
ಮುಂಬೈ: ಬೆಳಗಾವಿಯಲ್ಲಿ ಇಂತಹ ಘಟನೆಗಳು ಮರುಕಳಿಸದಂತೆ ತಡೆಯಲು ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಅವರು ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಮತ್ತು ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಬೇಕು ಎಂದು ಶಿವಸೇನೆ (ಯುಬಿಟಿ) ನಾಯಕ ಸಂಜಯ್ ರಾವುತ್ ಹೇಳಿದ್ದಾರೆ.
ಚಿತ್ರದುರ್ಗದಲ್ಲಿ ಮಹಾರಾಷ್ಟ್ರ ಸಾರಿಗೆ ಸಂಸ್ಥೆಯ ಬಸ್ ಚಾಲಕನ ಮೇಲೆ ಹಲ್ಲೆ ನಡೆಸಿರುವ ಆರೋಪದ ನಂತರ ಶಿವಸೇನಾ (ಯುಬಿಟಿ) ಕಾರ್ಯಕರ್ತರು ಶನಿವಾರ ಪುಣೆಯಲ್ಲಿ ಕರ್ನಾಟಕದ ನಂಬರ್ ಪ್ಲೇಟ್‌ಗಳಿರುವ ಬಸ್‌ಗಳಿಗೆ ಕಪ್ಪು ಬಣ್ಣ ಬಳಿದು ಪ್ರತಿಭಟನೆ ನಡೆಸಿದರು.
'ಇಂತಹ ಘಟನೆಗಳು ನಡೆಯುವುದು ನಮಗೆ ಬೇಡ. ಪ್ರಧಾನಿ ಮತ್ತು ಗೃಹ ಸಚಿವರು ಮಹಾರಾಷ್ಟ್ರ ಮತ್ತು ಕರ್ನಾಟಕ ಮುಖ್ಯಮಂತ್ರಿಗಳನ್ನು ಸಭೆಗೆ ಕರೆಯಬೇಕು. ಬೆಳಗಾವಿ ಗಡಿ ವಿವಾದ ಸುಪ್ರೀಂ ಕೋರ್ಟ್‌ನಲ್ಲಿದೆ. ಹೀಗಿದ್ದರೂ, ಕರ್ನಾಟಕ ಸರ್ಕಾರ ಹೇಗೆ ಈ ರೀತಿಯ ಕೆಲಸ ಮಾಡುತ್ತಿದೆ. ವಿಷಯ ನ್ಯಾಯಾಧಿಕರಣದ ಅಂಗಳದಲ್ಲಿದೆ. ನಮ್ಮ ಜನರ ಮೇಲೆ ಹಲ್ಲೆ, ಮರಾಠಿ ಶಾಲೆ ಮತ್ತು ಸಾಹಿತ್ಯ ಸಂಘಟನೆಗಳ ಮೇಲೆ ಹಲ್ಲೆ ನಡೆಸುವುದು ಏಕೆ? ಎಂದು ಪ್ರಶ್ನಿಸಿದರು.
'ಮಹಾರಾಷ್ಟ್ರದಲ್ಲಿಯೂ ಕರ್ನಾಟಕದವರು ಹಲವಾರು ಸಂಸ್ಥೆಗಳು ಮತ್ತು ಹೋಟೆಲ್‌ಗಳನ್ನು ನಡೆಸುತ್ತಿದ್ದಾರೆ. ನಾವು ಅವರಿಗೆ ಏನನ್ನೂ ಮಾಡಿಲ್ಲ. ಪರಿಸ್ಥಿತಿ ಹೀಗೆಯೇ ಮುಂದುವರಿದರೆ, ನಾವು ಮಾಡುತ್ತೇವೆ. ನಾವೆಲ್ಲರೂ ಒಗ್ಗಟ್ಟಾಗಿದ್ದೇವೆ. ಇದು ಭಾಷೆಯ ಸಮಸ್ಯೆ. ಬೆಳಗಾವಿಯಲ್ಲಿ ವಾಸಿಸುವ ಮರಾಠಿಗರು ಅಲ್ಲಿ ಮರಾಠಿ ಶಾಲೆಯನ್ನು ನಡೆಸಲು ಬಯಸುತ್ತಾರೆ. ಅದು ತಪ್ಪಲ್ಲ. ಮಹಾರಾಷ್ಟ್ರದಲ್ಲಿ ಕನ್ನಡ ಶಾಲೆಗಳಿವೆ' ಎಂದು ಅವರು ಹೇಳಿದರು.
