
ಶ್ರೀನಗರ: ಜಮ್ಮು ಮತ್ತು ಕಾಶ್ಮೀರ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಅವರು ಶುಕ್ರವಾರ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಕಿಶ್ತ್ವಾರ್ ಜಿಲ್ಲೆಯ ಚಸೋಟಿ ಪ್ರದೇಶದಲ್ಲಿ ಸಂಭವಿಸಿದ ಭೀಕರ ಮೇಘಸ್ಫೋಟದ ಬಗ್ಗೆ ಮಾಹಿತಿ ನೀಡಿದ್ದಾರೆ.
ಈ ಘಟನೆಯಲ್ಲಿ 60 ಜನರು ಸಾವಿಗೀಡಾಗಿದ್ದಾರೆ ಮತ್ತು 100 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಎಂದಿದ್ದಾರೆ.
'ಪ್ರಧಾನಿ ನರೇಂದ್ರ ಮೋದಿ ಅವರಿಂದ ನನಗೆ ಕರೆ ಬಂದಿದೆ. ಕಿಶ್ತ್ವಾರ್‌ನ ಪರಿಸ್ಥಿತಿ ಮತ್ತು ಆಡಳಿತವು ತೆಗೆದುಕೊಳ್ಳುತ್ತಿರುವ ಕ್ರಮಗಳ ಬಗ್ಗೆ ನಾನು ಅವರಿಗೆ ವಿವರಿಸಿದ್ದೇನೆ. ದುರಂತ ಮೇಘಸ್ಫೋಟದಿಂದ ಹಾನಿಗೊಳಗಾದ ತಮ್ಮ ಸರ್ಕಾರ ಮತ್ತು ಜನರಿಗೆ ಪ್ರಧಾನ ಮಂತ್ರಿಯವರ ಬೆಂಬಲ ಮತ್ತು ಕೇಂದ್ರವು ಒದಗಿಸಿದ ಎಲ್ಲ ಸಹಾಯಕ್ಕಾಗಿ ಕೃತಜ್ಞರಾಗಿರುವುದಾಗಿ' ಎಂದು ಅಬ್ದುಲ್ಲಾ ಎಕ್ಸ್‌ನಲ್ಲಿ ಪೋಸ್ಟ್‌ನಲ್ಲಿ ಬರೆದಿದ್ದಾರೆ.
ಇದಕ್ಕೂ ಮೊದಲು, ಇಲ್ಲಿನ ಬಕ್ಷಿ ಕ್ರೀಡಾಂಗಣದಲ್ಲಿ ನಡೆದ ಸ್ವಾತಂತ್ರ್ಯ ದಿನಾಚರಣೆಯ ಸಮಾರಂಭದಲ್ಲಿ ಮಾತನಾಡಿದ ಅಬ್ದುಲ್ಲಾ, ಗುರುವಾರ ಸಂಭವಿಸಿದ ದುರಂತ ಘಟನೆಯಲ್ಲಿ ಕನಿಷ್ಠ 60 ಜನರು ಪ್ರಾಣ ಕಳೆದುಕೊಂಡಿದ್ದಾರೆ ಮತ್ತು 100ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಎಂದು ಹೇಳಿದರು.
'ಹವಾಮಾನ ಮುನ್ಸೂಚನೆಯ ಬಗ್ಗೆ ನಮಗೆ ಮೊದಲೇ ತಿಳಿದಿದ್ದರಿಂದ ಆಡಳಿತವು ಯಾವುದೇ ತಪ್ಪುಗಳನ್ನು ಮಾಡಿದೆಯೇ ಅಥವಾ ಸರಿಯಾಗಿ ಕಾರ್ಯನಿರ್ವಹಿಸಲು ವಿಫಲವಾಗಿದೆಯೇ ಎಂದು ನಿರ್ಧರಿಸುವುದು ಮುಖ್ಯ' ಎಂದು ಅವರು ಹೇಳಿದರು.
