
ನವದೆಹಲಿ: 10 ವರ್ಷಗಳ ವೈಫಲ್ಯವನ್ನು ಮರೆಮಾಚಲು ಬಿಜೆಪಿ ಭಾವನಾತ್ಮಕ ವಿಷಯಗಳನ್ನು ಎತ್ತುತ್ತಿದೆ ಎಂದು ಆರೋಪಿಸಿದ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, 2024 ರ ಲೋಕಸಭೆ ಚುನಾವಣೆಯಲ್ಲಿ ಪಕ್ಷದ ಗೆಲುವು ಖಚಿತಪಡಿಸಿಕೊಳ್ಳಲು ನಾಯಕರು ಒಗ್ಗಟ್ಟಾಗಿ ಕೆಲಸ ಮಾಡಬೇಕೆಂದು ಕರೆ ಗುರುವಾರ ನೀಡಿದ್ದಾರೆ.
ಇಂದು ದೇಶಾದ್ಯಂತ ಪಕ್ಷದ ಮುಖಂಡರ ಸಭೆಯನ್ನುದ್ದೇಶಿಸಿ ಮಾತನಾಡಿದ ಖರ್ಗೆ, ಭಿನ್ನಾಭಿಪ್ರಾಯಗಳನ್ನು ಬದಿಗಿಟ್ಟು, ಮಾಧ್ಯಮಗಳಲ್ಲಿ ಆಂತರಿಕ ವಿಚಾರಗಳನ್ನು ಪ್ರಸ್ತಾಪಿಸದೆ, ಪಕ್ಷದ ಗೆಲುವಿಗೆ ಒಂದು ತಂಡವಾಗಿ ಕೆಲಸ ಮಾಡಿ ಎಂದು ಸಲಹೆ ನೀಡಿದ್ದಾರೆ.
ಕಳೆದ 10 ವರ್ಷಗಳಲ್ಲಿ ತನ್ನ ಸರ್ಕಾರದ ವೈಫಲ್ಯಗಳನ್ನು ಮುಚ್ಚಿಹಾಕಲು ಬಿಜೆಪಿ ಭಾವನಾತ್ಮಕ ವಿಷಯಗಳನ್ನು ಪ್ರಸ್ತಾಪಿಸುತ್ತಿದೆ. ಅವರು ಉದ್ದೇಶಪೂರ್ವಕವಾಗಿ ಪ್ರತಿಯೊಂದು ವಿಷಯದಲ್ಲೂ ಕಾಂಗ್ರೆಸ್ ಅನ್ನು ಎಳೆದು ತರುತ್ತಾರೆ ಎಂದು ಖರ್ಗೆ ಸಭೆಯಲ್ಲಿ ಹೇಳಿದರು.
ನಾವು ಒಗ್ಗಟ್ಟಾಗಿ ಜನರ ಮುಂದೆ ಬಿಜೆಪಿಯ ಸುಳ್ಳು, ವಂಚನೆ ಮತ್ತು ತಳಮಟ್ಟದ ಸಮಸ್ಯೆಗಳನ್ನು ಪ್ರಸ್ತಾಪಿಸಿ ತಕ್ಕ ಪ್ರತ್ಯುತ್ತರ ನೀಡಬೇಕಾಗಿದೆ ಎಂದು ಖರ್ಗೆ ತಿಳಿಸಿದ್ದಾರೆ.
ಇದೇ ವೇಳೆ ಕನ್ಯಾಕುಮಾರಿಯಿಂದ ಕಾಶ್ಮೀರಕ್ಕೆ ಭಾರತ್ ಜೋಡೋ ಯಾತ್ರೆ ಕೈಗೊಂಡಿದ್ದಕ್ಕಾಗಿ ರಾಹುಲ್ ಗಾಂಧಿಯನ್ನು ಶ್ಲಾಘಿಸಿದ ಕಾಂಗ್ರೆಸ್ ಅಧ್ಯಕ್ಷರು, ಮಣಿಪುರದಿಂದ ಮಹಾರಾಷ್ಟ್ರದವರೆಗೆ ಅವರ ಭಾರತ್ ನ್ಯಾಯ್ ಯಾತ್ರೆಯು ಸಾಮಾಜಿಕ ನ್ಯಾಯದ ಸಮಸ್ಯೆಗಳನ್ನು ಕೇಂದ್ರದ ಗಮನಕ್ಕೆ ತರಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
Advertisement