
ಮೊಹಾಲಿ: 2018 ರಲ್ಲಿ ನಡೆದಿದ್ದ ಅತ್ಯಾಚಾರ ಪ್ರಕರಣದಲ್ಲಿ ಪಾದ್ರಿ ಬಜೀಂದರ್ ಸಿಂಗ್ ಅವರಿಗೆ ಪಂಜಾಬ್‌ನ ಮೊಹಾಲಿ ನ್ಯಾಯಾಲಯವೊಂದು ಜೀವಾವಧಿ ಶಿಕ್ಷೆ ವಿಧಿಸಿದೆ.
ಮಹಿಳೆಯೊಬ್ಬರಿಗೆ ಲೈಂಗಿಕ ದೌರ್ಜನ್ಯವೆಸಗಿದ ಪ್ರಕರಣದಲ್ಲಿ ಸ್ವಯಂ ಘೋಷಿತ ಕ್ರಿಶ್ಚಿಯನ್ ಪಾದ್ರಿ ಬಜೀಂದರ್ ಸಿಂಗ್ ಅವರಿಗೆ ಜೀವಾವಧಿ ಶಿಕ್ಷೆಯನ್ನು ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ಕೋರ್ಟ್ ನ್ಯಾಯಾಧೀಶ (ADSJ) ವಿಕ್ರಾಂತ್ ಕುಮಾರ್ ಅವರು ಮಂಗಳವಾರ ತೀರ್ಪು ನೀಡಿದರು.
ಮೊಹಾಲಿಯ ಜಿರಾಕ್‌ಪುರ ಪೊಲೀಸ್ ಠಾಣೆಯಲ್ಲಿ ಮಹಿಳೆಯೊಬ್ಬರು ನೀಡಿದ ದೂರಿನ ಆಧಾರದ ಮೇಲೆ ಸಿಂಗ್ ವಿರುದ್ಧ ಲೈಂಗಿಕ ಕಿರುಕುಳಕ್ಕೆ ಸಂಬಂಧಿಸಿದ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 376 (ಅತ್ಯಾಚಾರ) 323( ಸ್ವಯಂಪ್ರೇರಿತವಾಗಿ ನೋವುಂಟುಮಾಡುವ ಶಿಕ್ಷೆ) ಮತ್ತು 506 (ಕ್ರಿಮಿನಲ್ ಬೆದರಿಕೆ) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿತ್ತು.
ವಿದೇಶಕ್ಕೆ ಕರೆದುಕೊಂಡು ಹೋಗುವುದಾಗಿ ಆಮಿಷವೊಡ್ಡಿದ್ದ ಬಜೀಂದರ್, ತನ್ನ ಮೇಲೆ ಅತ್ಯಾಚಾರ ಎಸಗಿ ವಿಡಿಯೋ ಮಾಡಿಕೊಂಡಿದ್ದ ಎಂದು ಮಹಿಳೆ ದೂರಿನಲ್ಲಿ ಆರೋಪಿಸಿದ್ದರು. ಈ ಪ್ರಕರಣದಲ್ಲಿ ಬಜೀಂದರ್ ಸಿಂಗ್ ದೋಷಿ ಎಂದು ಮಾರ್ಚ್ 27 ರಂದು ನ್ಯಾಯಾಲಯ ತೀರ್ಪು ನೀಡಿತ್ತು.
ಮಂಗಳವಾರ ಶಿಕ್ಷೆ ಪ್ರಕಟ ಹಿನ್ನೆಲೆಯಲ್ಲಿ ನ್ಯಾಯಾಲಯದ ಆವರಣದಲ್ಲಿ ಬಿಗಿ ಬಂದೋಬಸ್ತ್ ಮಾಡಲಾಗಿತ್ತು. ಹೆಚ್ಚಿನ ಸಂಖ್ಯೆಯಲ್ಲಿ ಪೊಲೀಸರನ್ನು ನಿಯೋಜಿಸಲಾಗಿತ್ತು.
Advertisement