
ನಾಗರ್ಕರ್ನೂಲ್: ತೆಲಂಗಾಣದ ನಾಗರ್ಕರ್ನೂಲ್ ಜಿಲ್ಲೆಯ ಸರ್ಕಾರಿ ಬಾಲಕಿಯರ ವಸತಿ ಶಾಲೆಯ 60 ಕ್ಕೂ ಹೆಚ್ಚು ವಿದ್ಯಾರ್ಥಿಗಳು ರಾತ್ರಿ ಊಟ ಸೇವಿಸಿದ ನಂತರ ವಾಂತಿ ಮತ್ತು ಇತರ ರೋಗಲಕ್ಷಣಗಳು ಕಾಣಿಸಿಕೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
50 ವಿದ್ಯಾರ್ಥಿನಿಯರು ಗುಣಮುಖರಾಗಿದ್ದು, ಅವರನ್ನು ಆಸ್ಪತ್ರೆಯಿಂದ ಭಾನುವಾರ ಡಿಸ್ಚಾರ್ಜ್ ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಉಯ್ಯಾಲವಾಡದಲ್ಲಿರುವ ವಸತಿ ಶಾಲೆಯಲ್ಲಿ ಶನಿವಾರ ರಾತ್ರಿ ಭೋಜನ ಸೇವಿಸಿದ ನಂತರ 64 ವಿದ್ಯಾರ್ಥಿಗಳು ಅಸ್ವಸ್ಥರಾಗಿ ಸರ್ಕಾರಿ ಆಸ್ಪತ್ರೆಗೆ ದಾಖಲಾಗಿದ್ದು, ಅವರ ಆರೋಗ್ಯ ಸ್ಥಿರವಾಗಿದೆ ಎಂದು ಅವರು ಹೇಳಿದ್ದಾರೆ.
ವಿದ್ಯಾರ್ಥಿಗಳನ್ನು ವಾಂತಿ, ಅತಿಸಾರ ಮತ್ತು ಹೊಟ್ಟೆ ನೋವಿನ ಲಕ್ಷಣಗಳೊಂದಿಗೆ ಆಸ್ಪತ್ರೆಗೆ ದಾಖಲಿಸಲಾಗಿತ್ತು ಮತ್ತು ಅವರಲ್ಲಿ 50 ಜನರನ್ನು ಚಿಕಿತ್ಸೆಯ ನಂತರ ಡಿಸ್ಚಾರ್ಜ್ ಮಾಡಲಾಗಿದೆ ಎಂದು ಆರೋಗ್ಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ವಿದ್ಯಾರ್ಥಿಗಳು ಆಹಾರ ಸೇವಿಸುವ ಸಮಯದಲ್ಲಿ ಮೊಸರು ಸಂಪೂರ್ಣವಾಗಿ ಹುದುಗಿರಲಿಲ್ಲ ಮತ್ತು ಪ್ರಾಥಮಿಕ ವರದಿಗಳ ಪ್ರಕಾರ ವಿದ್ಯಾರ್ಥಿಗಳು ಅಸ್ವಸ್ಥರಾಗಲು ಇದು ಕಾರಣ ಎಂದು ಶಂಕಿಸಲಾಗಿದೆ ಎಂದು ಅವರು ಹೇಳಿದ್ದಾರೆ.
ಆಹಾರ ಪದಾರ್ಥಗಳು ಮತ್ತು ಕುಡಿಯುವ ನೀರಿನ ಮಾದರಿಗಳನ್ನು ಪರೀಕ್ಷೆಗೆ ಕಳುಹಿಸಲಾಗಿದೆ. ಘಟನೆಗೆ ಸಂಬಂಧಿಸಿದಂತೆ ವಿಚಾರಣೆ ನಡೆಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
Advertisement