ಪುಣೆ: ಪಾನ ಮತ್ತ ಚಾಲಕನೊಬ್ಬ ಚಲಾಯಿಸುತ್ತಿದ್ದ ಟೆಂಪೋ ಐದು ವಾಹನಗಳಿಗೆ ಡಿಕ್ಕಿ ಹೊಡೆದ ಪರಿಣಾಮ 36 ವರ್ಷದ ಮಹಿಳೆಯೊಬ್ಬರು ಸಾವನ್ನಪ್ಪಿದ್ದು, ಮೂವರು ಗಾಯಗೊಂಡಿರುವ ಘಟನೆ ಮಹಾರಾಷ್ಟ್ರದ ಪುಣೆಯಲ್ಲಿ ನಡೆದಿದೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ. ಭಾನುವಾರ ರಾತ್ರಿ 9. 15ರ ಸುಮಾರಿಗೆ ಕೊತ್ರುಡ್ ಪ್ರದೇಶದ ಪೌಡ್ ರಸ್ತೆಯಲ್ಲಿ ಈ ಘಟನೆ ನಡೆದಿದೆ.
ಆರೋಪಿ ಚಾಲಕ ಆಶಿಶ್ ಪವಾರ್ (26) ನನ್ನು ಭಾರತೀಯ ನ್ಯಾಯ ಸಂಹಿತಾ ಮತ್ತು ಮೋಟಾರು ವಾಹನ ಕಾಯ್ದೆಯ ಸೆಕ್ಷನ್‌ಗಳ ಅಡಿಯಲ್ಲಿ ಬಂಧಿಸಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಮದ್ಯದ ಅಮಲಿನಲ್ಲಿ ಆರೋಪಿ ಟೆಂಪೋವನ್ನು ಅಜಾಗರೂಕತೆಯಿಂದ, ಅಡ್ಡಾದಿಡ್ಡಿಯಾಗಿ ಚಲಾಯಿಸಿ ಕೆಲವು ದ್ವಿಚಕ್ರ ವಾಹನಗಳು ಸೇರಿದಂತೆ ನಾಲ್ಕೈದು ವಾಹನಗಳಿಗೆ ಡಿಕ್ಕಿ ಹೊಡೆದಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
ಘಟನೆಯಲ್ಲಿ ಗೀತಾಂಜಲಿ ಅಮರಳೆ ಸಾವನ್ನಪ್ಪಿದ್ದು, ಆಕೆಯ ಪತಿ ಸಂಭಾಜಿ ಅಮ್ರಲೆ ಮತ್ತಿಬ್ಬರು ಗಂಭೀರ ಗಾಯಗೊಂಡಿದ್ದಾರೆ. ಸದ್ಯ ಅವರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಅಲಂಕಾರ್ ಪೊಲೀಸ್ ಠಾಣೆಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.ಘಟನೆಯ ಬಗ್ಗೆ ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
Advertisement