ಆಂಧ್ರಪ್ರದೇಶ: ಚಿಂತೂರು-ಮರೇಡುಮಿಲ್ಲಿ ಘಾಟ್ ರಸ್ತೆಯಲ್ಲಿ ಬಸ್ ಕಂದಕಕ್ಕೆ ಉರುಳಿಬಿದ್ದು 9 ಯಾತ್ರಿಕರು ಸಾವು, 22 ಮಂದಿಗೆ ಗಾಯ-Video
ವಿಶಾಖಪಟ್ಟಣಂ: ಚಿಂತೂರು-ಮರೇಡುಮಿಲ್ಲಿ ಘಾಟ್ ರಸ್ತೆಯಲ್ಲಿ ಶುಕ್ರವಾರ ನಸುಕಿನ ಜಾವ ಖಾಸಗಿ ಟ್ರಾವೆಲ್ ಬಸ್ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿ ಬಿದ್ದ ಪರಿಣಾಮ ಕನಿಷ್ಠ 9 ಮಂದಿ ಪ್ರಯಾಣಿಕರು ಮೃತಪಟ್ಟಿದ್ದಾರೆ.
ಭದ್ರಾಚಲಂ ದೇವಸ್ಥಾನದ ದರ್ಶನ ಪಡೆದು ಅನ್ನಾವರಂ ಕಡೆಗೆ 35 ಮಂದಿ ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಬಸ್ ಇದಾಗಿತ್ತು. ಆರಂಭಿಕ ಮಾಹಿತಿಯ ಪ್ರಕಾರ, ಕನಿಷ್ಠ ಒಂಬತ್ತು ಜನರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಇಪ್ಪತ್ತೆರಡು ಜನರು ಗಾಯಗೊಂಡಿದ್ದು, ಚಿಕಿತ್ಸೆಗಾಗಿ ಹತ್ತಿರದ ವೈದ್ಯಕೀಯ ಸೌಲಭ್ಯಗಳಿಗೆ ಸ್ಥಳಾಂತರಿಸಲಾಗುತ್ತಿದೆ. ಎಲ್ಲರೂ ಚಿತ್ತೂರು ಜಿಲ್ಲೆಯ ನಿವಾಸಿಗಳಾಗಿದ್ದು, ಅಪಘಾತದ ಸಮಯದಲ್ಲಿ ಅವರನ್ನು ತೀರ್ಥಯಾತ್ರೆಗೆ ಕರೆದೊಯ್ಯಲಾಗಿತ್ತು.
ರಾಜುಗರಿಮೆಟ್ಟ ತಿರುವಿನಲ್ಲಿ ಈ ಘಟನೆ ಸಂಭವಿಸಿದ್ದು, ಚಾಲಕ ವಾಹನದ ನಿಯಂತ್ರಣ ಕಳೆದುಕೊಂಡು ಕಂದಕಕ್ಕೆ ಬಸ್ ಉರುಳಿ ಬಿದ್ದಿತು ಎಂದು ಹೇಳಲಾಗುತ್ತಿದೆ.
ಮಾಹಿತಿ ಪಡೆದ ನಂತರ ಪೊಲೀಸ್ ಸಿಬ್ಬಂದಿ ಮತ್ತು ಸ್ಥಳೀಯ ನಿವಾಸಿಗಳು ಸ್ಥಳಕ್ಕೆ ಧಾವಿಸಿ ಕತ್ತಲೆ ಮತ್ತು ಕಠಿಣ ಭೂಪ್ರದೇಶದಲ್ಲಿ ರಕ್ಷಣಾ ಕಾರ್ಯಾಚರಣೆಯನ್ನು ಪ್ರಾರಂಭಿಸಿದರು. ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗಿದೆ.
