
ನವದೆಹಲಿ: ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ರಂದೀಪ್ ಸಿಂಗ್ ಸುರ್ಜೆವಾಲಾ ಜೊತೆಯಲ್ಲಿ ನಾನು ಮತ್ತು ಡಿಸಿಎಂ ಡಿ ಕೆ ಶಿವಕುಮಾರ್ ಮಾತುಕತೆ ನಡೆಸಿದ್ದೇವೆ. ನಿಗಮ-ಮಂಡಳಿಗಳಿಗೆ ನಮ್ಮ ಕಾಂಗ್ರೆಸ್ ಕಾರ್ಯಕರ್ತರನ್ನು ಅಧ್ಯಕ್ಷರನ್ನಾಗಿ ನೇಮಿಸುವ ಕುರಿತು ಚರ್ಚೆ ಮಾಡಿದ್ದೇವೆ, ಆದರೆ ನೇಮಕ ಪ್ರಕ್ರಿಯೆ ಪೂರ್ಣವಾಗಲಿಲ್ಲ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.
ಇಂದು ದೆಹಲಿಯಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಜುಲೈ 16ರಂದು ಸುರ್ಜೆವಾಲಾ ಅವರು ಮತ್ತೊಮ್ಮೆ ಬೆಂಗಳೂರಿಗೆ ಬರುತ್ತಾರೆ, ಅಂದು ನಾವು ಎಲ್ಲಾ ನಿಗಮ-ಮಂಡಳಿಗಳ ಅಧ್ಯಕ್ಷರ ನೇಮಕವನ್ನು ಅಂತಿಮಗೊಳಿಸುತ್ತೇವೆ ಎಂದರು.
ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಆಗುತ್ತದೆ ಎಂಬುದು ಮಾಧ್ಯಮಗಳಲ್ಲಿ ಮಾತ್ರ ಚರ್ಚೆಯಾಗುತ್ತಿದೆ. ಪಕ್ಷದೊಳಗೆ ಅಂತಹ ಒಪ್ಪಂದವಾಗಲೀ, ಚರ್ಚೆಗಳಾಗಲೀ ಯಾವುದೂ ನಡೆಯುತ್ತಿಲ್ಲ. ದೆಹಲಿ ಭೇಟಿಯಲ್ಲಿಯೂ ಅಧಿಕಾರ ಹಂಚಿಕೆ ಕುರಿತು ಚರ್ಚೆಯಾಗಿಲ್ಲ.
ಐದೂ ವರ್ಷ ನಾನೇ ಮುಖ್ಯಮಂತ್ರಿಯಾಗಿರುತ್ತೇನೆ. ಈ ಬಗ್ಗೆ ಈಗಾಗಲೇ ನಮ್ಮ ಹೈಕಮಾಂಡ್, ರಣದೀಪ್ ಸಿಂಗ್ ಸುರ್ಜೇವಾಲಾ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಎಲ್ಲರೂ ಸ್ಪಷ್ಟನೆ ನೀಡಿದ್ದಾರೆ ಎಂದು ಸಿದ್ದರಾಮಯ್ಯ ಸ್ಪಷ್ಟಪಡಿಸಿದರು.
Advertisement