
ನವದೆಹಲಿ: ಉತ್ತರ ದೆಹಲಿಯ ಬುರಾರಿಯಲ್ಲಿ ಹೊಸದಾಗಿ ನಿರ್ಮಿಸಲಾಗಿದ್ದ ನಾಲ್ಕು ಅಂತಸ್ತಿನ ಕಟ್ಟಡವೊಂದು ಕುಸಿದಿದ್ದು, ಅವಶೇಷಗಳಡಿಯಲ್ಲಿ ಸಿಲುಕಿದ್ದ 12 ಮಂದಿಯನ್ನು ರಕ್ಷಿಸಲಾಗಿದೆ.
ಆಸ್ಕರ್ ಪಬ್ಲಿಕ್ ಸ್ಕೂಲ್ ಬಳಿ ಹೊಸದಾಗಿ ನಿರ್ಮಿಸಲಾಗಿದ್ದ ಕಟ್ಟಡವು ಸೋಮವಾರ ರಾತ್ರಿ ಕುಸಿದಿದೆ. ಅವಶೇಷಗಳಡಿ ಹಲವರು ಸಿಲುಕಿರುವ ಶಂಕೆ ಹಿನ್ನೆಲೆಯಲ್ಲಿ ರಕ್ಷಣಾ ಕಾರ್ಯಾಚರಣೆ ನಡೆಸಲಾಗುತ್ತಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಘಟನಾ ಸ್ಥಳದಲ್ಲಿ ಪೊಲೀಸರು, ಅಗ್ನಿಶಾಮಕ ದಳದ ಸಿಬ್ಬಂದಿ, ದೆಹಲಿ ಪ್ರವಾಹ ನಿರ್ವಹಣಾ ಪ್ರಾಧಿಕಾರದ (ಡಿಡಿಎಂಎ), ರಾಷ್ಟ್ರೀಯ ವಿಪತ್ತು ನಿರ್ವಹಣೆ ಪಡೆ (ಎನ್‌ಡಿಆರ್‌ಎಫ್) ಸಿಬ್ಬಂದಿ ರಕ್ಷಣಾ ಕಾರ್ಯಾಚರಣೆಯಲ್ಲಿ ನಿರತರಾಗಿದ್ದಾರೆ ಎಂದು ವರದಿಯಾಗಿದೆ.
ನಮ್ಮ ತಂಡದವರು ಈಗಾಗಲೇ ಮೂವರು ಮಹಿಳೆಯರು ಸೇರಿದಂತೆ 12 ಮಂದಿಯನ್ನು ರಕ್ಷಣೆ ಮಾಡಿದ್ದು, ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ. ರಕ್ಷಣಾ ಕಾರ್ಯಾಚರಣೆಗೆ ನೆರವು ನೀಡಲು ಒಂಬತ್ತು ಅಗ್ನಿಶಾಮಕ ವಾಹನಗಳನ್ನು ಸ್ಥಳಕ್ಕೆ ಕಳುಹಿಸಲಾಗಿದೆ ಎಂದು ದೆಹಲಿ ಅಗ್ನಿಶಾಮಕ ಸೇವೆಗಳ ಮುಖ್ಯಸ್ಥ ಅತುಲ್ ಗಾರ್ಗ್ ತಿಳಿಸಿದ್ದಾರೆ.
‘ಬುರಾರಿಯಲ್ಲಿ ಕಟ್ಟಡ ಕುಸಿತದ ಘಟನೆ ಅತ್ಯಂತ ದುಃಖಕರವಾಗಿದೆ. ತ್ವರಿತ ಪರಿಹಾರ ಮತ್ತು ರಕ್ಷಣಾ ಕಾರ್ಯಾಚರಣೆಗಳನ್ನು ಕೈಗೊಳ್ಳುವಂತೆ ನಾನು ಸ್ಥಳೀಯ ಆಡಳಿತದೊಂದಿಗೆ ಮಾತನಾಡಿದ್ದೇನೆ. ಸಂತ್ರಸ್ತರಿಗೆ ಅಗತ್ಯ ನೆರವು ಒದಗಿಸಲಾಗುವುದು’ ಎಂದು ದೆಹಲಿ ಮುಖ್ಯಮಂತ್ರಿ ಆತಿಶಿ ‘ಎಕ್ಸ್’ನಲ್ಲಿ ಪೋಸ್ಟ್ ಮಾಡಿದ್ದಾರೆ.
ಸೋಮವಾರ ಬುರಾರಿಯ ಕೌಶಿಕ್ ಎನ್‌ಕ್ಲೇವ್‌ನಲ್ಲಿ ಸಂಜೆ 6:30 ರ ಸುಮಾರಿಗೆ ನಾಲ್ಕು ಅಂತಸ್ತಿನ ಕಟ್ಟಡ ಕುಸಿದಿದೆ. ಘಟನೆಯ ಬಗ್ಗೆ ಸಂಜೆ 6:58 ಕ್ಕೆ ತಮಗೆ ಕರೆ ಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ದೆಹಲಿ ಪೊಲೀಸರು, ದೆಹಲಿ ಅಗ್ನಿಶಾಮಕ ಸೇವೆಗಳು, ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ (ಡಿಡಿಎಂಎ) ಮತ್ತು ರಾಷ್ಟ್ರೀಯ ವಿಪತ್ತು ಪ್ರತಿಕ್ರಿಯೆ ಪಡೆ (ಎನ್‌ಡಿಆರ್‌ಎಫ್) ರಕ್ಷಣಾ ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದಾರೆ.
Advertisement