ನವದೆಹಲಿ: ವೈದ್ಯೆಯ ಅತ್ಯಾಚಾರ ಮತ್ತು ಕೊಲೆ ವಿಚಾರವಾಗಿ ದೇಶಾದ್ಯಂತ ವ್ಯಾಪಕ ಸುದ್ದಿಗೆ ಗ್ರಾಸವಾಗಿದ್ದ ಕೋಲ್ಕತಾದ RG Kar ಆಸ್ಪತ್ರೆಯ ಮಾಜಿ ಪ್ರಾಂಶುಪಾಲ ಸಂದೀಪ್ ಘೋಷ್ ರನ್ನು CBI ಅಧಿಕಾರಿಗಳು ಸೋಮವಾರ ಬಂಧಿಸಿದ್ದಾರೆ.
ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ನಡೆದ ಹಣಕಾಸು ಅವ್ಯವಹಾರದ ಆರೋಪದ ಮೇರೆಗೆ ಸಂದೀಪ್ ಘೋಷ್ ರನ್ನು ಸಿಬಿಐ ಬಂಧಿಸಿದೆ ಎಂದು ಹೇಳಲಾಗಿದೆ. ಸಿಬಿಐ ಇತ್ತೀಚೆಗೆ ಘೋಷ್ ಅವರ ಅಧಿಕಾರಾವಧಿಯಲ್ಲಿ ಅಕ್ರಮಗಳ ವಿರುದ್ಧ ಎಫ್ಐಆರ್ ದಾಖಲಿಸಿತ್ತು.
ಮೂಲಗಳ ಪ್ರಕಾರ ಕೋಲ್ಕತ್ತಾ ಹೈಕೋರ್ಟ್‌ನ ಆದೇಶದ ಮೇರೆಗೆ ಸಂದೀಪ್ ಘೋಷ್ ಮತ್ತು ಮೂರು ಖಾಸಗಿ ಕಂಪನಿಗಳ ವಿರುದ್ಧ ಸಿಬಿಐ ಎಫ್‌ಐಆರ್ ದಾಖಲಿಸಿದೆ. ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಆಗಸ್ಟ್ 25 ರಂದು ಸಿಬಿಐ ಘೋಷ್ ಅವರ ನಿವಾಸದ ಮೇಲೆ ದಾಳಿ ನಡೆಸಿತ್ತು ಮತ್ತು ದಿನವಿಡೀ ಶೋಧ ನಡೆಸಿತು.
ಆಗಸ್ಟ್ 9 ರಂದು ಆಸ್ಪತ್ರೆಯ ಸೆಮಿನಾರ್ ಹಾಲ್‌ನಲ್ಲಿ ಟ್ರೈನಿ ವೈದ್ಯೆಯ ಮೇಲೆ ಅತ್ಯಾಚಾರವೆಸಗಿ ಹತ್ಯೆಗೈದ ಪ್ರಕರಣದ ಬಗ್ಗೆಯೂ ಸಿಬಿಐ ತನಿಖೆ ನಡೆಸುತ್ತಿದೆ.
ಏತನ್ಮಧ್ಯೆ, ಜಾರಿ ನಿರ್ದೇಶನಾಲಯವು ಘೋಷ್ ಅವರ ಅಧಿಕಾರಾವಧಿಯಲ್ಲಿ ಹಣಕಾಸು ಅಕ್ರಮಗಳ ಆರೋಪದ ಮೇಲೆ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ತನಿಖೆ ನಡೆಸುತ್ತಿದೆ. ಘೋಷ್ ವಿರುದ್ಧದ ಆರೋಪದ ಹಿನ್ನೆಲೆಯಲ್ಲಿ ಭಾರತೀಯ ವೈದ್ಯಕೀಯ ಸಂಘ ಇತ್ತೀಚೆಗೆ ಅವರ ಸದಸ್ಯತ್ವವನ್ನು ರದ್ದುಗೊಳಿಸಿತ್ತು.
Advertisement