ನವದೆಹಲಿ: ಕಾಂಗ್ರೆಸ್ ಪಕ್ಷಕ್ಕೆ ಸೇರಲು ಶುಕ್ರವಾರ ಭಾರತೀಯ ರೈಲ್ವೆಯ ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ ಕುಸ್ತಿಪಟು ವಿನೇಶ್ ಫೋಗಟ್ ಅವರಿಗೆ ರೈಲ್ವೆ ಶೋಕಾಸ್ ನೋಟಿಸ್ ನೀಡಿದೆ ಎಂದು ಕಾಂಗ್ರೆಸ್ ಮುಖಂಡ ಕೆಸಿ ವೇಣುಗೋಪಾಲ್ ಅವರು ಹೇಳಿದ್ದಾರೆ.
ಫೋಗಟ್ ಅವರಿಗೆ ವಾಟ್ಸಾಪ್ ಮೂಲಕ ನೋಟಿಸ್ ಬಂದಿದೆ ಎಂದು ವೇಣುಗೋಪಾಲ್ ತಿಳಿಸಿದ್ದಾರೆ.
ಇಂದು ಎಐಸಿಸಿ ಪ್ರಧಾನ ಕಚೇರಿಯಲ್ಲಿ ಫೋಗಟ್ ಮತ್ತು ಬಜರಂಗ್ ಪುನಿಯಾ ಅವರನ್ನು ಪಕ್ಷಕ್ಕೆ ಸ್ವಾಗತಿಸಿದ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ವೇಣುಗೋಪಾಲ್ ಅವರು, ಫೋಗಟ್ ಅವರ ಏಕೈಕ ಅಪರಾಧವೆಂದರೆ ರಾಹುಲ್ ಗಾಂಧಿಯನ್ನು ಭೇಟಿ ಮಾಡಿರುವುದು. ಈ ವಿಚಾರದಲ್ಲಿ ರಾಜಕೀಯ ಮಾಡಬೇಡಿ. ವಿನೇಶ್ ಫೋಗಟ್ ಅವರು ಕೆಲಸ ತೊರೆಯುವಾಗ ಮಾಡಬೇಕಾದ ಪ್ರಕ್ರಿಯೆಗಳನ್ನು ಪೂರ್ಣಗೊಳಿಸಿ ಎಂದು ವೇಣುಗೋಪಾಲ್ ರೈಲ್ವೆಗೆ ಒತ್ತಾಯಿಸಿದರು.
ಇಂದು ಬೆಳಗ್ಗೆ ಒಲಿಂಪಿಯನ್ ಕುಸ್ತಿಪಟುಗಳಾದ ವಿನೇಶ್ ಫೋಗಟ್ ಮತ್ತು ಬಜರಂಗ್ ಪುನಿಯಾ ಅವರು ಕಾಂಗ್ರೆಸ್ ಸೇರುವ ಮೊದಲು ಭಾರತೀಯ ರೈಲ್ವೆಯಲ್ಲಿನ ತಮ್ಮ ಹುದ್ದೆಗಳಿಗೆ ರಾಜೀನಾಮೆ ಸಲ್ಲಿಸಿದ್ದರು. ಅವರು ತಮ್ಮ ಅಧಿಕೃತ ಎಕ್ಸ್ ಖಾತೆಯಲ್ಲಿ ಈ ಬಗ್ಗೆ ಮಾಹಿತಿ ನೀಡಿದ್ದಾರೆ.
ವಿನೇಶ್ ಫೋಗಟ್ ಮತ್ತು ಬಜರಂಗ್ ಪುನಿಯಾ ಇಂದು ಕಾಂಗ್ರೆಸ್ ಸೇರಿದ್ದಾರೆ. 2023ರಲ್ಲಿ ಬಿಜೆಪಿಯ ಮಾಜಿ ಸಂಸದ ಮತ್ತು ಕುಸ್ತಿ ಫೆಡರೇಶನ್ ಆಫ್ ಇಂಡಿಯಾ(ಡಬ್ಲ್ಯುಎಫ್‌ಐ) ಮಾಜಿ ಮುಖ್ಯಸ್ಥ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಲೈಂಗಿಕ ಕಿರುಕುಳದ ಆರೋಪ ಮಾಡಿದ್ದ ವಿನೇಶ್ ಫೋಗಟ್ ಹರಿಯಾಣ ಚುನಾವಣೆಗೆ ಸ್ಪರ್ಧಿಸಲಿದ್ದಾರೆ.
Advertisement