
ಭುವನೇಶ್ವರ: ಬಾಲಸೋರ್ ವಿದ್ಯಾರ್ಥಿನಿ ಆತ್ಮಹತ್ಯೆ ಘಟನೆ ಖಂಡಿಸಿ ಕಾಂಗ್ರೆಸ್ ನೀಡಿದ್ದ ಬಂದ್ ಕರೆಗೆ ಒಡಿಶಾದಲ್ಲಿ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಪ್ರತಿಭಟನೆಗಳಿಂದಾಗಿ ಜನ ಜೀವನ ಅಸ್ತವ್ಯಸ್ತಗೊಂಡಿದೆ.
ಬೆಳಿಗ್ಗೆ 6 ಗಂಟೆಗೆ ಕಾಂಗ್ರೆಸ್ ನಾಯಕರು, ಕಾರ್ಯಕರ್ತರು ಪ್ರತಿಭಟನೆ ಆರಂಭಿಸಿದ್ದು, ಅಂಗಡಿಗಳು, ಮಾರುಕಟ್ಟೆಗಳು ಬಂದ್ ಆಗಿವೆ. ರಾಜ್ಯದ ಸುಮಾರು 3,000ಕ್ಕೂ ಹೆಚ್ಚು ಪೆಟ್ರೋಲ್ ಬಂಕ್ ಗಳೂ ಬಂದ್ ಆಗಿವೆ. ಭುವನೇಶ್ವರ, ಬಾಲಸೋರ್, ಕಟಕ್, ಸಂಬಲ್‌ಪುರ, ಬಲಂಗೀರ್ ಮತ್ತು ಬೆರ್ಹಾಂಪುರ್ ಸೇರಿದಂತೆ ಪ್ರಮುಖ ಪಟ್ಟಣಗಳು ಮತ್ತು ನಗರಗಳಲ್ಲಿ ವ್ಯಾಪಕ ಬಂದ್ ಕರೆಗೆ ವ್ಯಾಪಕ ಬೆಂಬಲ ವ್ಯಕ್ತವಾಗಿದೆ.
ವಾಹನ ಸಂಚಾರವಿಲ್ಲದೆ ರಸ್ತೆಗಳು ಬಿಕೋ ಎನ್ನುತ್ತಿದ್ದು, ಜನ ಸಂಚಾರ ಇಲ್ಲದ ಕಾರಣ ಸರ್ಕಾರಿ ಹಾಗೂ ಖಾಸಗಿ ಬಸ್ ಗಳಲು ರಸ್ತೆಗಳಲ್ಲಿ ಸಂಚಾರವನ್ನು ಸ್ಥಗಿತಗೊಳಿಸಿವೆ. ಈ ನಡುವೆ ಕಾಂಗ್ರೆಸ್ ಕಾರ್ಯಕರ್ತರು ರೈಲು ನಿಲ್ದಾಣಗಳಲ್ಲಿ ರೈಲು ರೋಖೋ ಪ್ರತಿಭಟನೆ ನಡೆಸಿದ್ದು, ರೈಲು ಸಂಚಾರದ ಮೇಲೆ ಪರಿಣಾಮ ಬೀರಿದೆ.
ಪ್ರತಿಭಟನಾಕಾರರು ರಸ್ತೆಗಳಲ್ಲಿ ಟೈಯರ್ ಗಳಿಗೆ ಬೆಂಕಿ ಹಚ್ಚಿದ್ದು, ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಳ್ಳುವ ಸಾಧ್ಯತೆಗಳಿರುವ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಶಿಕ್ಷಣ ಸಂಸ್ಥೆಗಳನ್ನು ಮುಚ್ಚಲಾಗಿದೆ. ಲೋಕಸೇವಾ ಭವನ ಮತ್ತು ಇತರ ಸರ್ಕಾರಿ ಸಂಸ್ಥೆಗಳ ಬಳಿ ಭದ್ರತೆಯನ್ನು ಹೆಚ್ಚಿಸಲಾಗಿದೆ.
ಪ್ರತಿಭಟನಾಕಾರರು ಬೈಕ್ ರ್ಯಾಲಿಗಳನ್ನು ನಡೆಸುತ್ತಿದ್ದು, ಬಂದ್'ಗೆ ಬೆಂಬಲ ನೀಡದೆ ತಮ್ಮ ವಹಿವಾಟುಗಳನ್ನು ಮುನ್ನಡೆಯುತ್ತಿದ್ದ ಅಂಗಡಿಗಳ ಬಾಗಿಲುಗಳನ್ನು ಬಂದ್ ಮಾಡುವಂತೆ ಒತ್ತಾಯಿಸಿದ್ದಾರೆ.
ಒಡಿಶಾ ಕಾಂಗ್ರೆಸ್ ಅಧ್ಯಕ್ಷ ಭಕ್ತ ಚರಣ್ ದಾಸ್ ಅವರು ಮಾತನಾಡಿ, ವಿದ್ಯಾರ್ಥಿನಿಗೆ ನ್ಯಾಯ ಕೋರಿ ಕಾಂಗ್ರೆಸ್ ಮತ್ತು ಎಂಟು ವಿಭಿನ್ನ ರಾಜಕೀಯ ಪಕ್ಷಗಳ ಸಾವಿರಾರು ಕಾರ್ಯಕರ್ತರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದಾರೆ. ಬಂದ್‌ಗೆ ಸಾರ್ವಜನಿಕರಿಂದ ನಮಗೆ ಭಾರಿ ಬೆಂಬಲ ಸಿಗುತ್ತಿದೆ ಎಂದು ಹೇಳಿದ್ದಾರೆ.
ಏತನ್ಮಧ್ಯೆ, ರಾಜ್ಯಾದ್ಯಂತ ನಡೆಯುತ್ತಿರುವ ಪ್ರತಿಭಟನೆ ವೇಳೆ ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡಲು ಒಡಿಶಾದಾದ್ಯಂತ ಭದ್ರತೆ ಹೆಚ್ಚಿಸಲಾಗಿದ್ದು, ಸೂಕ್ಷ್ಮ ಪ್ರದೇಶಗಳಲ್ಲಿ 200 ಕ್ಕೂ ಹೆಚ್ಚು ಪೊಲೀಸರನ್ನು ನಿಯೋಜಿಸಲಾಗಿದೆ ಎಂದು ತಿಳಿದುಬಂದಿದೆ.
Advertisement