
ಭಿಂದ್: ವ್ಯಾನ್‌ಗೆ ಕಸದ ವಾಹನ ಡಿಕ್ಕಿ ಹೊಡೆದ ಪರಿಣಾಮ ಮೂವರು ಮಹಿಳೆಯರು ಸೇರಿದಂತೆ ಐವರು ಸಾವನ್ನಪ್ಪಿದ್ದು, 20 ಮಂದಿ ಗಾಯಗೊಂಡಿರುವ ಘಟನೆ ಮಧ್ಯಪ್ರದೇಶದ ಭಿಂಡ್ ಜಿಲ್ಲೆಯಲ್ಲಿ ಮಂಗಳವಾರ ಬೆಳಗ್ಗೆ ನಡೆದಿದೆ.
ಜವಾಹರಪುರ ಗ್ರಾಮದ ಬಳಿ ಮುಂಜಾನೆ 5 ಗಂಟೆ ಸುಮಾರಿಗೆ ಈ ಘಟನೆ ನಡೆದಿದ್ದು, ಮದುವೆ ಕಾರ್ಯಕ್ರಮ ಹಿಂತಿರುಗುತ್ತಿದ್ದಾಗ ವ್ಯಾನ್ ಗೆ ಕಸದ ವಾಹನ ಡಿಕ್ಕಿ ಹೊಡೆದಿದೆ ಎಂದು ಭಿಂದ್ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (ಎಸ್‌ಪಿ) ಅಸಿತ್ ಯಾದವ್ ತಿಳಿಸಿದ್ದಾರೆ.
ಕೆಲವು ವ್ಯಕ್ತಿಗಳು ವ್ಯಾನ್‌ನಲ್ಲಿ ಕುಳಿತಿದ್ದರೆ, ಮತ್ತೆ ಕೆಲವರು ವ್ಯಾನ್ ಮುಂದೆ ನಿಂತಿದ್ದಾಗ ಇದ್ದಕ್ಕಿದ್ದಂತೆ ವೇಗವಾಗಿ ಬಂದ ಕಸದ ವಾಹನ ಡಿಕ್ಕಿ ಹೊಡೆದಿದೆ. ಇದರಿಂದಾಗಿ ಮೂವರು ಸ್ಥಳದಲ್ಲೇ ಮೃತಪಟ್ಟರೆ, ತದನಂತರ ಇನ್ನಿಬ್ಬರು ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ ಮೂವರು ಮಹಿಳೆಯರು ಸೇರಿದಂತೆ ಐವರು ಸಾವನ್ನಪ್ಪಿದ್ದು, 20 ಮಂದಿ ಗಾಯಗೊಂಡಿದ್ದಾರೆ. ಮೊಬೈಕ್ ಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸುವ ಪ್ರಯತ್ನದಲ್ಲಿ ಕಸದ ವಾಹನ ವ್ಯಾನ್‌ಗೆ ಡಿಕ್ಕಿ ಹೊಡೆದಿದೆ ಎಂದು ಭಿಂಡ್ ಕಲೆಕ್ಟರ್ ಸಂಜೀವ್ ಶ್ರೀವಾಸ್ತವ ಪಿಟಿಐ ಸುದ್ದಿಸಂಸ್ಥೆಗೆ ತಿಳಿಸಿದ್ದಾರೆ.
ಗಾಯಗೊಂಡವರಲ್ಲಿ 12 ಮಂದಿಯನ್ನು ಚಿಕಿತ್ಸೆಗಾಗಿ ಗ್ವಾಲಿಯರ್‌ಗೆ ಕಳುಹಿಸಲಾಗಿದ್ದು, ಇತರರು ಭಿಂಡ್ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಘಟನೆಯ ನಂತರ ಕೋಪಗೊಂಡ ಸ್ಥಳೀಯರು ರಸ್ತೆ ತಡೆ ನಡೆಸಿದರು ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.
ಎಸ್ಪಿ ಮತ್ತು ಉಪವಿಭಾಗೀಯ ಮ್ಯಾಜಿಸ್ಟ್ರೇಟ್ (ಎಸ್‌ಡಿಎಂ) ಸ್ಥಳಕ್ಕೆ ತೆರಳಿ ಆಕ್ರೋಶಗೊಂಡಿರುವ ಗ್ರಾಮಸ್ಥರನ್ನು ಸಮಾಧಾನಪಡಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ಜಿಲ್ಲಾಧಿಕಾರಿ ಹೇಳಿದರು.
Advertisement