
ಮೇದಕ್: ತೆಲಂಗಾಣದ ಮೇದಕ್ ಜಿಲ್ಲೆಯಲ್ಲಿ ಆಡಳಿತರೂಢ ಕಾಂಗ್ರೆಸ್ ನಾಯಕ ಅನಿಲ್ ಮರೆಲ್ಲಿಗೆ ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ.
ವಾರಿಕುಂಟಂ ಎಕ್ಸ್ ರಸ್ತೆಯಲ್ಲಿ ಸೋಮವಾರ ರಾತ್ರಿ ಅಪರಿಚಿತ ವ್ಯಕ್ತಿಗಳು ಕಾಂಗ್ರೆಸ್ ನಾಯಕನಿಗೆ ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ.
ಮೃತ ಅನಿಲ್ ಮರೆಲ್ಲಿ ಅವರು ರಿಯಲ್ ಎಸ್ಟೇಟ್ ವ್ಯವಹಾರ ಮಾಡುತ್ತಿದ್ದರು ಮತ್ತು ಆರೋಪಿಗಳೊಂದಿಗೆ ಅವರು ಕೆಲವು ಭೂ ವ್ಯಾಜ್ಯದಲ್ಲಿ ಭಾಗಿಯಾಗಿರಬಹುದು ಎಂದು ಕೋಲ್ಚಾರಂನ ಸಬ್-ಇನ್ಸ್‌ಪೆಕ್ಟರ್ ಮೊಹಮ್ಮದ್ ಘೌಸ್ ಅವರು ತಿಳಿಸಿದ್ದಾರೆ.
ಮರೆಲ್ಲಿ ಅವರನ್ನು ಹೈದರಾಬಾದ್‌ನಿಂದ ಹಿಂಬಾಲಿಸಿದ ದುಷ್ಕರ್ಮಿಗಳು, ನಂತರ ಅವರ ವಾಹನವನ್ನು ತಡೆದು ಅವರ ಮೇಲೆ ಗುಂಡು ಹಾರಿಸಿದ್ದಾರೆ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.
ಈ ಸಂಬಂಧ ಪ್ರಕರಣ ದಾಖಲಿಸಲಾಗಿದ್ದು, ಆರೋಪಿಗಳನ್ನು ಪತ್ತೆಹಚ್ಚುವ ಪ್ರಯತ್ನಗಳು ಮುಂದುವರೆದಿವೆ ಎಂದು ಸಬ್-ಇನ್ಸ್‌ಪೆಕ್ಟರ್ ಘೌಸ್ ಹೇಳಿದ್ದಾರೆ.
ಶವವನ್ನು ಆಸ್ಪತ್ರೆಗೆ ಸ್ಥಳಾಂತರಿಸಲಾಗಿದ್ದು, ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ.
Advertisement