ಉತ್ತರ ಪ್ರದೇಶ: ಟ್ರಕ್ ಹರಿದು ಒಂದೇ ಕುಟುಂಬದ ನಾಲ್ವರು ಸಾವು, 5 ಮಂದಿಗೆ ಗಾಯ
ಸಂಭಾಲ್: ಟ್ರಕ್ ಹರಿದು ಒಂದೇ ಕುಟುಂಬದ ನಾಲ್ವರು ಮೃತಪಟ್ಟು, ಐವರು ಗಾಯಗೊಂಡಿರುವ ಘಟನೆ ಉತ್ತರ ಪ್ರದೇಶದ ಸಂಬಾಲ್ ನಲ್ಲಿ ಸೋಮವಾರ ಬೆಳಗ್ಗೆ ನಡೆದಿದೆ. ಗಾಯಾಳುಗಳಲ್ಲಿ ಇಬ್ಬರ ಸ್ಥಿತಿ ಗಂಭೀರವಾಗಿದ್ದು, ಅವರನ್ನು ಚಿಕಿತ್ಸೆಗಾಗಿ ಅಲಿಗಢಕ್ಕೆ ಕಳುಹಿಸಲಾಗಿದೆ.
ಟ್ರಕ್ ಚಾಲಕನನ್ನು ಬಂಧಿಸಲಾಗಿದೆ. ಅಪಘಾತದಲ್ಲಿ ಆತನಿಗೂ ಗಾಯಗಳಾಗಿವೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಬೆಳಗ್ಗೆ 6 ಗಂಟೆ ಸುಮಾರಿನಲ್ಲಿ ಭೋಪತ್‌ಪುರ ಗ್ರಾಮದ ಕೆಲವರು ರಸ್ತೆ ಬದಿ ಕುಳಿತಿದ್ದಾಗ ಅತಿ ವೇಗದಲ್ಲಿ ಬಂದ ಟ್ರಕ್ ಡಿಕ್ಕಿ ಹೊಡೆದಿದೆ. ಪರಿಣಾಮ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಗಾಯಾಳುಗಳನ್ನು ತಕ್ಷಣವೇ ರಾಜಪುರದ ಸಮುದಾಯ ಆರೋಗ್ಯ ಕೇಂದ್ರಕ್ಕೆ ಕರೆದೊಯ್ಯಲಾಯಿತು. ಅಲ್ಲಿಂದ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಅಲಿಘಡಕ್ಕೆ ಕಳುಹಿಸಲಾಯಿತು ಎಂದು ಪೊಲೀಸ್ ವರಿಷ್ಠಾಧಿಕಾರಿ ಕ್ರಿಶನ್ ಕುಮಾರ್ ತಿಳಿಸಿದ್ದಾರೆ.
ಅಪಘಾತಕ್ಕೆ ಒಳಗಾದ ಎಲ್ಲಾ ಒಂಬತ್ತು ಜನರು ಒಂದೇ ಕುಟುಂಬದವರಾಗಿದ್ದಾರೆ. ಮೃತ ದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದ್ದು, ಮುಂದಿನ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಎಸ್ಪಿ ತಿಳಿಸಿದ್ದಾರೆ.
ಅಪಘಾತದ ಸ್ಥಳಕ್ಕೆ ಭೇಟಿ ನೀಡಿದ ಸಂಭಾಲ್ ಜಿಲ್ಲಾ ಮ್ಯಾಜಿಸ್ಟ್ರೇಟ್ ರಾಜೇಂದ್ರ ಸಿಂಗ್ ಪೆನ್ಸಿಯಾ, ಗಾಯಗೊಂಡ ಇಬ್ಬರ ಸ್ಥಿತಿ ಗಂಭೀರವಾಗಿದೆ. ಚಾಲಕನಿಗೆ ನಿದ್ದೆ ಬಂದಿರಬಹುದು. ಇದೇ ಅಪಘಾತಕ್ಕೆ ಕಾರಣವಾಗಿರಬಹುದು ಎಂದು ಹೇಳಿದರು.
Follow KannadaPrabha channel on WhatsApp
KannadaPrabha News app ಡೌನ್ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