುಂಬೈ: ಮಹಾರಾಷ್ಟ್ರ ವಿಧಾನಸಭಾ ಚುನಾವಣೆಗೆ ಬಿಜೆಪಿ ಸೋಮವಾರ ತನ್ನ 25 ಅಭ್ಯರ್ಥಿಗಳ ಮೂರನೇ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಕಾಂಗ್ರೆಸ್ ತೊರೆದು ಕೇಸರಿ ಪಕ್ಷ ಸೇರಿದ್ದ ಇಬ್ಬರಿಗೆ ಮತ್ತು ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಅವರ ಆಪ್ತ ಸಹಾಯಕನಿಗೆ ಟಿಕೆಟ್ ನೀಡಲಾಗಿದೆ.
ಬಿಜೆಪಿ ಇದುವರೆಗೆ ಒಟ್ಟು 146 ಕ್ಷೇತ್ರಳಿಗೆ ಅಭ್ಯರ್ಥಿಗಳನ್ನು ಘೋಷಿಸಿದೆ.
2021 ರಲ್ಲಿ ನಡೆದ ಉಪಚುನಾವಣೆಯಲ್ಲಿ ಕಾಂಗ್ರೆಸ್ ನಿಂದ ಗೆದ್ದ ಜಿತೇಶ್ ಅಂತಪುರ್ಕರ್ ಅವರಿಗೆ ಬಿಜೆಪಿ ಟಿಕೆಟ್ ನೀಡಲಾಗಿದೆ. ಜಿತೇಶ್, ಮಾಜಿ ಮುಖ್ಯಮಂತ್ರಿ ಅಶೋಕ್ ಚವಾಣ್ ಅವರ ನಿಕಟವರ್ತಿ ಎಂದು ಪರಿಗಣಿಸಲಾಗಿದ್ದು, ಅವರನ್ನು ದೆಗ್ಲೂರಿನಿಂದ ಕಣಕ್ಕಿಳಿಸಲಾಗಿದೆ.
ಚವಾಣ್ ಅವರು ಇತ್ತೀಚೆಗಷ್ಟೇ ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ್ದರಿಂದ ರಾಜ್ಯಸಭಾ ಸದಸ್ಯರಾಗಿ ಆಯ್ಕೆಯಾಗಿದ್ದಾರೆ.
ಲಾತೂರ್ ಸಿಟಿ ಕ್ಷೇತ್ರದಿಂದ ಕಾಂಗ್ರೆಸ್ ಹಿರಿಯ ನಾಯಕ ಮತ್ತು ಮಾಜಿ ಲೋಕಸಭಾ ಸ್ಪೀಕರ್ ಶಿವರಾಜ್ ಪಾಟೀಲ್ ಅವರ ಸೊಸೆ ಅರ್ಚನಾ ಪಾಟೀಲ್-ಚಕುರ್ಕರ್ ಅವರನ್ನು ಕಣಕ್ಕಿಳಿಸಲಾಗಿದೆ. ಅರ್ಚನಾ ಅವರು ಈ ವರ್ಷದ ಮಾರ್ಚ್‌ನಲ್ಲಿ ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ್ದರು.
ಇನ್ನು ಹಲವಾರು ವರ್ಷಗಳಿಂದ ಫಡ್ನವೀಸ್ ಅವರ ಆಪ್ತ ಸಹಾಯಕರಾಗಿ ಸೇವೆ ಸಲ್ಲಿಸುತ್ತಿರುವ ಸುಮಿತ್ ವಾಂಖೆಡೆ ಅವರಿಗೂ ಬಿಜೆಪಿ ಟಿಕೆಟ್ ನೀಡಲಾಗಿದ್ದು, ಅರವಿ ವಿಧಾನಸಭಾ ಕ್ಷೇತ್ರದಿಂದ ಡಿಸಿಎಂ ಆಪ್ತ ಸಹಾಯಕ ಸ್ಪರ್ಧಿಸುತ್ತಿದ್ದಾರೆ.
288 ಸದಸ್ಯ ಬಲದ ಮಹಾರಾಷ್ಟ್ರ ವಿಧಾನಸಭೆಗೆ ನವೆಂಬರ್ 20 ರಂದು ಚುನಾವಣೆ ನಡೆಯಲಿದ್ದು, ನವೆಂಬರ್ 23 ರಂದು ಫಲಿತಾಂಶ ಪ್ರಕಟವಾಗಲಿದೆ.
Advertisement