
ಪಾಟ್ನಾ: ಸಂವಿಧಾನ ಶಿಲ್ಪಿ ಬಾಬಾ ಸಾಹೇಬ್ ಅಂಬೇಡ್ಕರ್ ಅವರಿಗೆ ಆರ್ ಜೆಡಿ ನಾಯಕ ಲಾಲು ಪ್ರಸಾದ್ ಯಾದವ್ ಅಪಮಾನ ಮಾಡಿದ್ದಾರೆ ಎಂದು ಆರೋಪ ಕೇಳಿಬಂದಿದೆ.
ಇತ್ತೀಚಿಗೆ ತಮ್ಮ 78ನೇ ಜನ್ಮ ದಿನವನ್ನು ಆಚರಿಸಿಕೊಂಡ ಲಾಲು ಪ್ರಸಾದ್ ಯಾದವ್ ಅವರಿಗೆ ಅಭಿಮಾನಿಗಳು ಅಂಬೇಡ್ಕರ್ ಭಾವಚಿತ್ರವನ್ನು ನೀಡಿದ್ದರು. ಆದರೆ, ಲಾಲು ಪ್ರಸಾದ್ ಯಾದವ್ ಅವರು ಅದನ್ನು ತಮ್ಮ ಕಾಲಿನ ಬಳಿ ಇಡುವಂತೆ ಸೂಚಿಸಿದ್ದಾರೆ. ಅಹಂಕಾರದಿಂದ ವರ್ತಿಸಿ ಅಂಬೇಡ್ಕರ್ ಅವರಿಗೆ ಅಪಮಾನ ಮಾಡಿದ್ದಾರೆ ಎಂದು ಬಿಜೆಪಿ ಆರೋಪಿಸಿದೆ.
ಈ ಕುರಿತು ಬಿಹಾರ ಪರಿಶಿಷ್ಟ ಜಾತಿಗಳ ಆಯೋಗ ಲಾಲು ಪ್ರಸಾದ್ ಯಾದವ್ ಅವರಿಗೆ ನೋಟಿಸ್ ನೀಡಿದ್ದು, 15 ದಿನಗಳಲ್ಲಿ ಪ್ರತಿಕ್ರಿಯೆ ನೀಡುವಂತೆ ಸೂಚಿಸಿದೆ. ತಪ್ಪಿದ್ದರೆ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದೆ.
ಆರೋಪಕ್ಕೆ ಸಂಬಂಧಿಸಿದಂತೆ ಲಾಲು ಪ್ರಸಾದ್ ಯಾದವ್ ಅವರಿಂದ ವಿವರಣೆ ಕೋರಿ ನೋಟಿಸ್ ನೀಡಲಾಗಿದೆ. 15 ದಿನಗಳಲ್ಲಿ ಪ್ರತಿಕ್ರಿಯಿಸದಿದ್ದಲ್ಲಿ ಪರಿಶಿಷ್ಟ ಜಾತಿಗಳು ಮತ್ತು ಪರಿಶಿಷ್ಟ ವರ್ಗಗಳ ದೌರ್ಜನ್ಯ ಕಾಯ್ದೆಯಡಿ ಕ್ರಮ ಕೈಗೊಳ್ಳಲಾಗುವುದು ಎಂದು ಆಯೋಗದ ಉಪಾಧ್ಯಕ್ಷ ದೇವೇಂದ್ರ ಕುಮಾರ್ ಅವರು ಪಿಟಿಐ ಸುದ್ದಿಸಂಸ್ಥೆಗೆ ತಿಳಿಸಿದ್ದಾರೆ.
ಅಂಬೇಡ್ಕರ್ ಅವರಿಗೆ ಲಾಲು ಪ್ರಸಾದ್ ಯಾದವ್ ಅಪಮಾನಿಸಿದ್ದಾರೆ ಎನ್ನಲಾದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಬಿಹಾರ ಉಪ ಮುಖ್ಯಮಂತ್ರಿ ಸಾಮ್ರಾಟ್ ಚೌಧರಿ ಒತ್ತಾಯಿಸಿದ್ದಾರೆ.
Advertisement