
ಅಹಮದಾಬಾದ್: ಗುಜರಾತ್ ನ ಅಹಮದಾಬಾದ್‌ನಲ್ಲಿ ನಡೆಯುತ್ತಿರುವ ಕಾಂಗ್ರೆಸ್ ಕಾರ್ಯಕಾರಿ ಸಮಿತಿ(ಸಿಡಬ್ಲ್ಯೂಸಿ) ಸಭೆ ಮತ್ತು ಅಖಿಲ ಭಾರತ ಕಾಂಗ್ರೆಸ್ ಸಮಿತಿ(ಎಐಸಿಸಿ) ರಾಷ್ಟ್ರೀಯ ಅಧಿವೇಶನದಲ್ಲಿ ಮಂಗಳವಾರ ಹಿರಿಯ ಕಾಂಗ್ರೆಸ್ ನಾಯಕ ಮತ್ತು ಮಾಜಿ ಕೇಂದ್ರ ಹಣಕಾಸು ಸಚಿವ ಪಿ. ಚಿದಂಬರಂ ತೀವ್ರ ಅಸ್ವಸ್ಥಗೊಂಡು ಕುಸಿದು ಬಿದ್ದ ಘಟನೆ ನಡೆದಿದೆ.
ಸಬರಮತಿ ಆಶ್ರಮದಲ್ಲಿ ನಡೆಯುತ್ತಿರುವ ಕಾಂಗ್ರೆಸ್ ಅಧಿವೇಶನದಲ್ಲಿ ಭಾಗವಹಿಸಿದ್ದ ಪಿ ಚಿದಂಬರಂ ಅವರ ಆರೋಗ್ಯದಲ್ಲಿ ಏರುಪೇರಾಗಿದೆ. ಬಿಸಿಲಿನ ಬೇಗೆಯಿಂದ ತೀವ್ರ ಅಸ್ವಸ್ಥಗೊಂಡು ಕುಸಿದು ಬಿದ್ದ ಚಿದಂಬರಂ ಅವರನ್ನು ತಕ್ಷಣ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಚಿದಂಬರಂ ಅವರ ಪುತ್ರ ಮತ್ತು ಸಂಸದ ಕಾರ್ತಿ ಚಿದಂಬರಂ ಅವರು ಈ ಕುರಿತು ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದು, 'ನನ್ನ ತಂದೆ ಚಿದಂಬರಂ ಅವರು ಅಹಮದಾಬಾದ್‌ನಲ್ಲಿ ತೀವ್ರ ಬಿಸಿಲಿನಿಂದ ಮತ್ತು ನಿರ್ಜಲೀಕರಣದಿಂದಾಗಿ ಅಸ್ವಸ್ಥಗೊಂಡಿದ್ದು, ಅವರನ್ನು ಜೈಡಸ್ ಆಸ್ಪತ್ರೆ ದಾಖಲಿಸಲಾಗಿದೆ. ಅವರನ್ನು ತೀವ್ರ ನಿಗಾದಲ್ಲಿ ಇರಿಸಲಾಗಿದ್ದು, ವೈದ್ಯರು ಆರೋಗ್ಯ ಪರಿಶೀಲಿಸುತ್ತಿದ್ದಾರೆ' ಎಂದು ಹೇಳಿದ್ದಾರೆ.
ಸದ್ಯ ಚಿದಂಬರಂ ಅವರ ಆರೋಗ್ಯ ಸ್ಥಿರವಾಗಿದ್ದು, ವೈದ್ಯಕೀಯ ಮೇಲ್ವಿಚಾರಣೆಯಲ್ಲಿದ್ದಾರೆ ಎಂದು ಹೇಳಲಾಗಿದೆ.
Advertisement