

ನವದೆಹಲಿ: ಗೋವಾದ ನೈಟ್‌ಕ್ಲಬ್'ನಲ್ಲಿ ಅಗ್ನಿ ದುರಂತ ಘಟನೆಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಹಾಗೂ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ತೀವ್ರ ಸಂತಾಪ ಸೂಚಿಸಿದ್ದು, ಮೃತರ ಕುಟುಂಬಕ್ಕೆ ಪರಿಹಾರ ಘೋಷಣೆ ಮಾಡಿದ್ದಾರೆ.
ದುರ್ಘಟನೆ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಅವರು, ಗೋವಾದ ಅರ್ಪೋರಾದಲ್ಲಿ ಸಂಭವಿಸಿದ ಅಗ್ನಿ ಅವಘಡ ತೀವ್ರ ದುಃಖ ತಂದಿದೆ. ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡವರಿಗೆ ಸಂತಾಪ ಸೂಚಿಸುತ್ತೇನೆ. ಗಾಯಾಳುಗಳು ಆದಷ್ಟು ಬೇಗ ಗುಣಮುಖರಾಗಲಿ. ಪರಿಸ್ಥಿತಿಯ ಬಗ್ಗೆ ಗೋವಾ ಮುಖ್ಯಮಂತ್ರಿ ಡಾ. ಪ್ರಮೋದ್ ಸಾವಂತ್ ಜಿ ಅವರೊಂದಿಗೆ ಮಾತನಾಡಿದ್ದೇನೆ. ರಾಜ್ಯ ಸರ್ಕಾರವು ಸಂತ್ರಸ್ತರಿಗೆ ಸಾಧ್ಯವಿರುವ ಎಲ್ಲ ಸಹಾಯವನ್ನು ನೀಡುತ್ತಿದೆ ಎಂದು ಹೇಳಿದ್ದಾರೆ.
ಅಲ್ಲದೆ, ಮೃತರ ಕುಟುಂಬಕ್ಕೆ ಪ್ರಧಾನಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿಯಿಂದ ತಲಾ ರೂ.2 ಲಕ್ಷ ಹಾಗೂ ಗಾಯಾಳುಗಳಿಗೆ 50,000 ರೂ ಪರಿಹಾರ ನೀಡುವುದಾಗಿ ಘೋಷಣೆ ಮಾಡಿದ್ದಾರೆ.
ಇನ್ನು ಘಟನೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಕೂಡ ತೀವ್ರ ಸಂತಾಪ ಸೂಚಿಸಿದ್ದಾರೆ. ಉತ್ತರ ಗೋವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಬೆಂಕಿ ಅವಘಡದಿಂದ ಅಮೂಲ್ಯ ಜೀವಗಳು ಬಲಿಯಾಗಿದ್ದು, ಘಟನೆಯಿಂದ ತೀವ್ರ ನೋವುಂಟಾಗಿದೆ. ಮೃತರ ಕುಟುಂಬಗಳಿಗೆ ನನ್ನ ಹೃತ್ಪೂರ್ವಕ ಸಂತಾಪಗಳು. ಗಾಯಗೊಂಡವರು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ನಾನು ಪ್ರಾರ್ಥಿಸುತ್ತೇನೆಂದು ತಿಳಿಸಿದ್ದಾರೆ.
Advertisement