ತಮಿಳುನಾಡಿಗೆ ಕೇಂದ್ರ 10,000 ಕೋಟಿ ರೂ. ಕೊಟ್ಟರೂ NEP ಜಾರಿಗೊಳಿಸಲ್ಲ: ಸಿಎಂ ಸ್ಟಾಲಿನ್
ಕಡಲೂರು: ರಾಷ್ಟ್ರೀಯ ಶಿಕ್ಷಣ ನೀತಿಯ ಕುರಿತು ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ಮುಂದುವರಿಸಿದ ತಮಿಳುನಾಡು ಮುಖ್ಯಮಂತ್ರಿ ಎಂ ಕೆ ಸ್ಟಾಲಿನ್, ಕೇಂದ್ರ ಸರ್ಕಾರ ರಾಜ್ಯಕ್ಕೆ 10,000 ಕೋಟಿ ರೂಪಾಯಿ ನೀಡಲು ಮುಂದಾದರೂ ಅದನ್ನು NEP ಜಾರಿಗೊಳಿಸಲು ಒಪ್ಪುವುದಿಲ್ಲ ಎಂದು ಶನಿವಾರ ಹೇಳಿದ್ದಾರೆ.
ಹಿಂದಿ ಭಾಷೆಯನ್ನು ಹೇರುವ ಯತ್ನದಿಂದ ಮಾತ್ರವಲ್ಲದೆ ವಿದ್ಯಾರ್ಥಿಗಳ ಭವಿಷ್ಯ ಮತ್ತು ಸಾಮಾಜಿಕ ನ್ಯಾಯ ವ್ಯವಸ್ಥೆಯ ಮೇಲೆ ಗಂಭೀರ ಪರಿಣಾಮಗಳನ್ನು ಬೀರುವ ಹಲವಾರು ಇತರ ಅಂಶಗಳಿಂದಾಗಿಯೂ ಎನ್ಇಪಿಗೆ ವಿರೋಧಿಸುತ್ತಿದ್ದೇವೆ ಎಂದು ಸ್ಟಾಲಿನ್ ಹೇಳಿದ್ದಾರೆ.
ವೈದ್ಯಕೀಯ ಕೋರ್ಸ್‌ಗಳಿಗೆ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ(ನೀಟ್)ಯ ರೀತಿ ಕಲಾ ಮತ್ತು ವಿಜ್ಞಾನ ಕಾಲೇಜುಗಳ ಪ್ರವೇಶಕ್ಕಾಗಿ ಸ್ಕ್ರೀನಿಂಗ್ ಪರೀಕ್ಷೆಗೆ ಎನ್ಇಪಿ ಕಾರಣವಾಗುತ್ತದೆ. ಇದರಿಂದ ವಿದ್ಯಾರ್ಥಿಗಳು ತಮ್ಮ ಓದನ್ನು ಅರ್ಧಕ್ಕೆ ನಿಲ್ಲಿಸಬೇಕಾಗುತ್ತದೆ ಎಂದು ಎಚ್ಚರಿಸಿದ್ದಾರೆ.
"ನಾವು ಯಾವುದೇ ಭಾಷೆಯನ್ನು ವಿರೋಧಿಸುವುದಿಲ್ಲ. ಆದರೆ ಹಿಂದಿ ಹೇರಿಕೆಯನ್ನು ವಿರೋಧಿಸುವಲ್ಲಿ ದೃಢವಾಗಿರುತ್ತೇವೆ" ಎಂದು ಸ್ಟಾಲಿನ್ ಹೇಳಿದ್ದಾರೆ.
ಈಗ ನೀಡಲಾಗುತ್ತಿರುವ SC/ST ಮತ್ತು BC ವಿದ್ಯಾರ್ಥಿಗಳಿಗೆ ಆರ್ಥಿಕ ಸಹಾಯವನ್ನು 'ನಿರಾಕರಿಸುವ' ಜೊತೆಗೆ, NEP ಮೂರನೇ, ಐದನೇ ಮತ್ತು ಎಂಟನೇ ತರಗತಿಗಳಿಗೆ ಪಬ್ಲಿಕ್ ಪರೀಕ್ಷೆಗಳನ್ನು ಪ್ರಸ್ತಾಪಿಸಿದೆ. ಕಲಾ ಮತ್ತು ವಿಜ್ಞಾನ ಕಾಲೇಜುಗಳ ಪ್ರವೇಶಕ್ಕಾಗಿ ಸಾಮಾನ್ಯ ಪ್ರವೇಶ ಪರೀಕ್ಷೆಯನ್ನು ಪರಿಚಯಿಸುತ್ತದೆ ಎಂದು ತಮಿಳುನಾಡು ಮುಖ್ಯಮಂತ್ರಿ ತಿಳಿಸಿದ್ದಾರೆ.
ಎನ್ಇಪಿಯನ್ನು ಅಂಚಿನಲ್ಲಿರುವ ಸಮುದಾಯಗಳ ವಿದ್ಯಾರ್ಥಿಗಳಿಗೆ ಅನಾನುಕೂಲತೆಯನ್ನುಂಟುಮಾಡಲು ವಿನ್ಯಾಸಗೊಳಿಸಲಾಗಿದೆ. ರಾಷ್ಟ್ರೀಯ ಶಿಕ್ಷಣ ನೀತಿಯು ನಮ್ಮ ಮಕ್ಕಳು ಶಿಕ್ಷಣ ಪಡೆಯುವುದನ್ನು ಅಥವಾ ಉದ್ಯೋಗ ಹುಡುಕುವುದನ್ನು ತಡೆಯುವ ಉದ್ದೇಶ ಹೊಂದಿದೆ ಎಂದು ಸ್ಟಾಲಿನ್ ಆರೋಪಿಸಿದ್ದಾರೆ.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