
ನವದೆಹಲಿ: ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ತಮ್ಮ ಪಕ್ಷವು 70 ಸ್ಥಾನಗಳ 55 ರಲ್ಲಿ ಗೆಲ್ಲುತ್ತದೆ ಎಂದು ಆಮ್ ಆದ್ಮಿ ಪಕ್ಷದ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಸೋಮವಾರ ಭವಿಷ್ಯ ನುಡಿದಿದ್ದಾರೆ.
ಬಿಜೆಪಿ ಅಧಿಕಾರಕ್ಕೆ ಬಂದರೆ ನಗರದಲ್ಲಿನ ಎಲ್ಲಾ ಉಚಿತ ಯೋಜನೆಗಳನ್ನು ಸ್ಥಗಿತಗೊಳಿಸುತ್ತದೆ ಎಂದು ದೆಹಲಿ ಮಾಜಿ ಸಿಎಂ ತಮ್ಮ ಆರೋಪವನ್ನು ಪುನರುಚ್ಚರಿಸಿದ್ದಾರೆ.
ಫೆಬ್ರವರಿ 5 ರಂದು ನಡೆಯುವ ದೆಹಲಿ ವಿಧಾನಸಭೆ ಚುನಾವಣೆಯ ಬಹಿರಂಗ ಪ್ರಚಾರಕ್ಕೆ ಇಂದು ತೆರೆ ಬಿದ್ದಿದ್ದು, ಇದರ ಬೆನ್ನಲ್ಲೇ X ನಲ್ಲಿ ಹಿಂದಿಯಲ್ಲಿ ಪೋಸ್ಟ್ ಮಾಡಿದ ಕೇಜ್ರಿವಾಲ್, "ನನ್ನ ಅಂದಾಜಿನ ಪ್ರಕಾರ, ಆಮ್ ಆದ್ಮಿ ಪಕ್ಷವು 55 ಸ್ಥಾನಗಳನ್ನು ಪಡೆಯಲಿದೆ. ಮಹಿಳೆಯರು ಸಾಕಷ್ಟು ಪ್ರಯತ್ನ ಮಾಡಿದರೆ ಮತ್ತು ಅವರ ಕುಟುಂಬದ ಪುರುಷರನ್ನು ಆಮ್ ಆದ್ಮಿ ಪಕ್ಷಕ್ಕೆ ಮತ ಹಾಕುವಂತೆ ಮನವೊಲಿಸಿದರೆ ಎಎಪಿ 60ಕ್ಕೂ ಹೆಚ್ಚು ಸ್ಥಾನಗಳನ್ನು ಪಡೆಯಬಹುದು" ಎಂದು ಹೇಳಿದ್ದಾರೆ.
ಆಮ್ ಆದ್ಮಿ ಪಕ್ಷವು 2020ರ ವಿಧಾನಸಭಾ ಚುನಾವಣೆಯಲ್ಲಿ 67 ಸ್ಥಾನಗಳನ್ನು ಗೆದ್ದಿತ್ತು.
ಬಹಿರಂಗ ಪ್ರಚಾರದ ಕೊನೆಯ ದಿನವಾದ ಇಂದು ಕೇಜ್ರಿವಾಲ್ ಅವರು ದಕ್ಷಿಣ ದೆಹಲಿಯ ಛತ್ತರ್‌ಪುರದಲ್ಲಿ ನಡೆದ ರ್ಯಾಲಿಯನ್ನು ಉದ್ದೇಶಿಸಿ ಮಾತನಾಡುತ್ತಾ, ಜನರು AAP ಗೆ ಮತ ಹಾಕುವಂತೆ ಮನವಿ ಮಾಡಿದರು.
Advertisement