
ಹೈದರಾಬಾದ್: ತೆಲಂಗಾಣದ ಸಂಗಾರೆಡ್ಡಿ ಜಲ್ಲೆಯ ಪಾಶಮೈಲರಾಮ್‌ನಲ್ಲಿರುವ ಸಿಗಾಚಿ ರಾಸಾಯನಿಕ ಕಾರ್ಖಾನೆಯಲ್ಲಿ ಭಾರೀ ಸ್ಫೋಟ ಸಂಭವಿಸಿದ್ದು, ಕನಿಷ್ಠ 12 ಮಂದಿ ಕಾರ್ಮಿಕರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.
ರಿಯಾಕ್ಟರ್‌ನಲ್ಲಿನ ಸ್ಫೋಟದಿಂದಾಗಿ ಕಾರ್ಖಾನೆಯಲ್ಲಿ ಬೆಂಕಿ ಕಾಣಿಸಿಕೊಂಡಿದೆ ಎನ್ನಲಾಗಿದ್ದು, ಘಟನೆಯಲ್ಲಿ 34ಕ್ಕೂ ಹೆಚ್ಚು ಕಾರ್ಮಿಕರು ಗಾಯಗೊಂಡಿದ್ದಾರೆ.
ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಕಾರ್ಖಾನೆಯೊಳಗೆ ಮತ್ತಷ್ಟು ಕಾರ್ಮಿಕರು ಸಿಲುಕಿರುವ ಸಾಧ್ಯತೆ ಇದೆ ಎಂಬ ಶಂಕೆಗಳು ವ್ಯಕ್ತವಾಗಿದೆ.
ಘಟನಾ ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ಧಾವಿಸಿದ್ದು, ಬೆಂಕಿ ನಂದಿಸಲು ಕಾರ್ಯಾಚರಣೆ ನಡೆಸುತ್ತಿದ್ದಾರೆ.
ಸ್ಫೋಟವು ಎಷ್ಟು ಪ್ರಬಲವಾಗಿತ್ತೆಂದರೆ, ಕೆಲವು ಕಾರ್ಮಿಕರು ಸುಮಾರು 100 ಮೀಟರ್ ದೂರದವರೆಗೂ ಬಿದ್ದಿದ್ದರು. ಬೆಂಕಿಯ ಕೆನ್ನಾಲಿಗೆ ಕ್ಷಣಾರ್ಧದಲ್ಲಿ ಎಲ್ಲೆಡೆ ಆವರಿಸಿತು ಎಂದು ಪ್ರತ್ಯಕ್ಷದರ್ಶಿಗಳು ಹೇಳಿದ್ದಾರೆ.
ಘಟನೆಗೆ ಮುಖ್ಯಮಂತ್ರಿ ಎ ರೇವಂತ್ ರೆಡ್ಡಿ ಸಂತಾಪ ಸೂಚಿಸಿದ್ದು, ಅವಶೇಷಗಳಡಿ ಸಿಲುಕಿರುವ ಕಾರ್ಮಿಕರನ್ನು ರಕ್ಷಿಸಲು ಮತ್ತು ಅವರಿಗೆ ಸೂಕ್ತ ವೈದ್ಯಕೀಯ ಆರೈಕೆಯನ್ನು ಒದಗಿಸಲು ಎಲ್ಲಾ ಕ್ರಮಗಳನ್ನು ತೆಗೆದುಕೊಳ್ಳುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.
Advertisement