ಕೋಝಿಕ್ಕೋಡ್: ತಾಯಿಯ ಚಿಕಿತ್ಸೆಗಾಗಿ ಅಮೆರಿಕದಿಂದ ವಾಪಸ್ ಊರಿಗೆ ಬಂದಿದ್ದ ವ್ಯಕ್ತಿ, ವಿಮಾನ ನಿಲ್ದಾಣದಿಂದ ಮನೆಗೆ ತೆರಳುತ್ತಿದ್ದ ವೇಳೆ ಸಂಭವಿಸಿದ ಭೀಕರ ಅಪಘಾತದಲ್ಲಿ ಮೃತಪಟ್ಟಿರುವ ದಾರುಣ ಘಟನೆ ಬುಧವಾರ ನಡೆದಿದೆ.
ಇಂದು ಬೆಳಗ್ಗೆ ಅಮೆರಿಕದಿಂದ ಕೇರಳಕ್ಕೆ ಮರಳಿದ ವ್ಯಕ್ತಿಯೊಬ್ಬರು ಕಣ್ಣೂರು ಜಿಲ್ಲೆಯ ತಲಶ್ಶೇರಿಯಲ್ಲಿರುವ ತಮ್ಮ ಮನೆಗೆ ತೆರಳುತ್ತಿದ್ದಾಗ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಬೆಳಗ್ಗೆ 6.30ರ ಸುಮಾರಿಗೆ ರಾಷ್ಟ್ರೀಯ ಹೆದ್ದಾರಿಯಲ್ಲಿ ವಡಕರದ ಮುಕ್ಕಲಿ ಬಳಿ ಅಪಘಾತ ಸಂಭವಿಸಿದ್ದು, ವಿಮಾನ ನಿಲ್ದಾಣದಿಂದ ಟ್ಯಾಕ್ಸಿಯಲ್ಲಿ ಮನೆಗೆ ಹೋಗುತ್ತಿದ್ದ 40 ವರ್ಷದ ಶಿಜಿಲ್ ಹಾಗೂ ಟ್ಯಾಕ್ಸಿ ಚಾಲಕ ತಲಶ್ಶೇರಿ ಮೂಲದ ಜುಬಿ(38) ಕೂಡ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ ಎಂದು ಚೋಂಬಳ ಪೊಲೀಸ್ ಠಾಣೆಯ ಅಧಿಕಾರಿ ಹೇಳಿದ್ದಾರೆ.
ಅಮೆರಿಕದಲ್ಲಿ ನೌಕರಿ ಮಾಡುತ್ತಿರುವ ಶಿಜಿಲ್, ಅನಾರೋಗ್ಯದಿಂದ ಬಳಲುತ್ತಿರುವ ತಾಯಿಗೆ ಚಿಕಿತ್ಸೆ ಕೊಡಿಸಲು ಬಂದಿದ್ದರು. ದುರಾದೃಷ್ಟವಶಾತ್ ಅವರು ಪ್ರಯಾಣಿಸುತ್ತಿದ್ದ ಕಾರಿಗೆ ಟ್ರಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಟಿವಿ ಚಾನೆಲ್‌ಗಳಲ್ಲಿ ಪ್ರಸಾರವಾದ ಅಪಘಾತದ ಸಿಸಿಟಿವಿ ದೃಶ್ಯಗಳ ಪ್ರಕಾರ, ಕೋಝಿಕ್ಕೋಡ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ತಲಶ್ಶೇರಿಗೆ ತೆರಳುತ್ತಿದ್ದ ಟ್ಯಾಕ್ಸಿ ಮತ್ತು ಎದುರುಗಡೆಯಿಂದ ಬರುತ್ತಿದ್ದ ಟ್ರಕ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ.
ಭೀಕರ ಅಪಘಾತದಲ್ಲಿ ಇಬ್ಬರೂ ಸ್ಥಳದಲ್ಲಿಯೇ ಮೃತಪಟ್ಟಿದ್ದು, ಇಬ್ಬರ ಮೃತದೇಹಗಳನ್ನು ಕೋಝಿಕ್ಕೋಡ್ ಜಿಲ್ಲಾ ಆಸ್ಪತ್ರೆಯ ಶವಾಗಾರದಲ್ಲಿ ಇರಿಸಲಾಗಿದೆ.
Advertisement