
ನವದೆಹಲಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ಸುಪ್ರೀಂ ಕೋರ್ಟ್ ಇತ್ತೀಚೆಗೆ ನೀಡಿರುವ ಹೇಳಿಕೆಗಳು ಅನಗತ್ಯ ಎಂದು ಮಂಗಳವಾರ ವಿರೋಧ ಪಕ್ಷವಾದ ಇಂಡಿಯಾ ಬಣ ಹೇಳಿದೆ. ರಾಷ್ಟ್ರೀಯ ಹಿತಾಸಕ್ತಿಯ ವಿಷಯಗಳಲ್ಲಿ ಸರ್ಕಾರವನ್ನು ಪ್ರಶ್ನಿಸುವುದು ರಾಜಕೀಯ ಪಕ್ಷಗಳ ಪ್ರಜಾಸತ್ತಾತ್ಮಕ ಹಕ್ಕು ಮತ್ತು ಕರ್ತವ್ಯ ಎಂದು ಅದು ಪ್ರತಿಪಾದಿಸಿದೆ.
ಇಂದು ಸಂಸತ್ತಿನಲ್ಲಿ ಕರೆಯಲಾಗಿದ್ದ ಇಂಡಿಯಾ ಬ್ಲಾಕ್ ಕೂಟದ ನಾಯಕರ ಸಭೆಯಲ್ಲಿ, ನ್ಯಾಯಮೂರ್ತಿಗಳಾದ ದೀಪಂಕರ್ ದತ್ತ ಮತ್ತು ಆಗಸ್ಟೀನ್ ಜಾರ್ಜ್ ಮಸಿಹ್ ಅವರನ್ನೊಳಗೊಂಡ ಪೀಠವು ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ ಭಾರತೀಯ ಸೇನೆಯ ಬಗ್ಗೆ ರಾಹುಲ್ ಗಾಂಧಿಯವರು ಮಾಡಿರುವ ಆರೋಪದ ಕುರಿತು ಸುಪ್ರೀಂ ಕೋರ್ಟ್ ನೀಡಿದ ಹೇಳಿಕೆಗಳ ಬಗ್ಗೆ ಇಂಡಿಯಾ ಬಣದ ಸದಸ್ಯರು ಚರ್ಚಿಸಿದರು.
ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಸಭೆಯಲ್ಲಿ ಹಾಜರಿದ್ದರು. ನಂತರ ಬಿಡುಗಡೆಯಾದ ಜಂಟಿ ಹೇಳಿಕೆಯಲ್ಲಿ, ಮೈತ್ರಿಕೂಟವು, ಹಾಲಿ ನ್ಯಾಯಾಧೀಶರು ರಾಜಕೀಯ ಪಕ್ಷಗಳ ಪ್ರಜಾಸತ್ತಾತ್ಮಕ ಹಕ್ಕುಗಳ ಮೇಲೆ ಅನಗತ್ಯವಾದ ಹೇಳಿಕೆ ನೀಡಿದ್ದಾರೆ ಎಂದು ಇಂಡಿಯಾ ಮೈತ್ರಿಕೂಟದ ಎಲ್ಲಾ ಪಕ್ಷಗಳ ನಾಯಕರು ಒಪ್ಪಿಕೊಂಡಿದ್ದಾರೆ ಎಂದು ಹೇಳಿದೆ.
ರಾಷ್ಟ್ರೀಯ ಹಿತಾಸಕ್ತಿಯ ವಿಷಯಗಳ ಬಗ್ಗೆ ಅಭಿಪ್ರಾಯ ನೀಡುವುದು ರಾಜಕೀಯ ಪಕ್ಷಗಳ, ವಿಶೇಷವಾಗಿ ವಿರೋಧ ಪಕ್ಷ ನಾಯಕರ ಜವಾಬ್ದಾರಿಯಾಗಿದೆ. ನಮ್ಮ ಗಡಿಗಳನ್ನು ರಕ್ಷಿಸುವಲ್ಲಿ ಸರ್ಕಾರವು ವಿಫಲವಾದಾಗ, ಅದನ್ನು ಹೊಣೆಗಾರರನ್ನಾಗಿ ಮಾಡುವುದು ಪ್ರತಿಯೊಬ್ಬ ನಾಗರಿಕನ ನೈತಿಕ ಕರ್ತವ್ಯವಾಗಿದೆ ಎಂದು ಹೇಳಿಕೆಯಲ್ಲಿ ತಿಳಿಸಿದೆ.
ಸಂಸತ್ತಿನ ಸಂಕೀರ್ಣದಲ್ಲಿ ಸುದ್ದಿಗಾರರೊಂದಿಗೆ ಪ್ರತ್ಯೇಕವಾಗಿ ಮಾತನಾಡಿದ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ, ರಾಹುಲ್ ಗಾಂಧಿಯವರು ದೇಶದ ಸಶಸ್ತ್ರ ಪಡೆಗಳ ಬಗ್ಗೆ ಅತ್ಯುನ್ನತ ಗೌರವ ಹೊಂದಿದ್ದಾರೆ ಎಂದರು.
Advertisement