ಹತ್ರಾಸ್: ಇಲ್ಲಿನ ರಾಷ್ಟ್ರೀಯ ಹೆದ್ದಾರಿ 93ರ ರಸ್ತೆ ಮಾರ್ಗದಲ್ಲಿ ವ್ಯಾನ್ ಗೆ ಬಸ್ ಹಿಂದಿನಿಂದ ಡಿಕ್ಕಿ ಹೊಡೆದ ಪರಿಣಾಮ ವ್ಯಾನ್‌ನಲ್ಲಿ ಪ್ರಯಾಣಿಸುತ್ತಿದ್ದ ನಾಲ್ವರು ಮಹಿಳೆಯರು ಮತ್ತು ನಾಲ್ವರು ಮಕ್ಕಳು ಸೇರಿದಂತೆ ಹದಿನೇಳು ಮಂದಿ ಮೃತಪಟ್ಟಿದ್ದಾರೆ.
ಹತ್ರಾಸ್‌ನಲ್ಲಿ 11 ಮಂದಿ ಗಾಯಾಳುಗಳು ಮತ್ತು ಅಲಿಗಢದಲ್ಲಿ 5 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಹತ್ರಾಸ್‌ನ ಜಿಲ್ಲಾ ಮ್ಯಾಜಿಸ್ಟ್ರೇಟ್ ಆಶಿಶ್ ಕುಮಾರ್ ಇಂದು ಪಿಟಿಐ ಸುದ್ದಿಸಂಸ್ಥೆಗೆ ತಿಳಿಸಿದ್ದಾರೆ. ನಿನ್ನೆ 15 ಜನರು ಮೃತಪಟ್ಟಿದ್ದರು.
ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಮೃತರ ಕುಟುಂಬಕ್ಕೆ ತಲಾ 2 ಲಕ್ಷ ರೂಪಾಯಿ ಮತ್ತು ಗಂಭೀರವಾಗಿ ಗಾಯಗೊಂಡವರಿಗೆ ತಲಾ 50,000 ರೂಪಾಯಿ ಆರ್ಥಿಕ ನೆರವು ನೀಡಲು ಆದೇಶ ನೀಡಿದ್ದಾರೆ. ಗಾಯಾಳುಗಳಿಗೆ ಸೂಕ್ತ ಚಿಕಿತ್ಸೆ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಆಗ್ರಾ-ಅಲಿಘರ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಬಸ್ ನ್ನು ಓವರ್‌ಟೇಕ್ ಮಾಡಲು ಪ್ರಯತ್ನಿಸುವಾಗ ಬಸ್ ವ್ಯಾನ್‌ಗೆ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ (SP) ನಿಪುನ್ ಅಗರ್ವಾಲ್ ತಿಳಿಸಿದ್ದಾರೆ.
ಜಿಲ್ಲಾ ಕೇಂದ್ರದಿಂದ ಸುಮಾರು 10 ಕಿಲೋಮೀಟರ್ ದೂರದಲ್ಲಿರುವ ಕನ್ವರ್‌ಪುರ ಗ್ರಾಮದ ಬಳಿ ಅಪಘಾತ ಸಂಭವಿಸಿದೆ. ಪ್ರಯಾಣಿಕರು ಹತ್ರಾಸ್‌ನಿಂದ ಆಗ್ರಾಕ್ಕೆ ತೆರಳುತ್ತಿದ್ದರು.
ಮೃತರಿಗೆ ಸಂತಾಪ ಸೂಚಿಸಿರುವ ಪ್ರಧಾನಿ ನರೇಂದ್ರ ಮೋದಿ, ಗಾಯಾಳುಗಳು ಶೀಘ್ರ ಗುಣಮುಖರಾಗಲಿ. ರಾಜ್ಯ ಸರ್ಕಾರದ ಮೇಲ್ವಿಚಾರಣೆಯಲ್ಲಿ ಸ್ಥಳೀಯ ಆಡಳಿತವು ಸಂತ್ರಸ್ತರಿಗೆ ಸಾಧ್ಯವಿರುವ ಎಲ್ಲ ಸಹಾಯವನ್ನು ನೀಡುತ್ತಿದೆ ಎಂದು ಎಕ್ಸ್ ಪೋಸ್ಟ್ ನಲ್ಲಿ ತಿಳಿಸಿದ್ದಾರೆ.
ಮೃತರ ಕುಟುಂಬಕ್ಕೆ 2 ಲಕ್ಷ ರೂಪಾಯಿ ಹಾಗೂ ಗಾಯಗೊಂಡವರಿಗೆ 50 ಸಾವಿರ ರೂಪಾಯಿ ಪರಿಹಾರ ಘೋಷಿಸಿದ್ದಾರೆ.
ರಾಷ್ಟ್ರಪತಿ ಶ್ರೀಮತಿ ದ್ರೌಪದಿ ಮುರ್ಮು ಅವರು ಅಪಘಾತದಲ್ಲಿ ಪ್ರಾಣ ಕಳೆದುಕೊಂಡವರಿಗೆ ಸಂತಾಪ ಸೂಚಿಸಿ ಗಾಯಾಳುಗಳು ಶೀಘ್ರ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸಿದ್ದಾರೆ.
ಉತ್ತರ ಪ್ರದೇಶದ ಹತ್ರಾಸ್ ಜಿಲ್ಲೆಯಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಹಲವಾರು ಜನರ ಸಾವಿನ ಸುದ್ದಿ ಕೇಳಿ ಅತ್ಯಂತ ದುಃಖವಾಗಿದೆ. ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡಿರುವ ಕುಟುಂಬಗಳಿಗೆ ಸಂತಾಪವನ್ನು ವ್ಯಕ್ತಪಡಿಸುತ್ತೇನೆ, ಗಾಯಗೊಂಡವರು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಹೇಳಿದ್ದಾರೆ.
Advertisement