
ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯವರ ಪದವಿಯ ಕುರಿತು ಮಾಹಿತಿ ಬಹಿರಂಗಪಡಿಸುವಂತೆ ಕೇಂದ್ರ ಮಾಹಿತಿ ಆಯೋಗ (ಸಿಐಸಿ) ನೀಡಿದ್ದ ಆದೇಶವನ್ನು ದೆಹಲಿ ಹೈಕೋರ್ಟ್ ಸೋಮವಾರ ರದ್ದುಗೊಳಿಸಿದೆ.
ಸಿಐಸಿ ಆದೇಶ ಪ್ರಶ್ನಿಸಿ ದೆಹಲಿ ವಿಶ್ವವಿದ್ಯಾಲಯ(ಡಿಯು) ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ್ದ ನ್ಯಾಯಮೂರ್ತಿ ಸಚಿನ್ ದತ್ತಾ ಅವರು, ಫೆಬ್ರವರಿ 27 ರಂದು ತೀರ್ಪನ್ನು ಕಾಯ್ದಿರಿಸಿದರು.
ಇಂದು ತೀರ್ಪು ಪ್ರಕಟಿಸಿದ ನ್ಯಾಯಮೂರ್ತಿ ಸಚಿನ್ ದತ್ತಾ ಅವರು, ಸಿಐಸಿಯ ಆಕ್ಷೇಪಾರ್ಹ ಆದೇಶವನ್ನು ರದ್ದುಗೊಳಿಸಲಾಗಿದೆ ಎಂದು ಮುಕ್ತ ನ್ಯಾಯಾಲಯದಲ್ಲಿ ಹೇಳಿದರು.
ಪ್ರಧಾನಿ ಮೋದಿ ಅವರ ಶೈಕ್ಷಣಿಕ ದಾಖಲೆ ಮತ್ತು ಪದವಿ ಬಗ್ಗೆ ಮಾಹಿತಿ ಬಹಿರಂಗಪಡಿಸುವ ಅಗತ್ಯ ಇಲ್ಲ. ಆದರೆ ಈ ವಿಷಯದ ಬಗ್ಗೆ ಎರಡೂ ಕಡೆಯವರು ಸುಪ್ರೀಂ ಕೋರ್ಟ್ ಅನ್ನು ಸಂಪರ್ಕಿಸಬಹುದು ಎಂದು ನ್ಯಾಯಮೂರ್ತಿ ಸಚಿನ್ ದತ್ತಾ ಅವರು ಹೇಳಿದ್ದಾರೆ.
ಪ್ರಧಾನಿ ಮೋದಿ ಅವರ ವ್ಯಾಸಂಗಕ್ಕೆ ಸಂಬಂಧಿಸಿದ ದಾಖಲೆಗಳನ್ನು ಒದಗಿಸುವಂತೆ ಕೋರಿ ನೀರಜ್ ಎಂಬವರು ಆರ್‌ಟಿಐ ಅಡಿ ಅರ್ಜಿ ಸಲ್ಲಿಸಿದ್ದರು. 1978 ರಲ್ಲಿ ಬಿಎ ಪರೀಕ್ಷೆಯಲ್ಲಿ ಉತ್ತೀರ್ಣರಾದ ಎಲ್ಲಾ ವಿದ್ಯಾರ್ಥಿಗಳ ದಾಖಲೆಗಳನ್ನು ಪರಿಶೀಲಿಸಲು ಅವಕಾಶ ನೀಡುವಂತೆ ಸಿಐಸಿ, ಡಿಸೆಂಬರ್ 21, 2016 ರಂದು ಆದೇಶ ಹೊರಡಿಸಿತ್ತು. ಇದನ್ನು ಪ್ರಶ್ನಿಸಿ ವಿವಿ ಹೈಕೋರ್ಟ್ ಮೆಟ್ಟಿಲೇರಿತ್ತು.
Advertisement