
ಸುಕ್ಮಾ: ಛತ್ತೀಸ್‌ಗಢದ ಸುಕ್ಮಾ ಜಿಲ್ಲೆಯಲ್ಲಿ ಮಂಗಳವಾರ ನಡೆದ ಎನ್‌ಕೌಂಟರ್ ವೇಳೆ ಐಇಡಿ ಸ್ಫೋಟಗೊಂಡು ಒಬ್ಬ ನಕ್ಸಲೀಯ ಸಾವನ್ನಪ್ಪಿದ್ದು, ಮೂವರು ಭದ್ರತಾ ಸಿಬ್ಬಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಸುಕ್ಮಾ-ದಂತೇವಾಡ ಅಂತರ ಜಿಲ್ಲಾ ಗಡಿಯ ಕಾಡಿನಲ್ಲಿ ನಕ್ಸಲ್ ವಿರೋಧಿ ಕಾರ್ಯಾಚರಣೆಯಲ್ಲಿದ್ದ ಭದ್ರತಾ ಸಿಬ್ಬಂದಿ ಮತ್ತು ಮಾವೋವಾದಿಗಳ ನಡುವೆ ಗುಂಡಿನ ಚಕಮಕಿ ನಡೆದಿದೆ ಎಂದು ಅವರು ಹೇಳಿದ್ದಾರೆ.
ಈ ಪ್ರದೇಶದಲ್ಲಿ ಮಾವೋವಾದಿಗಳ ಉಪಸ್ಥಿತಿಯ ಬಗ್ಗೆ ಮಾಹಿತಿ ಆಧರಿಸಿ ವಿಶೇಷ ಕಾರ್ಯಪಡೆ(ಎಸ್‌ಟಿಎಫ್), ಜಿಲ್ಲಾ ಮೀಸಲು ಪಡೆ(ಡಿಆರ್‌ಜಿ) ಮತ್ತು ಕೇಂದ್ರ ಮೀಸಲು ಪೊಲೀಸ್ ಪಡೆ(ಸಿಆರ್‌ಪಿಎಫ್) ಜಂಟಿಯಾಗಿ ಈ ಕಾರ್ಯಾಚರಣೆಯನ್ನು ಸೋಮವಾರ ಪ್ರಾರಂಭಿಸಿದ್ದವು ಎಂದು ಸುಕ್ಮಾ ಪೊಲೀಸ್ ವರಿಷ್ಠಾಧಿಕಾರಿ ಕಿರಣ್ ಚವಾಣ್ ತಿಳಿಸಿದ್ದಾರೆ.
ಎನ್ಕೌಂಟರ್ ನಡೆದ ಸ್ಥಳದಲ್ಲಿ ಶೋಧ ನಡೆಸಿದಾಗ, ಪುರುಷ ನಕ್ಸಲೈಟ್‌ನ ಮೃತದೇಹ ಮತ್ತು ಅಪಾರ ಪ್ರಮಾಣದ ಶಸ್ತ್ರಾಸ್ತ್ರಗಳು, ಮದ್ದುಗುಂಡುಗಳು ಹಾಗೂ ಸ್ಫೋಟಕ ವಸ್ತುಗಳು ಪತ್ತೆಯಾಗಿವೆ ಎಂದು ಅವರು ಹೇಳಿದ್ದಾರೆ.
"ಕಾರ್ಯಾಚರಣೆಯ ಸಮಯದಲ್ಲಿ ಐಇಡಿ ಸ್ಫೋಟಗೊಂಡಿದ್ದು, ಡಿಆರ್‌ಜಿಗೆ ಸೇರಿದ ಮೂವರು ಸಿಬ್ಬಂದಿ ಗಾಯಗೊಂಡಿದ್ದಾರೆ. ಎಲ್ಲಾ ಗಾಯಗೊಂಡ ಸಿಬ್ಬಂದಿಯನ್ನು ಸುರಕ್ಷಿತವಾಗಿ ಸ್ಥಳಾಂತರಿಸಲಾಗಿದೆ ಮತ್ತು ಉನ್ನತ ಚಿಕಿತ್ಸೆಗಾಗಿ ಉನ್ನತ ವೈದ್ಯಕೀಯ ಕೇಂದ್ರಗಳಿಗೆ ಕಳುಹಿಸಲಾಗುತ್ತಿದೆ. ಅವರ ಆರೋಗ್ಯ ಸ್ಥಿತಿ ಪ್ರಸ್ತುತ ಸ್ಥಿರವಾಗಿದೆ ಮತ್ತು ಪ್ರಾಣಾಪಾಯದಿಂದ ಪಾರಾಗಿದ್ದಾರೆ" ಎಂದು ಚವಾಣ್ ತಿಳಿಸಿದ್ದಾರೆ.
Advertisement