ಹೈದರಾಬಾದ್: ತಿರುಮಲ ದೇವಸ್ಥಾನದ ಲಡ್ಡು ತಯಾರಿಕೆಯಲ್ಲಿ ಗುಣಮಟ್ಟವಿಲ್ಲದ ಪದಾರ್ಥಗಳು ಮತ್ತು ಪ್ರಾಣಿಗಳ ಕೊಬ್ಬನ್ನು ಬಳಸಲಾಗುತ್ತಿದೆ ಎಂದು ಆರೋಪಿಸಿದ ಆಂಧ್ರಪ್ರದೇಶ ಮುಖ್ಯಮಂತ್ರಿ ಎನ್ ಚಂದ್ರಬಾಬು ನಾಯ್ಡು ವಿರುದ್ಧ ಶುಕ್ರವಾರ ತೀವ್ರ ವಾಗ್ದಾಳಿ ನಡೆಸಿದ ವೈಎಸ್‌ಆರ್‌ಸಿಪಿ ಮುಖ್ಯಸ್ಥ, ಮಾಜಿ ಸಿಎಂ ವೈಎಸ್ ಜಗನ್ ಮೋಹನ್ ರೆಡ್ಡಿ, ನಾಯ್ಡು ರಾಜಕೀಯ ಲಾಭಕ್ಕಾಗಿ ದೇವರನ್ನು ಬಳಸುತ್ತಿದ್ದಾರೆ ಎಂದು ತಿರುಗೇಟು ನೀಡಿದ್ದಾರೆ.
ಇಂದು ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಮಾಜಿ ಸಿಎಂ ಜಗನ್, ನಾಯ್ಡು ಅವರು ರಾಜಕೀಯ ಲಾಭಕ್ಕಾಗಿ ದೇವರನ್ನೂ ಬಳಸಿಕೊಳ್ಳುವ ವ್ಯಕ್ತಿ. "ಇದೊಂದು ರಾಜಕೀಯ ಸ್ಟಂಟ್. ಒಂದೆಡೆ ಚಂದ್ರಬಾಬು ನಾಯ್ಡು ಅವರ ನೂರು ದಿನಗಳ ಆಡಳಿತದ ವಿರುದ್ಧ ಜನ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಅವರು ತಮ್ಮ "ಸೂಪರ್ ಸಿಕ್ಸ್"(ಚುನಾವಣೆ ಭರವಸೆಗಳು) ಏನಾಯಿತು ಎಂದು ಪ್ರಶ್ನಿಸುತ್ತಿದ್ದಾರೆ. ಹೀಗಾಗಿ ಜನರ ಗಮನವನ್ನು ಬೇರೆಡೆಗೆ ಸೆಳೆಯಲು ಹೆಣೆದ ಕಥೆ ಇದು" ಎಂದು ಹೇಳಿದ್ದಾರೆ.
ತುಪ್ಪದಲ್ಲಿ ಪ್ರಾಣಿಗಳ ಕೊಬ್ಬಿನಂಶ ಆರೋಪ ಘೋರವಾಗಿದ್ದು, ಜಗತ್ತಿನಾದ್ಯಂತ ಇರುವ ಕೋಟ್ಯಂತರ ಭಕ್ತರ ಭಾವನೆಗಳೊಂದಿಗೆ ಆಟವಾಡುವುದು ನ್ಯಾಯವೇ ಎಂದು ಜಗನ್ ಪ್ರಶ್ನಿಸಿದರು.
ಪ್ರಯೋಗಾಲಯ ಪರೀಕ್ಷಾ ವರದಿಗಳಲ್ಲಿ ಉಲ್ಲೇಖಿಸಲಾದ ಎಲ್ಲಾ ಮಾದರಿಗಳು, ಪರೀಕ್ಷೆಗಳು ಮತ್ತು ಫಲಿತಾಂಶಗಳು ಎನ್‌ಡಿಎ ಸರ್ಕಾರದ ಅಡಿಯಲ್ಲಿ ನಡೆದಿದೆ ಎಂದರು.
ಪ್ರತಿ ಆರು ತಿಂಗಳಿಗೊಮ್ಮೆ ಟಿಟಿಡಿಯಿಂದ ತುಪ್ಪ ಪೂರೈಕೆದಾರರನ್ನು ಆಯ್ಕೆ ಮಾಡುವುದು ಸಾಮಾನ್ಯ ಪ್ರಕ್ರಿಯೆಯಾಗಿದೆ. ಇದು ದಶಕಗಳಿಂದ ನಡೆಯುತ್ತಿದೆ, ಇದರಲ್ಲಿ ಹೊಸದೇನೂ ಇಲ್ಲ ಎಂದು ವೈಎಸ್‌ಆರ್‌ಸಿಪಿ ಮುಖ್ಯಸ್ಥರು ಹೇಳಿದ್ದಾರೆ.
ಸೆಪ್ಟೆಂಬರ್ 18 ರಂದು ನಡೆದ ಎನ್‌ಡಿಎ ಶಾಸಕಾಂಗ ಪಕ್ಷದ ಸಭೆಯಲ್ಲಿ, ಟಿಡಿಪಿ ಮುಖ್ಯಸ್ಥ ಚಂದ್ರಬಾಬು ನಾಯ್ಡು ಅವರು ಹಿಂದಿನ ವೈಎಸ್‌ಆರ್‌ಸಿಪಿ ಸರ್ಕಾರ, ವೆಂಕಟೇಶ್ವರ ದೇವಸ್ಥಾನವನ್ನು ಸಹ ಬಿಡಲಿಲ್ಲ ಮತ್ತು ಲಡ್ಡುಗಳನ್ನು ತಯಾರಿಸಲು ಕಳಪೆ ಪದಾರ್ಥಗಳನ್ನು ಮತ್ತು ಪ್ರಾಣಿಗಳ ಕೊಬ್ಬನ್ನು ಬಳಸಿದರು ಎಂದು ಆರೋಪಿಸಿದ್ದರು.
Advertisement