ಅಮರಾವತಿ: ವಿಶ್ವವಿಖ್ಯಾತ ತಿರುಪತಿ ಲಡ್ಡು ತಯಾರಿಕೆಯಲ್ಲಿ ಗುಣಮಟ್ಟವಿಲ್ಲದ ಪದಾರ್ಥಗಳು ಮತ್ತು ಪ್ರಾಣಿಗಳ ಕೊಬ್ಬನ್ನು ಬಳಸಿದ ಆರೋಪದ ಬಗ್ಗೆ ತನಿಖೆ ನಡೆಸಲು ಆಂಧ್ರಪ್ರದೇಶದ ಮುಖ್ಯಮಂತ್ರಿ ಎನ್ ಚಂದ್ರಬಾಬು ನಾಯ್ಡು ಅವರು ಭಾನುವಾರ ವಿಶೇಷ ತನಿಖಾ ತಂಡ ರಚಿಸುವುದಾಗಿ ಘೋಷಿಸಿದ್ದಾರೆ.
ಹಿಂದೂ ದೇವಾಲಯಗಳ ಪಾವಿತ್ರ್ಯತೆ ಕಾಪಾಡಲು ಸೂಕ್ತ ಕ್ರಮಕೈಗೊಳ್ಳುವಂತೆ ವಿವಿಧ ವಲಯಗಳಿಂದ ಒತ್ತಡ ಹೆಚ್ಚಾದ ಹಿನ್ನೆಲೆಯಲ್ಲಿ ಆಂಧ್ರ ಪ್ರದೇಶ ಸರ್ಕಾರ ಪ್ರಕರಣದ ತನಿಖೆ ನಡೆಸಲು ಎಸ್ಐಟಿ ರಚಿಸಲು ನಿರ್ಧರಿಸಿದೆ.
ಪ್ರಕರಣದ ತನಿಖೆಗೆ "ಇನ್‌ಸ್ಪೆಕ್ಟರ್ ಜನರಲ್(ಐಜಿ) ಮಟ್ಟದ ಅಥವಾ ಅದಕ್ಕಿಂತ ಮೇಲ್ಪಟ್ಟ ಅಧಿಕಾರಿಯ ನೇತೃತ್ವದಲ್ಲಿ ಎಸ್‌ಐಟಿ ರಚಿಸಲಾಗುವುದು. ಲಡ್ಡು ತಯಾರಿಕೆಯಲ್ಲಿ ಪ್ರಾಣಿಗಳ ಕೊಬ್ಬನ್ನು ಬಳಸಿದ ಬಗ್ಗೆ, ಅಧಿಕಾರದ ದುರುಪಯೋಗದ ಬಗ್ಗೆ ತನಿಖೆ ನಡೆಸಿ ಸರ್ಕಾರಕ್ಕೆ ಎಸ್ಐಟಿ ವರದಿ ನೀಡುತ್ತದೆ ಎಂದು ಚಂದ್ರಬಾಬು ನಾಯ್ಡು ತಿಳಿಸಿದ್ದಾರೆ.
ನಮ್ಮ ಸರ್ಕಾರ ಲಡ್ಡು ಕಲಬೆರಕೆ ತಪ್ಪಿಸಲು ಕಠಿಣ ಕ್ರಮ ತೆಗೆದುಕೊಳ್ಳುತ್ತದೆ. ಈ ವಿಚಾರದಲ್ಲಿ ಯಾವುದೇ ರಾಜಿ ಇಲ್ಲ ಎಂದು ಆಂಧ್ರ ಸಿಎಂ ಹೇಳಿದ್ದಾರೆ.
ಈ ಮಧ್ಯೆ ವಿಶೇಷ ತನಿಖಾ ತಂಡದಿಂದ(ಎಸ್‌ಐಟಿ) ತನಿಖೆ ನಡೆಸುವಂತೆ ಕೋರಿ ಸುಪ್ರೀಂ ಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ(ಪಿಐಎಲ್) ಸಲ್ಲಿಸಲಾಗಿದ್ದು, ಇದರ ಬೆನ್ನಲ್ಲೇ ಈ ಬೆಳವಣಿಗೆ ನಡೆದಿದೆ.
ತಿರುಪತಿ ಲಡ್ಡು ತಯಾರಿಕೆಯಲ್ಲಿ ಗುಣಮಟ್ಟವಿಲ್ಲದ ಪದಾರ್ಥಗಳು ಮತ್ತು ಪ್ರಾಣಿಗಳ ಕೊಬ್ಬನ್ನು ಬಳಸಲಾಗುತ್ತಿದೆ ಎಂದು ಸ್ವತಃ ಆಂಧ್ರ ಪ್ರದೇಶ ಮುಖ್ಯಮಂತ್ರಿ ಆರೋಪ ಮಾಡಿದ್ದರು. ಅಲ್ಲದೆ ತಿರುಪತಿ ಲಡ್ಡುವಿನಲ್ಲಿ ದನದ ಕೊಬ್ಬು, ಮೀನಿನ ಎಣ್ಣೆ ಬಳಸಿರುವುದು ಲ್ಯಾಬ್ ವರದಿಯಲ್ಲಿ ದೃಢಪಟ್ಟಿದೆ.
Advertisement