ಆರ್‌ಜಿ ಕರ್ ಪ್ರಕರಣ: 'ಸಾಯುವವರೆಗೆ ಜೈಲು ಶಿಕ್ಷೆ' ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಲು ಸರ್ಕಾರಕ್ಕೆ ಹೈಕೋರ್ಟ್ ಅನುಮತಿ
ಕೋಲ್ಕತ್ತಾ: ಆರ್‌ಜಿ ಕಾರ್ ಆಸ್ಪತ್ರೆಯ ವೈದ್ಯೆಯ ಮೇಲಿನ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಅಪರಾಧಿ ಸಂಜಯ್ ರಾಯ್‌ಗೆ ಸಾಯುವವರೆಗೆ ಜೈಲು ಶಿಕ್ಷೆ ವಿಧಿಸಿದ ಸೀಲ್ಡಾ ನ್ಯಾಯಾಲಯದ ತೀರ್ಪು ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಲು ಕಲ್ಕತ್ತಾ ಹೈಕೋರ್ಟ್ ಮಂಗಳವಾರ ಪಶ್ಚಿಮ ಬಂಗಾಳ ಸರ್ಕಾರಕ್ಕೆ ಅನುಮತಿ ನೀಡಿದೆ.
ಪ್ರಕರಣದ ಏಕೈಕ ಅಪರಾಧಿ ಸಂಜಯ್ ರಾಯ್‌ಗೆ ಮರಣದಂಡನೆ ವಿಧಿಸುವಂತೆ ಕೋರಿ ಅಡ್ವೊಕೇಟ್ ಜನರಲ್ ಕಿಶೋರ್ ದತ್ತ ಅವರು ನ್ಯಾಯಮೂರ್ತಿ ದೇಬಾಂಗ್ಸು ಬಸಕ್ ನೇತೃತ್ವದ ವಿಭಾಗೀಯ ಪೀಠಕ್ಕೆ ಮೇಲ್ಮನವಿ ಸಲ್ಲಿಸಿದರು.
ಸೀಲ್ಡಾದ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶ ಅನಿರ್ಬನ್ ದಾಸ್ ಅವರು ಸೋಮವಾರ ನೀಡಿದ ತೀರ್ಪು ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಲು ರಾಜ್ಯ ಸರ್ಕಾರ ಹೈಕೋರ್ಟ್‌ನ ಅನುಮತಿ ಕೋರಿತ್ತು.
ಸರ್ಕಾರಿ ಸ್ವಾಮ್ಯದ ಆರ್‌ಜಿ ಕಾರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಕರ್ತವ್ಯ ನಿರತ ವೈದ್ಯೆಯ ಮೇಲೆ ಅತ್ಯಾಚಾರ ಎಸಗಿ, ಕೊಲೆ ಮಾಡಿದ ಪ್ರಕರಣದಲ್ಲಿ ರಾಯ್‌ಗೆ ಗಲ್ಲು ಶಿಕ್ಷೆ ವಿಧಿಸಬೇಕೆಂಬ ವಾದವನ್ನು ತಿರಸ್ಕರಿಸಿದ ಸೀಲ್ಡಾ ನ್ಯಾಯಾಲಯವು, ಇದು "ಅಪರೂಪದಲ್ಲಿ ಅಪರೂಪ" ಅಪರಾಧವಲ್ಲ ಎಂದು ಹೇಳಿ, ಸಾಯುವವರೆಗೆ ಜೈಲು ಶಿಕ್ಷೆ ವಿಧಿಸಿತ್ತು.
ನ್ಯಾಯಾಲಯವು ರಾಯ್‌ಗೆ 50,000 ರೂ. ದಂಡ ವಿಧಿಸಿದ್ದು, ಮೃತ ವೈದ್ಯೆಯ ಕುಟುಂಬಕ್ಕೆ 17 ಲಕ್ಷ ರೂ. ಪರಿಹಾರ ನೀಡುವಂತೆ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿತ್ತು.
ಸೀಲ್ಡಾ ನ್ಯಾಯಾಲಯದ ತೀರ್ಪಿನ ಬಗ್ಗೆ ಅತೃಪ್ತಿ ವ್ಯಕ್ತಪಡಿಸಿದ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಸೋಮವಾರ ಕೋಲ್ಕತ್ತಾ ಪೊಲೀಸರು ಪ್ರಕರಣದ ತನಿಖೆ ನಡೆಸಿದ್ದರೆ, ಮರಣದಂಡನೆ ಖಚಿತಪಡಿಸಿಕೊಳ್ಳುತ್ತಿದ್ದೇವೆ ಎಂದು ಪ್ರತಿಪಾದಿಸಿದ್ದರು.