ಪ್ರಧಾನಿ ಮೋದಿ ಫೋಟೋ ಶೂಟ್ ಮಾಡಿಸುತ್ತಾರೆ, ಆದರೆ ಮಣಿಪುರಕ್ಕೆ ಭೇಟಿ ನೀಡಲ್ಲ: ಖರ್ಗೆ

ಪ್ರಧಾನಿ ನರೇಂದ್ರ ಮೋದಿ ಅವರು ಎಲ್ಲಾ ಕಡೆ ಮಾತನಾಡುತ್ತಾರೆ ಮತ್ತು ಎಲ್ಲಾ ಕಡೆ ಫೋಟೋ ಶೂಟ್ ಸಹ ಮಾಡಿಸುತ್ತಾರೆ. ಆದರೆ ಹಿಂಸಾಚಾರ ಪೀಡಿತ ಮಣಿಪುರಕ್ಕೆ ಭೇಟಿ ನೀಡುವುದಿಲ್ಲ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಶನಿವಾರ ವಾಗ್ದಾಳಿ ನಡೆಸಿದ್ದಾರೆ.
ಖರ್ಗೆ
ಖರ್ಗೆ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಎಲ್ಲಾ ಕಡೆ ಮಾತನಾಡುತ್ತಾರೆ ಮತ್ತು ಎಲ್ಲಾ ಕಡೆ ಫೋಟೋ ಶೂಟ್ ಸಹ ಮಾಡಿಸುತ್ತಾರೆ. ಆದರೆ ಹಿಂಸಾಚಾರ ಪೀಡಿತ ಮಣಿಪುರಕ್ಕೆ ಭೇಟಿ ನೀಡುವುದಿಲ್ಲ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಶನಿವಾರ ವಾಗ್ದಾಳಿ ನಡೆಸಿದ್ದಾರೆ.

ಇಂದು ದೆಹಲಿಯಲ್ಲಿ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಖರ್ಗೆ, ಸಂಸತ್ತಿನಲ್ಲಿ ಸಮಸ್ಯೆಗಳನ್ನು ಪ್ರಸ್ತಾಪಿಸಲು ಕೇಂದ್ರ ಸರ್ಕಾರ ಅವಕಾಶ ನೀಡದ ಕಾರಣ ನಮ್ಮ ಪಕ್ಷ ಭಾರತ್ ಜೋಡೋ ನ್ಯಾಯ್ ಯಾತ್ರೆ ಕೈಗೊಂಡಿದೆ ಎಂದರು.
  
ಜನವರಿ 14 ರಂದು ಆರಂಭವಾಗಲಿರುವ ರಾಹುಲ್ ಗಾಂಧಿ ನೇತೃತ್ವದ ಈ ಯಾತ್ರೆ, ಮಣಿಪುರದಿಂದ ಮಹಾರಾಷ್ಟ್ರದವರೆಗೆ 6,713 ಕಿ.ಮೀ ಕ್ರಮಿಸಲಿದ್ದು, ಅದರಲ್ಲಿ ಭಾಗವಹಿಸುವವರು ಬಸ್ ಮತ್ತು ಕಾಲ್ನಡಿಗೆಯಲ್ಲಿ ಸಾಗಲಿದ್ದಾರೆ.

ಭಾರತ್ ಜೋಡೋ ನ್ಯಾಯ್ ಯಾತ್ರೆಯು ದೇಶದ ಸಾಮಾಜಿಕ ನ್ಯಾಯ, ರಾಜಕೀಯ ಮತ್ತು ಆರ್ಥಿಕ ವಿಷಯಗಳ ಮೇಲೆ ಕೇಂದ್ರೀಕರಿಸುತ್ತದೆ ಎಂದು ಖರ್ಗೆ ತಿಳಿಸಿದ್ದಾರೆ.

ಪ್ರತಿಪಕ್ಷಗಳ ಮೈತ್ರಿಕೂಟ ಇಂಡಿಯಾದ ನಾಯಕರು ಮತ್ತು ನಾಗರಿಕ ಸಮಾಜದ ಸದಸ್ಯರಿಗೂ ಯಾತ್ರೆಯಲ್ಲಿ ಪಾಲ್ಗೊಳ್ಳುವಂತೆ ಆಹ್ವಾನ ನೀಡಲಾಗಿದೆ ಎಂದು ಅವರು ಹೇಳಿದ್ದಾರೆ.

ಇನ್ನು ಜನವರಿ 22 ರಂದು ಅಯೋಧ್ಯೆಯಲ್ಲಿ ನಡೆಯಲಿರುವ ರಾಮ ಮಂದಿರ ಉದ್ಘಾಟನೆ ಸಮಾರಂಭದಲ್ಲಿ ಪಾಲ್ಗೊಳ್ಳುವ ಬಗ್ಗೆ ಶೀಘ್ರವೇ ನಿರ್ಧಾರ ಕೈಗೊಳ್ಳುವುದಾಗಿ ಕಾಂಗ್ರೆಸ್ ಅಧ್ಯಕ್ಷರು ತಿಳಿಸಿದ್ದಾರೆ.

"ರಾಮ ಮಂದಿರ ಉದ್ಘಾಟನೆ ಸಮಾರಂಭಕ್ಕೆ ನನಗೆ ಆಹ್ವಾನ ಬಂದಿದೆ. ಪ್ರಧಾನಿ ಮೋದಿ ಅವರ ಮಾಜಿ ಪ್ರಧಾನ ಕಾರ್ಯದರ್ಶಿಗಳು, ದೇವಸ್ಥಾನ ಟ್ರಸ್ಟ್‌ನ ಕಾರ್ಯದರ್ಶಿಯೊಂದಿಗೆ ಬಂದಿದ್ದರು. ಅವರು ನನ್ನನ್ನು ಆಹ್ವಾನಿಸಿದ್ದಾರೆ.

ಈ ಬಗ್ಗೆ ಶೀಘ್ರವೇ ತೀರ್ಮಾನಿಸುತ್ತೇನೆ ಎಂದು ಎಐಸಿಸಿ ಕೇಂದ್ರ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಖರ್ಗೆ ಅವರು ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com