
ಚೆನ್ನೈ: ವಕ್ಫ್ (ತಿದ್ದುಪಡಿ) ಕಾಯ್ದೆಯ ಸಾಂವಿಧಾನಿಕ ಸಿಂಧುತ್ವವನ್ನು ಪ್ರಶ್ನಿಸಿ ಸೂಪರ್ ಸ್ಟಾರ್ ಹಾಗೂ ತಮಿಳಗ ವೆಟ್ರಿ ಕಳಗಂ (TVK)ಅಧ್ಯಕ್ಷ ದಳಪತಿ ವಿಜಯ್ ಅವರು ಸುಪ್ರೀಂಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದಾರೆ.
ನಟ ವಿಜಯ್ ಸಲ್ಲಿಸಿರುವ ಅರ್ಜಿಯು ಏಪ್ರಿಲ್ 16 ರಂದು ಮುಖ್ಯ ನ್ಯಾಯಮೂರ್ತಿ ಸಂಜೀವ್ ಖನ್ನಾ ನೇತೃತ್ವದ ತ್ರಿಸದಸ್ಯ ಪೀಠದ ಮುಂದೆ ವಿಚಾರಣೆಗೆ ಬರಲಿದೆ.
ಈ ಕಾಯ್ದೆಯನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ಹಲವಾರು ಅರ್ಜಿಗಳನ್ನು ಸಲ್ಲಿಸಲಾಗಿದೆ. ಇದು ಮುಸ್ಲಿಂ ಸಮುದಾಯದ ಬಗ್ಗೆ ತಾರತಮ್ಯವನ್ನು ಹೊಂದಿದ್ದು, ಅವರ ಮೂಲಭೂತ ಹಕ್ಕುಗಳನ್ನು ಉಲ್ಲಂಘಿಸುತ್ತದೆ ಎಂದು ಅರ್ಜಿಗಳಲ್ಲಿ ಉಲ್ಲೇಖಿಸಲಾಗಿದೆ.
ವಕ್ಫ್ (ತಿದ್ದುಪಡಿ) ಕಾಯ್ದೆಯ ವಿರುದ್ಧ ನ್ಯಾಯಾಲಯದ ಮೆಟ್ಟಿಲೇರಿರುವವರಲ್ಲಿ ಆಲ್ ಇಂಡಿಯಾ ಮಜ್ಲಿಸ್-ಎ-ಇತ್ತೆಹಾದುಲ್ ಮುಸ್ಲಿಮೀನ್ (ಎಐಎಂಐಎಂ) ಸಂಸದ ಅಸಾದುದ್ದೀನ್ ಓವೈಸಿ, ಕಾಂಗ್ರೆಸ್ ಸಂಸದರಾದ ಮೊಹಮ್ಮದ್ ಜಾವೇದ್ ಮತ್ತು ಇಮ್ರಾನ್ ಪ್ರತಾಪ್‌ಘರ್ಹಿ, ಎಎಪಿ ಶಾಸಕ ಅಮಾನತುಲ್ಲಾ ಖಾನ್ ಮತ್ತು ಆಜಾದ್ ಸಮಾಜ ಪಕ್ಷದ ಮುಖ್ಯಸ್ಥ ಚಂದ್ರಶೇಖರ್ ಆಜಾದ್ ಸೇರಿದ್ದಾರೆ.
ಸಮಾಜವಾದಿ ಪಕ್ಷದ ಸಂಸದ ಸಂಭಾಲ್ ಜಿಯಾ ಉರ್ ರೆಹಮಾನ್ ಬಾರ್ಕ್, ಜಮೀಯತ್ ಉಲೇಮಾ-ಇ-ಹಿಂದ್ ಅಧ್ಯಕ್ಷ ಮೌಲಾನಾ ಅರ್ಷದ್ ಮದನಿ, ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ; ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್ ಮತ್ತಿತರ ನಾಗರಿಕ ಹಕ್ಕುಗಳ ರಕ್ಷಣೆಗಾಗಿ ಸ್ಥಾಪನೆಯಾಗಿರುವ ಸ್ವಯಂ ಸೇವಾ ಸಂಸ್ಥೆಗಳು ವಕ್ಫ್ ತಿದ್ದುಪಡಿ ಕಾಯ್ದೆ ವಿರೋಧಿಸಿ ಸುಪ್ರೀಂಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿವೆ.
ತಮಿಳುನಾಡಿನ ಆಡಳಿತ ಪಕ್ಷ ಡಿಎಂಕೆ ಕೂಡ ಕಾನೂನು ಹೋರಾಟದಲ್ಲಿ ಕೈ ಜೋಡಿಸಿದೆ. ವಕ್ಫ್ ಮಸೂದೆಗೆ ಸಂಬಂಧಿಸಿದ ಜಂಟಿ ಸಂಸದೀಯ ಸಮಿತಿಯ ಸದಸ್ಯರಾಗಿದ್ದ ಸಂಸದ ಎ ರಾಜಾ ಅವರು ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ.
ಈ ಮಧ್ಯೆ, ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ್ದು, ವಕ್ಫ್ ಕಾಯ್ದೆ ವಿಚಾರದಲ್ಲಿ ಯಾವುದೇ ಆದೇಶ ಹೊರಡಿಸುವ ಮುನ್ನ ವಿಚಾರಣೆ ನಡೆಸುವಂತೆ ಕೋರಿದೆ. ಹೈಕೋರ್ಟ್‌ಗಳು ಮತ್ತು ಸುಪ್ರೀಂ ಕೋರ್ಟ್‌ನಲ್ಲಿ ಯಾವುದೇ ಅರ್ಜಿಯ ಬಗ್ಗೆ ವಿಚಾರಣೆ ಮಾಡದೆ ಯಾವುದೇ ಆದೇಶ ಹೊರಡಿಸದಂತೆ ನೋಡಿಕೊಳ್ಳಲು ಕೇವಿಯಟ್ ಅನ್ನು ಸಲ್ಲಿಸಲಾಗುತ್ತದೆ.
Advertisement