
ಭುವನೇಶ್ವರ: "ಮಹಾರಾಷ್ಟ್ರದಲ್ಲಿ ಮಾಡಿದಂತೆ ಬಿಹಾರದಲ್ಲೂ ಮುಂಬರುವ ವಿಧಾನಸಭೆ ಚುನಾವಣೆಯನ್ನು ಹೈಜಾಕ್ ಮಾಡಲು" ಬಿಜೆಪಿ ಪ್ರಯತ್ನಿಸುತ್ತಿದೆ ಎಂದು ಲೋಕಸಭೆ ವಿರೋಧ ಪಕ್ಷದ ನಾಯಕ ಮತ್ತು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಶುಕ್ರವಾರ ಆರೋಪಿಸಿದ್ದಾರೆ.
ಭುವನೇಶ್ವರದಲ್ಲಿ ಪಕ್ಷದ 'ಸಂವಿಧಾನ್ ಬಚಾವೋ ಸಮಾವೇಶ' ಉದ್ದೇಶಿಸಿ ಮಾತನಾಡಿದ ರಾಹುಲ್ ಗಾಂಧಿ, ಬಿಹಾರ ವಿಧಾನಸಭಾ ಚುನಾವಣೆಯನ್ನು ಬಿಜೆಪಿ "ಹೈಜಾಕ್" ಮಾಡುವುದನ್ನು ತಡೆಯಲು ಇಂಡಿಯಾ ಬ್ಲಾಕ್ ಪಕ್ಷಗಳು ನಿರ್ಧರಿಸಿವೆ ಎಂದರು.
"ಮಹಾರಾಷ್ಟ್ರದಂತೆಯೇ, ಬಿಹಾರದಲ್ಲಿಯೂ ಚುನಾವಣೆ ಹೈಜಾಕ್ ಮಾಡುವ ಪ್ರಯತ್ನಗಳು ನಡೆಯುತ್ತಿವೆ. ದೇಶಾದ್ಯಂತ ಬಿಜೆಪಿ ನಮ್ಮ ಸಂವಿಧಾನದ ಮೇಲೆ ದಾಳಿ ಮಾಡುತ್ತಿದೆ" ಎಂದು ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದರು.
ಗುರುವಾರ ನಡೆದ ಇಂಡಿಯಾ ಬ್ಲಾಕ್ ಸಭೆಯಲ್ಲಿ, ಈ ವರ್ಷದ ಕೊನೆಯಲ್ಲಿ ವಿಧಾನಸಭಾ ಚುನಾವಣೆ ನಡೆಯಲಿರುವ "ಬಿಹಾರದಲ್ಲಿ ಬಿಜೆಪಿ ಚುನಾವಣೆಯನ್ನು ಹೈಜಾಕ್ ಮಾಡುವುದನ್ನು ತಡೆಯಲು" ನಿರ್ಧರಿಸಲಾಗಿದೆ ಎಂದು ಅವರು ಹೇಳಿದರು.
ಕೇಂದ್ರ ಚುನಾವಣಾ ಆಯೋಗವು "ತನ್ನ ಕರ್ತವ್ಯವನ್ನು ನಿರ್ವಹಿಸುತ್ತಿಲ್ಲ. ಬಿಜೆಪಿಯ ಹಿತಾಸಕ್ತಿಗಾಗಿ ಕೆಲಸ ಮಾಡುತ್ತಿದೆ" ಎಂದು ರಾಹುಲ್ ಗಾಂಧಿ ಆರೋಪಿಸಿದರು.
ಬಿಜೆಪಿ ಐದು-ಆರು ಬಂಡವಾಳಶಾಹಿಗಳಿಗಾಗಿ ಸರ್ಕಾರ ನಡೆಸುತ್ತದೆ. ಅವರು ದೇಶದ ಸಾಮಾನ್ಯ ಜನರಿಗಾಗಿ ಕೆಲಸ ಮಾಡುತ್ತಿಲ್ಲ ಎಂದು ರಾಹುಲ್ ಗಾಂಧಿ ಆರೋಪಿಸಿದರು.
Advertisement