
ನವದೆಹಲಿ: ಉದ್ಯೋಗಕ್ಕಾಗಿ ಭೂ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಹಾರದ ಮಾಜಿ ಮುಖ್ಯಮಂತ್ರಿ ಮತ್ತು ಆರ್‌ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ವಿರುದ್ಧದ ವಿಚಾರಣಾ ನ್ಯಾಯಾಲಯದ ವಿಚಾರಣೆಗೆ ತಡೆ ನೀಡಲು ಸುಪ್ರೀಂ ಕೋರ್ಟ್ ಶುಕ್ರವಾರ ನಿರಾಕರಿಸಿದೆ.
ಸಿಬಿಐ ದಾಖಲಿಸಿರುವ ಎಫ್‌ಐಆರ್ ರದ್ದುಗೊಳಿಸುವಂತೆ ಕೋರಿ ಅವರು ಸಲ್ಲಿಸಿರುವ ಅರ್ಜಿ ವಿಚಾರಣೆಯನ್ನು ತ್ವರಿತಗೊಳಿಸುವಂತೆ ನ್ಯಾಯಮೂರ್ತಿಗಳಾದ ಎಂಎಂ ಸುಂದ್ರೇಶ್ ಮತ್ತು ಎನ್ ಕೋಟೀಶ್ವರ್ ಸಿಂಗ್ ಅವರಿದ್ದ ಪೀಠವು ದೆಹಲಿ ಹೈಕೋರ್ಟ್‌ಗೆ ಸೂಚಿಸಿದೆ.
ಈ ಪ್ರಕರಣದಲ್ಲಿ ವಿಚಾರಣಾ ನ್ಯಾಯಾಲಯದ ಮುಂದೆ ಲಾಲು ಪ್ರಸಾದ್ ಯಾದವ್ ಹಾಜರಾಗುವುದಕ್ಕೆ ವಿನಾಯಿತಿ ನೀಡಿರುವ ಸುಪ್ರೀಂ ಕೋರ್ಟ್, ಮೇ 29 ರಂದು ನಡೆಯಲಿರುವ ದೆಹಲಿ ಹೈಕೋರ್ಟ್ ವಿಚಾರಣೆಗೆ ತಡೆ ನೀಡಲು ಯಾವುದೇ ಬಲವಾದ ಕಾರಣಗಳಿಲ್ಲ ಎಂದು ಹೇಳಿದೆ.
ತನಿಖಾ ಸಂಸ್ಥೆಯು ದಾಖಲಿಸಿರುವ ಎಫ್‌ಐಆರ್ ರದ್ದುಗೊಳಿಸುವಂತೆ ಲಾಲು ಪ್ರಸಾದ್ ಯಾದವ್ ಸಲ್ಲಿಸಿದ ಅರ್ಜಿಯ ಮೇರೆಗೆ ಹೈಕೋರ್ಟ್ ಸಿಬಿಐಗೆ ನೋಟಿಸ್ ಜಾರಿ ಮಾಡಿ, ವಿಚಾರಣೆಯನ್ನು ಆಗಸ್ಟ್ 12 ಕ್ಕೆ ಮುಂದೂಡಿದೆ.
ಲಾಲು ಪ್ರಸಾದ್ ಯಾದವ್ ಅವರು 2004 ಮತ್ತು 2009 ರ ಅವಧಿಯಲ್ಲಿ ರೈಲ್ವೆ ಸಚಿವರಾಗಿದ್ದಾಗ ಅವರ ಕುಟುಂಬಕ್ಕೆ ಉಡುಗೊರೆಯಾಗಿ ನೀಡಿದ ಅಥವಾ ಮಾರಾಟ ಮಾಡಿದ ಜಮೀನುಗಳಿಗೆ ಪ್ರತಿಯಾಗಿ ರೈಲ್ವೆಯಲ್ಲಿ ನೇಮಕಾತಿ ಮಾಡಲಾಗಿದೆ.
ಜಾಹೀರಾತು ನೀಡದೆ ಅಥವಾ ಸಾರ್ವಜನಿಕರ ಗಮನಕ್ಕೂ ತಾರದೆ ತಮ್ಮ ನೆಚ್ಚಿನ ಅಭ್ಯರ್ಥಿಗಳನ್ನು ನೇಮಿಸಿಕೊಳ್ಳಲಾಗಿದೆ. ಈ ನೇಮಕಾತಿಗಾಗಿ ಭಾರತೀಯ ರೈಲ್ವೆಯ ನಿಯಮಗಳು ಮತ್ತು ಕಾರ್ಯವಿಧಾನಗಳನ್ನು ಉಲ್ಲಂಘಿಸಲಾಗಿದೆ ಎಂದು ಸಿಬಿಐ ಆರೋಪಿಸಿದೆ.
Advertisement