ಬರ್ಹಾಂಪುರ್: ಕಾಲೇಜು ಹಾಸ್ಟೆಲ್ ಆವರಣದಲ್ಲಿ ಗೋಮಾಂಸ( ಬೀಫ್ ) ಬೇಯಿಸಿದ ಆರೋಪದ ಮೇರೆಗೆ ಒಡಿಶಾದ ಬರ್ಹಾಂಪುರ ಜಿಲ್ಲೆಯ ಸರ್ಕಾರಿ ಇಂಜಿನಿಯರಿಂಗ್ ಕಾಲೇಜಿನ ಏಳು ವಿದ್ಯಾರ್ಥಿಗಳನ್ನು ಹಾಸ್ಟೆಲ್‌ನಿಂದ ಹೊರ ಹಾಕಲಾಗಿದೆ ಎಂದು ಸೋಮವಾರ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಈ ಸಂಬಂಧ ಪಾರಾಲ ಮಹಾರಾಜ ಎಂಜಿನಿಯರಿಂಗ್ ಕಾಲೇಜು ಅಧಿಕಾರಿಗಳು ಗುರುವಾರ ಆದೇಶ ಹೊರಡಿಸಿದ್ದು, ಎರಡು ಹಾಸ್ಟೆಲ್‌ಗಳ ಏಳು ವಿದ್ಯಾರ್ಥಿಗಳನ್ನು ನಿಷೇಧಿತ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದಕ್ಕಾಗಿ ಹೊರಹಾಕಲಾಗಿದೆ ಎಂದು ತಿಳಿಸಿದ್ದಾರೆ. ಏಳು ವಿದ್ಯಾರ್ಥಿಗಳಲ್ಲಿ ಒಬ್ಬನಿಗೆ 2,000 ರೂಪಾಯಿ ದಂಡ ವಿಧಿಸಲಾಗಿದೆ. ಕಾಲೇಜು ಅಧಿಕಾರಿಗಳು ಈ ನಿರ್ಧಾರವನ್ನು ವಿದ್ಯಾರ್ಥಿಗಳ ಪೋಷಕರಿಗೆ ತಿಳಿಸಿರುವುದಾಗಿ ಅವರು ಹೇಳಿದರು.
ಬುಧವಾರ ವಿದ್ಯಾರ್ಥಿಗಳು ಹಾಸ್ಟೆಲ್ ಕೊಠಡಿಯಲ್ಲಿ ಗೋಮಾಂಸವನ್ನು ಬೇಯಿಸಿ ಸಂಸ್ಥೆಯ ನೀತಿ, ಸಂಹಿತೆಯನ್ನು ಉಲ್ಲಂಘಿಸಿದ್ದಾರೆ. ಘಟನೆಯ ಬಗ್ಗೆ ಕಾಲೇಜು ವಿದ್ಯಾರ್ಥಿಗಳ ಒಂದು ವಿಭಾಗವು ಸಂಸ್ಥೆಯ ಪ್ರಾಂಶುಪಾಲರ ಗಮನಕ್ಕೆ ತಂದಿದ್ದು, ವಿಚಾರಣೆ ಬಳಿಕ ವಿದ್ಯಾರ್ಥಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಈ ಮಧ್ಯೆ ಹಿಂದೂ ಬಲಪಂಥೀಯ ಗುಂಪುಗಳು, ಬಜರಂಗದಳ ಮತ್ತು ವಿಎಚ್‌ಪಿ ಕಾರ್ಯಕರ್ತರು ವಿದ್ಯಾರ್ಥಿಗಳ ವಿರುದ್ಧ ಕಠಿಣ ಕ್ರಮ"ಕ್ಕೆ ಒತ್ತಾಯಿಸಿದ್ದಾರೆ. ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಯಾವುದೇ ಅಹಿತಕರ ಘಟನೆ ನಡೆಯದಂತೆ ಕಾಲೇಜು ಆವರಣ ಮತ್ತು ಹಾಸ್ಟೆಲ್‌ಗಳ ಬಳಿ ಹೆಚ್ಚಿನ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ.
Advertisement