
ಪಾಟ್ನಾ: ಬಿಹಾರದಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ನಡೆಯುತ್ತಿದ್ದು, ಮತದಾರರ ಪಟ್ಟಿಯಲ್ಲಿ ನೇಪಾಳ, ಬಾಂಗ್ಲಾದೇಶ ಪ್ರಜೆಗಳ ಹೆಸರು ಪತ್ತೆಯಾಗಿದೆ. ಚುನಾವಣಾ ಆಯೋಗದ ಕ್ಷೇತ್ರ ಮಟ್ಟದ ಅಧಿಕಾರಿಗಳು ಮನೆ ಮನೆಗೆ ಭೇಟಿ ನೀಡಿದಾಗ ಇದು ಕಂಡುಬಂದಿದೆ ಎಂದು ಅಧಿಕಾರಿಗಳು ಭಾನುವಾರ ತಿಳಿಸಿದ್ದಾರೆ.
ಆಗಸ್ಟ್ 1ರ ನಂತರ ಇಂತಹ ಜನರ ಬಗ್ಗೆ ಸೂಕ್ತ ತನಿಖೆ ನಡೆಸಲಾಗುವುದು, ಸೆಪ್ಟೆಂಬರ್ 30ರಂದು ಪ್ರಕಟವಾಗುವ ಅಂತಿಮ ಮತದಾರರ ಪಟ್ಟಿಯಲ್ಲಿ ಅಕ್ರಮ ವಲಸಿಗರ ಹೆಸರನ್ನು ಸೇರಿಸುವುದಿಲ್ಲ ಎಂದು ಅವರು ಹೇಳಿದ್ದಾರೆ.
ಮನೆ-ಮನೆಗೆ ಭೇಟಿ ನೀಡಿದಾಗ ಹೆಚ್ಚಿನ ಸಂಖ್ಯೆಯಲ್ಲಿ ನೇಪಾಳ, ಬಾಂಗ್ಲಾದೇಶ ಮತ್ತು ಮ್ಯಾನ್ಮಾರ್ ಪ್ರಜೆಗಳನ್ನು ಇರುವುದನ್ನು ಬೂತ್ ಮಟ್ಟದ ಅಧಿಕಾರಿಗಳು ಪತ್ತೆ ಹಚ್ಚಿರುವುದಾಗಿ ವರದಿಗಳನ್ನು ಉಲ್ಲೇಖಿಸಿ ಚುನಾವಣಾಧಿಕಾರಿಗಳು ತಿಳಿಸಿದ್ದಾರೆ.
ಜನ್ಮ ಸ್ಥಳವನ್ನು ಪರಿಶೀಲಿಸುವ ಮೂಲಕ ವಿದೇಶಿ ಅಕ್ರಮ ವಲಸಿಗರನ್ನು ದೇಶದಿಂದ ಹೊರಹಾಕಲು ಚುನಾವಣಾ ಆಯೋಗವು ಅಂತಿಮವಾಗಿ ದೇಶಾದ್ಯಂತ ವಿಶೇಷ ಅಂತಿಮ ಮತದಾರರ ಪಟ್ಟಿ ಪರಿಷ್ಕರಣೆಯನ್ನು ಕೈಗೆತ್ತಿಕೊಳ್ಳಲಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.
ಬಿಹಾರದಲ್ಲಿ ಈ ವರ್ಷ ಚುನಾವಣೆ ನಡೆಯಲಿದ್ದು, ಅಸ್ಸಾಂ, ಕೇರಳ, ಪುದುಚೇರಿ, ತಮಿಳುನಾಡು ಮತ್ತು ಪಶ್ಚಿಮ ಬಂಗಾಳದಲ್ಲಿ - 2026 ರಲ್ಲಿ ವಿಧಾನಸಭಾ ಚುನಾವಣೆಗಳು ನಡೆಯಲಿವೆ. ಬಾಂಗ್ಲಾದೇಶ ಮತ್ತು ಮ್ಯಾನ್ಮಾರ್ ಸೇರಿದಂತೆ ಅಕ್ರಮ ವಿದೇಶಿ ವಲಸಿಗರನ್ನು ದೇಶದಿಂದ ಹೊರಹಾಕುವಲ್ಲಿ ಇದು ಮಹತ್ವದ ಹೆಜ್ಜೆಯಾಗಿದೆ.
Advertisement