
ತಿರುಪತಿ: ತಿರುಪತಿ ತಿಮ್ಮಪ್ಪನ ದೇವಸ್ಥಾನದಲ್ಲಿ ಬುಧವಾರ ಸಂಭವಿಸಿದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಆಂಧ್ರ ಪ್ರದೇಶ ಮುಖ್ಯಮಂತ್ರಿ ಎನ್. ಚಂದ್ರಬಾಬು ನಾಯ್ಡು ಅವರು ಗುರುವಾರ ಉಪ ಪೊಲೀಸ್ ವರಿಷ್ಠಾಧಿಕಾರಿ ಸೇರಿದಂತೆ ಪ್ರಮುಖ ಅಧಿಕಾರಿಗಳನ್ನು ಅಮಾನತುಗೊಳಿಸಿದ್ದಾರೆ ಮತ್ತು ಪ್ರಕರಣದ ಕುರಿತು ನ್ಯಾಯಾಂಗ ತನಿಖೆಗೆ ಆದೇಶಿಸಿದ್ದಾರೆ.
ಸಿಎಂ ಚಂದ್ರಬಾಬು ನಾಯ್ಡು ಅವರು ಇಂದು ಕಾಲ್ತುಳಿತ ಸಂಭವಿಸಿದ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ನಂತರ ಆಸ್ಪತ್ರೆಗೆ ಭೇಟಿ ನೀಡಿ ಗಾಯಗೊಂಡವರ ಆರೋಗ್ಯ ವಿಚಾರಿಸಿದರು.
ಬಳಿಕ ಸಂಜೆ ಪತ್ರಿಕಾ ಗೋಷ್ಠಿ ಉದ್ದೇಶಿಸಿ ಮಾತನಾಡಿದ ಚಂದ್ರಬಾಬು ನಾಯ್ಡು, ತಿರುಪತಿಯಲ್ಲಿ ಮೇಲ್ವಿಚಾರಣೆ ವ್ಯವಸ್ಥೆಯಲ್ಲಿ ಕೆಲವು ಲೋಪದೋಷಗಳನ್ನು ನಾನು ನೋಡಿದ್ದೇನೆ ಎಂದರು.
ಬೇಜವಾಬ್ದಾರಿಯಿಂದ ವರ್ತಿಸಿದ ಡಿಎಸ್ಪಿ ರಮಣ ಕುಮಾರ್ ಅವರನ್ನು ಮತ್ತು ಟಿಟಿಡಿ ಗೋಶಾಲಾ ನಿರ್ದೇಶಕ ಹರಿನಾಥ್ ರೆಡ್ಡಿ ಅವರನ್ನು ಅಮಾನತುಗೊಳಿಸಲಾಗಿದೆ ಎಂದು ತಿಳಿಸಿದರು.
ಎಸ್ಪಿ ಸುಬ್ಬಾ ರಾಯುಡು, ಟಿಟಿಡಿ ಜೆಇಒ ಗೌತಮಿ ಮತ್ತು ಟಿಟಿಡಿ ಸಿವಿಎಸ್ಒ ಶ್ರೀಧರ್ ಸೇರಿದಂತೆ ಹಲವು ಪ್ರಮುಖ ಅಧಿಕಾರಿಗಳನ್ನು ಸಹ ವರ್ಗಾವಣೆ ಮಾಡಲಾಗಿದೆ.
ಈ ಕಾಲ್ತುಳಿತ ದುರಾದೃಷ್ಟಕರ ಘಟನೆ. ಇಂತಹ ದುರಂತಗಳನ್ನು ತಪ್ಪಿಸಲು ಕ್ರಮಗಳನ್ನು ಜಾರಿಗೆ ತರಲಾಗುವುದು.
ಘಟನೆಯ ಬಗ್ಗೆ ನ್ಯಾಯಾಂಗ ತನಿಖೆಗೆ ಆದೇಶಿಸಲಾಗಿದ್ದು, ತನಿಖೆಯ ಆಧಾರದ ಮೇಲೆ ಮುಂದಿನ ಕ್ರಮಗಳನ್ನು ತೆಗೆದುಕೊಳ್ಳಲಾಗುವುದು ಎಂದು ಮುಖ್ಯಮಂತ್ರಿ ತಿಳಿಸಿದರು.
ತಿರುಪತಿ ದೇವಾಲಯದ ವೈಕುಂಠ ಏಕಾದಶಿ ದರ್ಶನದ ಟೋಕನ್ ನೀಡುವ ಕೇಂದ್ರದಲ್ಲಿ ಬುಧವಾರ ರಾತ್ರಿ ಸಂಭವಿಸಿದ ಕಾಲ್ತುಳಿತದಲ್ಲಿ ಕರ್ನಾಟಕದ ಮೂಲದ ಓರ್ವ ಮಹಿಳೆ ಸೇರಿದಂತೆ 6 ಮಂದಿ ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ. ಮೃತಪಟ್ಟವರ ಕುಟುಂಬಗಳಿಗೆ ಆಂಧ್ರಪ್ರದೇಶ ಸರಕಾರ 25 ಲಕ್ಷ ರೂ. ಪರಿಹಾರ ಘೋಷಣೆ ಮಾಡಲಾಗಿದೆ.
Advertisement