
ಮುಂಬೈ: ಶಿವಸೇನೆ(ಯುಬಿಟಿ) ಮುಖ್ಯಸ್ಥ ಉದ್ಧವ್ ಠಾಕ್ರೆ ಅವರು ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ತಟಸ್ಥ ನಿಲುವು ತೆಗೆದುಕೊಂಡಿದ್ದು, ಕಾಂಗ್ರೆಸ್ ಅಥವಾ ಎಎಪಿ ಪರವಾಗಿ ಪ್ರಚಾರ ಮಾಡುವುದಿಲ್ಲ ಎಂದು ಸಂಸದ ಸಂಜಯ್ ರಾವತ್ ಮಂಗಳವಾರ ತಿಳಿಸಿದ್ದಾರೆ.
ಇಂಡಿಯಾ ಮೈತ್ರಿಕೂಟದ ಸದಸ್ಯರಾಗಿರುವ ಎಎಪಿ ಮತ್ತು ಕಾಂಗ್ರೆಸ್ ಎರಡೂ ಶಿವಸೇನೆಯ(ಯುಬಿಟಿ) ಸ್ನೇಹಿತರು ಎಂದು ರಾವತ್ ಒತ್ತಿ ಹೇಳಿದ್ದಾರೆ.
ಫೆಬ್ರವರಿ 5 ರ ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಠಾಕ್ರೆ ಅವರು, ಈ ಎರಡೂ ಪಕ್ಷಗಳಲ್ಲಿ ಯಾವುದಾದರೂ ಒಂದು ಪಕ್ಷದ ಪರ ಪ್ರಚಾರ ಮಾಡುತ್ತಾರೋ ಎಂಬ ವರದಿಗಾರರ ಪ್ರಶ್ನೆಗೆ ಉತ್ತರಿಸಿದ ರಾವತ್, "ನಾವು ಯಾರ ಪರವೂ ಪ್ರಚಾರ ಮಾಡುವುದಿಲ್ಲ. ನಾವು ತಟಸ್ಥರಾಗಿದ್ದೇವೆ" ಎಂದರು.
ದೆಹಲಿ ವಿಧಾನಸಭಾ ಚುನಾವಣಾ ಕಣ ರಂಗೇರುತ್ತಿದ್ದು, ಸಮಾಜವಾದಿ ಪಕ್ಷ(ಎಸ್‌ಪಿ) ಮತ್ತು ಟಿಎಂಸಿ ಅರವಿಂದ್ ಕೇಜ್ರಿವಾಲ್ ನೇತೃತ್ವದ ಆಮ್ ಆದ್ಮಿ ಪಕ್ಷಕ್ಕೆ ತಮ್ಮ ಬೆಂಬಲ ಘೋಷಿಸಿವೆ. ಅಲ್ಲದೆ ಏಕನಾಥ್ ಶಿಂಧೆ ನೇತೃತ್ವದ ಶಿವಸೇನೆ ಬಿಜೆಪಿಯನ್ನು ಬೆಂಬಲಿಸಿದೆ.
ದೆಹಲಿ ಚುನಾವಣೆಯಲ್ಲಿ ಎಎಪಿ, ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ತ್ರಿಕೋನ ಸ್ಪರ್ಧೆ ಏರ್ಪಟ್ಟಿದ್ದು, ಕೇಜ್ರಿವಾಲ್ ಅವರು ಸತತ ಮೂರನೇ ಅವಧಿಗೆ ಅಧಿಕಾರಕ್ಕೇರಲು ತೀವ್ರ ಹೋರಾಟ ನಡೆಸುತ್ತಿದ್ದಾರೆ.
Advertisement