ಕಳೆದ ವರ್ಷ ಅಕ್ಟೋಬರ್‌ನಲ್ಲಿ ಕೇಂದ್ರಾಡಳಿತ ಪ್ರದೇಶದ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ನಂತರ ಮೊದಲ ಸ್ವಾತಂತ್ರ್ಯ ದಿನಾಚರಣೆಯ ಭಾಷಣದಲ್ಲಿ, ಕಿಶ್ತ್ವಾರ್‌ನ ದುಃಖಿತ ಕುಟುಂಬಗಳಿಗೆ ಸಂತಾಪ ಸೂಚಿಸುವ ಮೂಲಕ ತಮ್ಮ ಭಾಷಣ ಪ್ರಾರಂಭಿಸಿದರು.
'ಇಂದು ಸ್ವಾತಂತ್ರ್ಯ ದಿನವನ್ನು ಆಚರಿಸುತ್ತಿರುವ ದೇಶದ ಜನರಿಗೆ ಇದು ಸಂತೋಷದ ದಿನ. ಆದರೆ, ಅದೇ ಸಮಯದಲ್ಲಿ, ಮೇಘಸ್ಫೋಟದಲ್ಲಿ ಜೀವಹಾನಿ ಹೃದಯವಿದ್ರಾವಕವಾಗಿದೆ. ಲಭ್ಯವಾಗಿರುವ ಮಾಹಿತಿ ಪ್ರಕಾರ, ಸುಮಾರು 60 ಜನರು ಪ್ರಾಣ ಕಳೆದುಕೊಂಡಿದ್ದಾರೆ ಮತ್ತು ಇನ್ನೂ ಅನೇಕರು ಕಾಣೆಯಾಗಿದ್ದಾರೆ. ಅವರ ನಿಖರ ಸಂಖ್ಯೆ ನಮಗೆ ತಿಳಿದಿಲ್ಲ. ಈ ದುರಂತ ಘಟನೆಯಲ್ಲಿ ತಮ್ಮ ಆಪ್ತರನ್ನು ಕಳೆದುಕೊಂಡವರಿಗೆ ಸಂತಾಪ ಸೂಚಿಸಲು ಈ ಅವಕಾಶವನ್ನು ಬಳಸಿಕೊಳ್ಳಲು ಬಯಸುತ್ತೇನೆ' ಎಂದು ಅವರು ಹೇಳಿದರು.
'ಗಾಯಗೊಂಡವರು ಆದಷ್ಟು ಬೇಗ ಗುಣಮುಖರಾಗಲಿ ಎಂದು ನಾನು ಪ್ರಾರ್ಥಿಸಲು ಬಯಸುತ್ತೇನೆ. ಸಂತ್ರಸ್ತರಿಗೆ ಅಗತ್ಯವಿರುವ ಎಲ್ಲ ರೀತಿಯ ಸಹಕಾರವನ್ನು ಸರ್ಕಾರ ನೀಡುತ್ತದೆ. ಮುಂದಿನ ದಿನಗಳಲ್ಲಿ ಇದು ಏಕೆ ಸಂಭವಿಸಿತು ಎಂಬುದನ್ನು ನಾವು ಕಂಡುಹಿಡಿಯಬೇಕು. ಅಮೂಲ್ಯ ಜೀವಗಳನ್ನು ಉಳಿಸಲು ಸರ್ಕಾರ ಮತ್ತು ಆಡಳಿತದಿಂದ ಹೆಚ್ಚಿನ ಕ್ರಮಗಳನ್ನು ತೆಗೆದುಕೊಳ್ಳಬಹುದೇ? ಎಂಬುದನ್ನು ನೋಡಬೇಕು. ಈ ನಿಟ್ಟಿನಲ್ಲಿ ನಾವು ನಮ್ಮನ್ನು ಹೊಣೆಗಾರರನ್ನಾಗಿ ಮಾಡಿಕೊಳ್ಳಬೇಕು' ಎಂದು ಅವರು ಹೇಳಿದರು.
Advertisement