

ಪಣಜಿ: ಗೋವಾದ 'ಬಿರ್ಚ್ ಬೈ ರೋಮಿಯೋ ಲೇನ್' ನೈಟ್‌ಕ್ಲಬ್‌ನಲ್ಲಿ ಸಂಭವಿಸಿದ ಭಾರಿ ಬೆಂಕಿ ಅವಘಡದಲ್ಲಿ ಮಹಿಳೆಯರು, ಪ್ರವಾಸಿಗರು ಸೇರಿ ಒಟ್ಟು 25 ಮಂದಿ ಸಾವನ್ನಪ್ಪಿದ ಘಟನೆ ಬೆನ್ನಲ್ಲೇ ಪೊಲೀಸರು ನಾಲ್ವರನ್ನು ಬಂಧನಕ್ಕೊಳಪಡಿಸಿದ್ದು, ಮೂವರು ಅಧಿಕಾರಿಗಳನ್ನು ಅಮಾನತು ಮಾಡಿದ್ದಾರೆ.
ಕ್ಲಬ್‌ನ ಮುಖ್ಯ ಜನರಲ್ ಮ್ಯಾನೇಜರ್ ರಾಜೀವ್ ಮೋಡಕ್, ಜನರಲ್ ಮ್ಯಾನೇಜರ್ ವಿವೇಕ್ ಸಿಂಗ್, ಬಾರ್ ಮ್ಯಾನೇಜರ್ ರಾಜೀವ್ ಸಿಂಘಾನಿಯಾ ಮತ್ತು ಗೇಟ್ ಮ್ಯಾನೇಜರ್ ರಿಯಾನ್ಶು ಠಾಕೂರ್ ಎಂಬುವವರನ್ನು ಬಂಧಿಸಲಾಗಿದೆ ಎಂದು ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಅವರು ಮಾಹಿತಿ ನೀಡಿದ್ದಾರೆ.
ಇದಲ್ಲದೆ ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಹಾಗೂ ಕಾರ್ಯಕ್ರಮ ಆಯೋಜಕರ ವಿರುದ್ಧವೂ ಎಫ್‌ಐಆರ್ ದಾಖಲಿಸಲಾಗಿದೆ ಎಂದು ತಿಳಿಸಿದ್ದಾರೆ.
ಈ ನಡುವೆ ನೈಟ್‌ಕ್ಲಬ್ ಕಾರ್ಯಾಚರಣೆಯನ್ನು ಪ್ರಾರಂಭಿಸಲು ಅವಕಾಶ ನೀಡುವಲ್ಲಿ ನಿಯಮಗಳನ್ನು ಪಾಲನೆ ಮಾಡದೆ, ನಿರ್ಲಕ್ಷ್ಯ ತೋರಿದ ಪಂಚಾಯತ್‌ಗಳ ನಿರ್ದೇಶಕರು ಸೇರಿದಂತೆ ಮೂವರು ಹಿರಿಯ ಅಧಿಕಾರಿಗಳನ್ನು ಅಮಾನತುಗೊಳಿಸಲಾಗಿದೆ ಎಂದು ತಿಳಿದುಬಂದಿದೆ.
ಉತ್ತರ ಗೋವಾದ ಅರ್ಪೋರಾದ ರೋಮಿಯೋ ಲೇನ್‌ನಲ್ಲಿರುವ ಫೇಮಸ್ ನೈಟ್ ಕ್ಲಬ್‌ನಲ್ಲಿ ತಡರಾತ್ರಿ 1 ಗಂಟೆ ಸುಮಾರಿಗೆ ಅಗ್ನಿ ಅವಘಡ ಸಂಭವಿಸಿದೆ. ದುರ್ಘಟನೆಯಲ್ಲಿ 25 ಮಂದಿ ಸಾವನ್ನಪ್ಪಿದ್ದಾರೆ.
ಆರಂಭದಲ್ಲಿ ಕ್ಲಬ್ ಮುಚ್ಚಲು ಸಿದ್ಧತೆ ಮಾಡಿಕೊಳ್ಳುತ್ತಿದ್ದಾಗ ಅಡುಗೆ ಮನೆಯ ಬಳಿ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಅವಘಡ ಸಂಭವಿಸಿದೆ ಎನ್ನಲಾಗುತ್ತಿತ್ತು. ಇದೀಗ ಪಟಾಕಿ ಸಿಡಿಸಿದ ಪರಿಣಾಮ ಬೆಂಕಿ ಹೊತ್ತಿಕೊಂಡಿರಬಹುದು ಎಂಬ ಮಾತುಕತುಗಳು ಕೇಳಿ ಬರುತ್ತಿವೆ. ಆದರೆ, ಈ ಬಗ್ಗೆ ಅಧಿಕಾರಿಗಳು ಯಾವುದೇ ಸ್ಪಷ್ಟ ಮಾಹಿತಿಗಳನ್ನು ನೀಡಿಲ್ಲ. ತನಿಖೆ ಪೂರ್ಣಗೊಂಡ ಬಳಿಕವಷ್ಟೇ ಸತ್ಯಾಸತ್ಯತೆಗಳು ಬಹಿರಂಗಗೊಳ್ಳಲಿವೆ.
Advertisement