
ಕೋಟಾ: ದೆಹಲಿ-ಮುಂಬೈ ಎಕ್ಸ್‌ಪ್ರೆಸ್‌ವೇಯಲ್ಲಿ 57 ಮಹಾಕುಂಭ ಯಾತ್ರಿಕರನ್ನು ಹೊತ್ತೊಯ್ಯುತ್ತಿದ್ದ ಬಸ್ ಗುರುವಾರ ಟ್ರಕ್‌ಗೆ ಡಿಕ್ಕಿ ಹೊಡೆದಿದ್ದು, ಭೀಕರ ಅಪಘಾತದಲ್ಲಿ ಮೂವರು ಸಾವನ್ನಪ್ಪಿದ್ದಾರೆ ಮತ್ತು ಇಬ್ಬರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಉತ್ತರ ಪ್ರದೇಶದ ಪರ್ಯಾಗರಾಜ್‌ನಲ್ಲಿ ನಡೆದ ಮಹಾಕುಂಭದಲ್ಲಿ ಭಾಗವಹಿಸಿ ಯಾತ್ರಿಕರು ಮಧ್ಯಪ್ರದೇಶದ ಮಂದ್‌ಸೌರ್‌ಗೆ ಹಿಂತಿರುಗುತ್ತಿದ್ದರು.
ಇಂದು ಬೆಳಗ್ಗೆ 6.30 ರ ಸುಮಾರಿಗೆ ರಾಜಸ್ಥಾನದ ಕೋಟಾ ಜಿಲ್ಲೆಯ ಕರೋಡಿಯಾ ಗ್ರಾಮದ ಬಳಿ ರಸ್ತೆ ಬದಿಯಲ್ಲಿ ನಿಲ್ಲಿಸಿದ್ದ ಟ್ರಕ್‌ಗೆ ಬಸ್ ಡಿಕ್ಕಿ ಹೊಡೆದ ಪರಿಣಾಮ ಈ ಅಪಘಾತ ಸಂಭವಿಸಿದೆ ಎಂದು ಸಹಾಯಕ ಸಬ್-ಇನ್‌ಸ್ಪೆಕ್ಟರ್ ಹರಿರಾಜ್ ಸಿಂಗ್ ತಿಳಿಸಿದ್ದಾರೆ.
ಮಧ್ಯ ಪ್ರದೇಶದ ಕಿಶೋರಿಲಾಲ್(60), ಅವರ ಪತ್ನಿ ಕೈಲಾಶಿಬಾಯಿ(54) ಮತ್ತು ಅಶೋಕ್ ಅವರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಚಮನ್‌ಲಾಲ್ ಮತ್ತು ಪಾರ್ವತಿ ಗಾಯಗೊಂಡಿದ್ದಾರೆ. ಇತರ ಪ್ರಯಾಣಿಕರು ಸುರಕ್ಷಿತವಾಗಿದ್ದಾರೆ ಎಂದು ಅವರು ಹೇಳಿದ್ದಾರೆ.
ಚಾಲಕ ಚಾಲನೆ ಮಾಡುವಾಗ ನಿದ್ದೆ ಮಂಪರಿನಲ್ಲಿದ್ದರಿಂದ ಅಪಘಾತ ಸಂಭವಿಸಿದೆ ಎಂದು ಶಂಕಿಸಲಾಗಿದೆ. ಅಪಘಾತದ ನಂತರ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾರೆ ಎಂದು ಎಎಸ್‌ಐ ತಿಳಿಸಿದ್ದಾರೆ.
ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದ್ದು, ಗಾಯಾಳುಗಳು ಕೋಟಾದ ಎಂಬಿಎಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಅವರು ಹೇಳಿದ್ದಾರೆ.
Advertisement