
ಡಾಟಿಯಾ: ಮಧ್ಯ ಪ್ರದೇಶದ ಡಾಟಿಯಾ ಪಟ್ಟಣದಲ್ಲಿ ಭಾರೀ ಮಳೆಯಿಂದಾಗಿ ಗುರುವಾರ ಮನೆಯ ಪಕ್ಕದ ಹಳೆಯ ಗೋಡೆ ಕುಸಿದು ಏಳು ಜನ ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಖಾಲ್ಕಾಪುರ ಪ್ರದೇಶದಲ್ಲಿ ಇಂದು ಬೆಳಗಿನ ಜಾವ 4 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ. ಮನೆಯೊಂದರ ಪಕ್ಕದಲ್ಲಿದ್ದ ಗೋಡೆಯು ಅದರ ಮೇಲೆ ಬಿದ್ದಿದ್ದು, ಒಂಬತ್ತು ಜನ ಅವಶೇಷಗಳ ಅಡಿಯಲ್ಲಿ ಸಿಲುಕಿಕೊಂಡಿದ್ದರು. ಆ ಪೈಕಿ ಏಳು ಜನ ಸಾವನ್ನಪ್ಪಿದ್ದಾರೆ ಮತ್ತು ಇಬ್ಬರನ್ನು ರಕ್ಷಿಸಲಾಗಿದೆ ಎಂದು ಡಾಟಿಯಾ ಕಲೆಕ್ಟರ್ ಸಂದೀಪ್ ಮಕಿನ್ ಅವರು ಹೇಳಿದ್ದಾರೆ.
ಘಟನೆಯ ಬಗ್ಗೆ ತೀವ್ರ ಸಂತಾಪ ವ್ಯಕ್ತಪಡಿಸಿರುವ ಮಧ್ಯಪ್ರದೇಶ ಮುಖ್ಯಮಂತ್ರಿ ಮೋಹನ್ ಯಾದವ್, ಸಂತ್ರಸ್ತರ ಕುಟುಂಬಕ್ಕೆ ತಲಾ 4 ಲಕ್ಷ ರೂಪಾಯಿ ನೆರವು ಘೋಷಿಸಿದ್ದಾರೆ ಎಂದು ಅಧಿಕಾರಿ ತಿಳಿಸಿದ್ದಾರೆ.
ಘಟನೆ ನಡೆದ ಕೂಡಲೇ ಹಿರಿಯ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆ ಆರಂಭಿಸಿದ್ದಾರೆ.
Advertisement