
ನವದೆಹಲಿ: ಆಡಳಿತಾರೂಢ ಎನ್‌ಡಿಎ ಮೈತ್ರಿಕೂಟ ತಮ್ಮನ್ನು ಉಪರಾಷ್ಟ್ರಪತಿ ಅಭ್ಯರ್ಥಿಯಾಗಿ ಘೋಷಿಸಿದ ಒಂದು ದಿನದ ನಂತರ, ಮಹಾರಾಷ್ಟ್ರ ರಾಜ್ಯಪಾಲ ಸಿ.ಪಿ. ರಾಧಾಕೃಷ್ಣನ್ ಅವರು ಸೋಮವಾರ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದರು.
ಸಿ.ಪಿ. ರಾಧಾಕೃಷ್ಣನ್ ಅವರು ಇಂದು ಎನ್‌ಡಿಎನ ವಿವಿಧ ಸಭೆಗಳಲ್ಲಿ ಭಾಗವಹಿಸಲು ದೆಹಲಿಗೆ ಆಗಮಿಸಿದ್ದು, ಹಲವಾರು ನಾಯಕರನ್ನು ಭೇಟಿಯಾದರು.
ಸಭೆಯ ನಂತರ, ಪ್ರಧಾನಿ ಮೋದಿ ತಮ್ಮ ಎಕ್ಸ್‌ನಲ್ಲಿ ಉಪ ರಾಷ್ಟ್ರಪತಿ ಅಭ್ಯರ್ಥಿಯ ಭೇಟಿಯ ಬಗ್ಗೆ ಪೋಸ್ಟ್ ಮಾಡಿದ್ದಾರೆ. "ಸಿಪಿ. ರಾಧಾಕೃಷ್ಣನ್ ಜಿ ಅವರನ್ನು ಭೇಟಿಯಾದೆ. ಎನ್‌ಡಿಎ ಉಪರಾಷ್ಟ್ರಪತಿ ಅಭ್ಯರ್ಥಿಯಾಗಿ ಆಯ್ಕೆಯಾಗಿದ್ದಕ್ಕಾಗಿ ನನ್ನ ಶುಭಾಶಯಗಳನ್ನು ತಿಳಿಸಿದೆ ಎಂದು ಹೇಳಿದ್ದಾರೆ.
ರಾಧಾಕೃಷ್ಣನ್ ಅವರ ಸುದೀರ್ಘ ಸಾರ್ವಜನಿಕ ಸೇವೆ ಮತ್ತು ವಿವಿಧ ಕ್ಷೇತ್ರಗಳಲ್ಲಿನ ಅನುಭವವು ನಮ್ಮ ರಾಷ್ಟ್ರವನ್ನು ಬಹಳವಾಗಿ ಶ್ರೀಮಂತಗೊಳಿಸುತ್ತದೆ. ಅವರು ಸಮರ್ಪಣೆ ಮತ್ತು ದೃಢಸಂಕಲ್ಪದಿಂದ ರಾಷ್ಟ್ರಕ್ಕೆ ಸೇವೆ ಸಲ್ಲಿಸುವುದನ್ನು ಮುಂದುವರಿಸಲಿ" ಎಂದು ಪ್ರಧಾನಿ ಮೋದಿ ಪೋಸ್ಟ್ ಮಾಡಿದ್ದಾರೆ.
ರಾಧಾಕೃಷ್ಣನ್ ಅವರು ಆಗಸ್ಟ್ 20 ರಂದು ತಮ್ಮ ನಾಮಪತ್ರ ಸಲ್ಲಿಸುವ ಸಾಧ್ಯತೆಯಿದೆ. ಅಲ್ಲದೆ ಮಂಗಳವಾರ ನಡೆಯಲಿರುವ ಎನ್‌ಡಿಎ ಸಂಸದೀಯ ಪಕ್ಷದ ಸಭೆಯಲ್ಲಿ ಅವರನ್ನು ಸನ್ಮಾನಿಸುವ ನಿರೀಕ್ಷೆಯಿದೆ.
Advertisement