ಸಿಎಂ ಆಘಾತ , ಸಂತಾಪ
ಅಪಘಾತದ ಸುದ್ದಿ ಕೇಳಿ ಆಂಧ್ರ ಪ್ರದೇಶ ಸಿಎಂ ಎನ್ ಚಂದ್ರಬಾಬು ನಾಯ್ಡು ಆಘಾತ ವ್ಯಕ್ತಪಡಿಸಿದ್ದಾರೆ. ಚಿತ್ತೂರು ಜಿಲ್ಲೆಯ ಅಲ್ಲೂರಿ ಸೀತಾರಾಮ ರಾಜು ಬಳಿ ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಖಾಸಗಿ ಬಸ್ ಅಪಘಾತ ಸುದ್ದಿ ನಮ್ಮನ್ನು ತೀವ್ರವಾಗಿ ಆಘಾತಗೊಳಿಸಿದೆ. ಈ ಅಪಘಾತದಲ್ಲಿ ಹಲವಾರು ಜೀವಗಳು ಬಲಿಯಾಗಿವೆ ಎಂಬುದು ಹೃದಯವಿದ್ರಾವಕ. ಅಪಘಾತದ ಬಗ್ಗೆ ಅಧಿಕಾರಿಗಳೊಂದಿಗೆ ಮಾತನಾಡಿದ್ದೇನೆ. ಸಂತ್ರಸ್ತರಿಗೆ ನೀಡಲಾಗುತ್ತಿರುವ ಸಹಾಯದ ಬಗ್ಗೆ ವಿವರಗಳನ್ನು ಸಂಗ್ರಹಿಸಿದ್ದೇನೆ.
ಗಾಯಾಳುಗಳಿಗೆ ಉತ್ತಮ ವೈದ್ಯಕೀಯ ನೆರವು ಸಿಗುವಂತೆ ನೋಡಿಕೊಳ್ಳಲು ಅಗತ್ಯವಿರುವ ಎಲ್ಲಾ ಕ್ರಮಗಳನ್ನು ತೆಗೆದುಕೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದ್ದೇನೆ. ಅಪಘಾತದಲ್ಲಿ ಪ್ರಾಣ ಕಳೆದುಕೊಂಡವರ ಕುಟುಂಬಗಳಿಗೆ ಸರ್ಕಾರ ಬೆಂಬಲವಾಗಿ ನಿಲ್ಲುತ್ತದೆ ಎಂದು ಎಕ್ಸ್ ಖಾತೆಯಲ್ಲಿ ತಿಳಿಸಿದ್ದಾರೆ.
ಪ್ರಧಾನಿ ಆಘಾತ, ಪರಿಹಾರ ಘೋಷಣೆ
ಆಂಧ್ರಪ್ರದೇಶದ ಅಲ್ಲೂರಿ ಸೀತಾರಾಮ ರಾಜು ಜಿಲ್ಲೆಯಲ್ಲಿ ಸಂಭವಿಸಿದ ಬಸ್ ಅಪಘಾತದಲ್ಲಿ ಮೃತಪಟ್ಟವರ ಬಗ್ಗೆ ಕೇಳಿ ತೀವ್ರ ನೋವಾಗಿದೆ. ಈ ಸಂಕಷ್ಟದ ಸಮಯದಲ್ಲಿ ಸಂತ್ರಸ್ತ ಜನರು ಮತ್ತು ಅವರ ಕುಟುಂಬದ ಜೊತೆ ನಿಲ್ಲುತ್ತೇವೆ. ಗಾಯಾಳುಗಳು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸುತ್ತೇನೆ.
ಮೃತರ ಸಂಬಂಧಿಕರಿಗೆ ಪಿಎಂಎನ್‌ಆರ್‌ಎಫ್‌ನಿಂದ 2 ಲಕ್ಷ ರೂಪಾಯಿ ಪರಿಹಾರ ಮತ್ತು ಗಾಯಾಳುಗಳ ಚಿಕಿತ್ಸೆಗೆ ತಲಾ 50 ಸಾವಿರ ರೂಪಾಯಿ ನೀಡಲಾಗುವುದು ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಪ್ರಕಟಿಸಿದ್ದಾರೆ.


