ಬಸ್ತಾರ್: ಛತ್ತೀಸ್‌ಗಢದ ಬಸ್ತಾರ್ ಪ್ರದೇಶದಲ್ಲಿ ಮಂಗಳವಾರ ಭದ್ರತಾ ಸಿಬ್ಬಂದಿಯೊಂದಿಗೆ ನಡೆದ ಎನ್‌ಕೌಂಟರ್‌ನಲ್ಲಿ ಒಂಬತ್ತು ನಕ್ಸಲೀಯರು ಹತರಾಗಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಭದ್ರತಾ ಪಡೆಗಳ ಜಂಟಿ ತಂಡವು ನಕ್ಸಲ್ ವಿರೋಧಿ ಕಾರ್ಯಾಚರಣೆಯಲ್ಲಿ ತೊಡಗಿದ್ದಾಗ ದಾಂತೇವಾಡ ಮತ್ತು ಬಿಜಾಪುರ ಜಿಲ್ಲೆಗಳ ಗಡಿಯಲ್ಲಿರುವ ಕಾಡಿನಲ್ಲಿ ಇಂದು ಬೆಳಗ್ಗೆ 10.30 ರ ಸುಮಾರಿಗೆ ಗುಂಡಿನ ಚಕಮಕಿ ನಡೆಯಿತು ಎಂದು ಬಸ್ತಾರ್ ರೇಂಜ್ ಪೊಲೀಸ್ ಮಹಾನಿರೀಕ್ಷಕ ಸುಂದರರಾಜ್ ಪಿ ಅವರು ಪಿಟಿಐಗೆ ತಿಳಿಸಿದ್ದಾರೆ.
ನಕ್ಸಲೀಯರ ಉಪಸ್ಥಿತಿಯ ಕುರಿತು ಖಚಿತ ಮಾಹಿತಿಯ ಆಧಾರದ ಮೇಲೆ ಕಾರ್ಯಾಚರಣೆ ಪ್ರಾರಂಭಿಸಲಾಗಿತ್ತು. ಜಿಲ್ಲಾ ಮೀಸಲು ಗಾರ್ಡ್(ಡಿಆರ್‌ಜಿ) ಮತ್ತು ಕೇಂದ್ರೀಯ ಮೀಸಲು ಪೊಲೀಸ್ ಪಡೆ(ಸಿಆರ್‌ಪಿಎಫ್)ಗೆ ಸೇರಿದ ಸಿಬ್ಬಂದಿಗಳು ಜಂಟಿ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು ಎಂದು ಅವರು ಹೇಳಿದ್ದಾರೆ.
ಮಧ್ಯಂತರ ಗುಂಡಿನ ಚಕಮಕಿಯು ದೀರ್ಘಕಾಲದವರೆಗೆ ನಡೆಯಿತು. ನಂತರ 'ಸಮವಸ್ತ್ರ' ಧರಿಸಿದ್ದ ಒಂಬತ್ತು ನಕ್ಸಲೀಯರ ಶವಗಳನ್ನು ಸ್ಥಳದಿಂದ ವಶಪಡಿಸಿಕೊಳ್ಳಲಾಗಿದೆ.
ಅಲ್ಲದೆ, ಎನ್‌ಕೌಂಟರ್ ಸ್ಥಳದಿಂದ ಅಪಾರ ಪ್ರಮಾಣದ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಅವರು ತಿಳಿಸಿದ್ದಾರೆ.
ಎಲ್ಲಾ ಭದ್ರತಾ ಸಿಬ್ಬಂದಿ ಸುರಕ್ಷಿತವಾಗಿದ್ದಾರೆ ಎಂದು ವರದಿಯಾಗಿದೆ ಮತ್ತು ಪ್ರದೇಶದಲ್ಲಿ ಶೋಧ ಕಾರ್ಯಾಚರಣೆ ಇನ್ನೂ ನಡೆಯುತ್ತಿದೆ ಎಂದು ಅವರು ಹೇಳಿದ್ದಾರೆ.
ಬಸ್ತಾರ್ ಪ್ರದೇಶವು ದಾಂತೇವಾಡ ಮತ್ತು ಬಿಜಾಪುರ ಸೇರಿದಂತೆ ಏಳು ಜಿಲ್ಲೆಗಳನ್ನು ಒಳಗೊಂಡಿದೆ. ಈ ಘಟನೆಯೊಂದಿಗೆ, ಈ ವರ್ಷ ಇದುವರೆಗೆ ಛತ್ತೀಸ್‌ಗಢದಲ್ಲಿ ವಿವಿಧ ಎನ್‌ಕೌಂಟರ್‌ಗಳಲ್ಲಿ ಭದ್ರತಾ ಪಡೆಗಳು 154 ನಕ್ಸಲೀಯರನ್ನು ಹೊಡೆದುರುಳಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
Advertisement