

ನವದೆಹಲಿ: ಬಿಜೆಪಿಗೆ ನೂತನ ಸಾರಥಿಯನ್ನು ಆಯ್ಕೆ ಮಾಡುತ್ತಿದ್ದು, ಪಕ್ಷದ ರಾಷ್ಟ್ರೀಯ ಅಧ್ಯಕ್ಷರ ಚುನಾವಣೆಗಾಗಿ ಜನವರಿ 15 ರ ನಂತರ ರಾಜ್ಯಗಳ ಬಿಜೆಪಿ ಅಧ್ಯಕ್ಷರನ್ನು ದೆಹಲಿಗೆ ಕರೆಸುವ ಸಾಧ್ಯತೆಯಿದೆ.
ಮೂಲಗಳ ಪ್ರಕಾರ, ಜನವರಿ 18 ರಿಂದ ಜನವರಿ 20 ರೊಳಗೆ ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷರ ಆಯ್ಕೆ ಪ್ರಕ್ರಿಯೆಪೂರ್ಣಗೊಳ್ಳುವ ನಿರೀಕ್ಷೆಯಿದೆ. ಬಿಜೆಪಿಯ ನೂತನ ರಾಷ್ಟ್ರೀಯ ಅಧ್ಯಕ್ಷರಾಗಿ ನಿತಿನ್ ನಬಿನ್ ನೇಮಕವನ್ನು ಜನವರಿ 20ರೊಳಗೆ ಪ್ರಕಟಿಸುವ ಸಾಧ್ಯತೆ ಇದೆ.
ಬಿಜೆಪಿ ಆಡಳಿತವಿರುವ ಅರ್ಧಕ್ಕಿಂತ ಹೆಚ್ಚು ರಾಜ್ಯಗಳಲ್ಲಿ ಆಂತರಿಕ ಚುನಾವಣಾ ಪ್ರಕ್ರಿಯೆ ಪೂರ್ಣಗೊಂಡಿದ್ದು, 37 ರಾಜ್ಯಗಳ ಪೈಕಿ 29 ರಾಜ್ಯಗಳು ತಮ್ಮ ಆಯ್ಕೆಯನ್ನು ಅಂತಿಮಗೊಳಿಸಿವೆ. ಈ ರಾಜ್ಯಗಳ ರಾಜ್ಯಾಧ್ಯಕ್ಷರು ರಾಷ್ಟ್ರೀಯ ಅಧ್ಯಕ್ಷ ಸ್ಥಾನಕ್ಕೆ ನಿತಿನ್ ನಬಿನ್ ಅವರ ಉಮೇದುವಾರಿಕೆ ಬೆಂಬಲಿಸಿ ಒಂದು ಸೆಟ್ ನಾಮಪತ್ರವನ್ನು ಸಲ್ಲಿಸುತ್ತಾರೆ. ಬಿಜೆಪಿಯ ರಾಷ್ಟ್ರೀಯ ಮಂಡಳಿಯ ಸದಸ್ಯರು ಮತ್ತೊಂದು ಸೆಟ್ ನಾಮಪತ್ರವನ್ನು ಸಲ್ಲಿಸಲಿದ್ದಾರೆ.
ನಿತಿನ್ ನಬಿನ್ ಅವರನ್ನು ಬೆಂಬಲಿಸುವ ನಾಮಪತ್ರವು ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಸಹಿಯನ್ನು ಸಹ ಹೊಂದಿರುತ್ತದೆ ಎಂದು ಮೂಲಗಳು ತಿಳಿಸಿವೆ.
ಬಹುತೇಕ ನಿತಿನ್ ನಬಿನ್ ಮಾತ್ರ ನಾಮಪತ್ರ ಸಲ್ಲಿಸುವ ಅಭ್ಯರ್ಥಿಯಾಗಿದ್ದು, ಬಿಜೆಪಿ ಮುಖ್ಯ ಚುನಾವಣಾ ಅಧಿಕಾರಿ ಕೆ. ಲಕ್ಷ್ಮಣ್ ಅವರು ನಾಮಪತ್ರ ಪರಿಶೀಲಿಸಿದ ನಂತರ ರಾಷ್ಟ್ರೀಯ ಅಧ್ಯಕ್ಷರಾಗಿ ಅವರ ಆಯ್ಕೆಯನ್ನು ಅಧಿಕೃತವಾಗಿ ಘೋಷಿಸಲಾಗುತ್ತದೆ. ಆ ಸಂದರ್ಭದಲ್ಲಿ ಬಿಜೆಪಿ ಆಡಳಿತ ಇರುವ ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳು ಮತ್ತು ರಾಜ್ಯಾಧ್ಯಕ್ಷರು ದೆಹಲಿಯಲ್ಲಿ ಇರುವಂತೆ ಸೂಚಿಸಲಾಗಿದೆ.
ನಿತಿನ್ ನಬಿನ್ ಜನವರಿ 2026 ರಿಂದ ಜನವರಿ 2029ರವರೆಗೂ ನೂತನ ರಾಷ್ಟ್ರೀಯ ಅಧ್ಯಕ್ಷರಾಗಿ ಪಕ್ಷವನ್ನು ಮುನ್ನಡೆಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
2029ಕ್ಕೆ ಲೋಕಸಭಾ ಚುನಾವಣೆ ನಡೆಯಲಿದ್ದು, ಅವರ ಸೇವಾವಧಿ ಒಂದು ವರ್ಷ ವಿಸ್ತರಣೆಯಾಗುವ ಸಾಧ್ಯತೆಯಿದೆ. 45 ವರ್ಷದ ನಿತಿನ್ ನಬಿನ್ ಅವರನ್ನು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರನ್ನಾಗಿ ಆಯ್ಕೆ ಮಾಡುವುದರೊಂದಿಗೆ ಯುವ ಜನತೆಯನ್ನು ಸೆಳೆಯುವ ಕಸರತ್ತು ಮಾಡಿದೆ.
Advertisement