ಇದಕ್ಕೂ ಮುನ್ನ ಬಸ್‌ಗಳಿಗೆ ಕಪ್ಪು ಬಣ್ಣ ಬಳಿದಿರುವವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.
'ಶಿವಸೇನೆ (ಯುಬಿಟಿ) ಕಾರ್ಯಕರ್ತರು ಇಲ್ಲಿಗೆ ಬಂದು ಏನೋ ಮಾಡಲು ಮುಂದಾಗಿದ್ದಾರೆ ಎಂದು ತಿಳಿದ ತಕ್ಷಣ ನಾವು ಹೆಚ್ಚಿನ ಪೊಲೀಸ್ ಪಡೆಯನ್ನು ರವಾನಿಸಿದ್ದೇವೆ. ಅವರು ಒಂದು ಬಸ್‌ಗೆ ಕಪ್ಪು ಬಣ್ಣ ಎರಚುವಲ್ಲಿ ಯಶಸ್ವಿಯಾಗಿದ್ದಾರೆ. ಹೆಚ್ಚಿನ ಹಾನಿ ಸಂಭವಿಸಿಲ್ಲ' ಎಂದು ಡಿಸಿಪಿ ಸ್ಮಾರ್ತನ ಪಾಟೀಲ್ ಎಎನ್‌ಐಗೆ ತಿಳಿಸಿದ್ದಾರೆ.
ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ ಮತ್ತು ಕಾನೂನು ಕ್ರಮ ಕೈಗೊಳ್ಳಲಾಗುವುದು. ನಾಲ್ಕರಿಂದ ಐದು ಜನರನ್ನು ಬಂಧಿಸಲಾಗಿದೆ. ಆದರೆ, ಇತರರನ್ನು ವಿಡಿಯೋ ಆಧಾರದ ಮೇಲೆ ಶೀಘ್ರದಲ್ಲೇ ಗುರುತಿಸಲಾಗುವುದು' ಎಂದು ಅವರು ಹೇಳಿದರು.
ಬೆಳಗಾವಿಯಲ್ಲಿ ವಾಯುವ್ಯ ಕರ್ನಾಟಕ ಸಾರಿಗೆ ಸಂಸ್ಥೆಯ ಬಸ್ ನಿರ್ವಾಹಕ ಮರಾಠಿ ಮಾತನಾಡಲಿಲ್ಲ ಎನ್ನುವ ಕಾರಣಕ್ಕೆ ಹಲ್ಲೆ ನಡೆಸಲಾಗಿದೆ. ಅದಕ್ಕೆ ಪ್ರತಿಯಾಗಿ, ಶುಕ್ರವಾರ ರಾತ್ರಿ ಮಹಾರಾಷ್ಟ್ರ ರಾಜ್ಯ ರಸ್ತೆ ಸಾರಿಗೆ ನಿಗಮದ (MSRTC) ಚಾಲಕನ ಮೇಲೆ ಕರ್ನಾಟಕದ ಚಿತ್ರದುರ್ಗದಲ್ಲಿ ಹಲ್ಲೆ ನಡೆಸಲಾಗಿದೆ ಎಂದು MSRTC ಯ CPRO ಅಭಿಜಿತ್ ಭೋಸಲೆ ತಿಳಿಸಿದ್ದಾರೆ.
ಘಟನೆ ನಂತರ, MSRTC ಕೊಲ್ಲಾಪುರದಿಂದ ಕರ್ನಾಟಕಕ್ಕೆ ಹೋಗುವ ಬಸ್‌ಗಳ ಸೇವೆಯನ್ನು ರದ್ದುಗೊಳಿಸಿದೆ.
Advertisement