
ಕೋಲ್ಕತ್ತಾ: 2026ರ ವಿಧಾನಸಭಾ ಚುನಾವಣೆಯಲ್ಲಿ ಪಶ್ಚಿಮ ಬಂಗಾಳದಲ್ಲಿಯೂ ಬಿಜೆಪಿ ಅಧಿಕಾರಕ್ಕೆ ಬರಲಿದೆ ಎಂದು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಭಾನುವಾರ ಹೇಳಿದ್ದಾರೆ.
ಪಶ್ಚಿಮ ಬಂಗಾಳದಲ್ಲಿ ಕೇಂದ್ರದ ಯೋಜನೆಗಳ ಅನುಷ್ಠಾನಕ್ಕೆ ಮಮತಾ ಬ್ಯಾನರ್ಜಿ ಸರ್ಕಾರ ಅಡ್ಡಿಪಡಿಸುತ್ತಿದೆ. ಆದರೆ, ಕೇಂದ್ರವು ರಾಜ್ಯವನ್ನು ನಿರ್ಲಕ್ಷಿಸಿದೆ ಎಂದು ಸುಳ್ಳು ಆರೋಪ ಮಾಡುತ್ತಿದ್ದಾರೆ ಎಂದು ದೂರಿದರು.
ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, '2019 ರಿಂದ ಪಶ್ಚಿಮ ಬಂಗಾಳದಲ್ಲಿ ಬಿಜೆಪಿಯ ಮತ ಹಂಚಿಕೆ ಶೇ 30-40 ರಷ್ಟಿದೆ ಮತ್ತು ಪಕ್ಷವು ಇನ್ನೂ ಶೇ 10 ರಷ್ಟು ಮತಗಳನ್ನು ಪಡೆದರೆ, ಅದು ಮಮತಾ ಬ್ಯಾನರ್ಜಿ ಸರ್ಕಾರವನ್ನು ಅಧಿಕಾರದಿಂದ ದೂರವಿಡುತ್ತದೆ' ಎಂದು ಹೇಳಿದರು.
ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷದ (ಎಎಪಿ) ಸೋಲು ಬಿಜೆಪಿಯಲ್ಲಿ ಜನರ ಅಗಾಧ ನಂಬಿಕೆ ಮತ್ತು ಭ್ರಷ್ಟ ಅರವಿಂದ ಕೇಜ್ರಿವಾಲ್ ಸರ್ಕಾರವನ್ನು ನಿರಾಕರಿಸಿರುವುದನ್ನು ತೋರಿಸಿದೆ. ಅದೇ ರೀತಿಯಲ್ಲಿಯೇ ಪಶ್ಚಿಮ ಬಂಗಾಳದಲ್ಲಿಯೂ ಆಗಲಿದೆ. 2019ರ ಲೋಕಸಭಾ ಚುನಾವಣೆಯಲ್ಲಿ ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ರಾಜ್ಯದ 42 ಕ್ಷೇತ್ರಗಳ ಪೈಕಿ 18 ಸ್ಥಾನಗಳಲ್ಲಿ ಗೆಲುವು ಸಾಧಿಸುವ ಮೂಲಕ ತನ್ನ ಛಾಪು ಮೂಡಿಸಿದೆ ಎಂದು ಹೇಳಿದರು.
'ನಾವು 2021ರ ವಿಧಾನಸಭಾ ಚುನಾವಣೆಯಲ್ಲಿ 77 ಸ್ಥಾನಗಳನ್ನು ಮತ್ತು 2024ರ ಸಾರ್ವತ್ರಿಕ ಚುನಾವಣೆಯಲ್ಲಿ 12 ಲೋಕಸಭಾ ಸ್ಥಾನಗಳನ್ನು ಗೆದ್ದಿದ್ದೇವೆ. 2019 ರಿಂದ ಬಿಜೆಪಿಯ ಮತದಾನದ ಶೇಕಡಾವಾರು ಪ್ರಮಾಣ ಹೆಚ್ಚಾಗಿದೆ. ಪಶ್ಚಿಮ ಬಂಗಾಳದಲ್ಲಿ ಅಧಿಕಾರಕ್ಕೆ ಬರಲು ನಮಗೆ ಇನ್ನೂ ಶೇ 10 ರಷ್ಟು ಮತಗಳು ಬೇಕಾಗುತ್ತವೆ. 2026 ರಲ್ಲಿ ನಾವು ರಾಜ್ಯದಲ್ಲಿ ಅಧಿಕಾರಕ್ಕೆ ಬರುತ್ತೇವೆ' ಎಂದು ಅವರು ಹೇಳಿದರು.
Advertisement