
ನವದೆಹಲಿ: ಕರ್ನಾಟಕದ ಕೆಲವು ಹೋಟೆಲ್‌ಗಳಲ್ಲಿ ಇಡ್ಲಿ ಬೇಯಿಸಲು ಪ್ಲಾಸ್ಟಿಕ್ ಹಾಳೆಗಳನ್ನು ಬಳಸಲಾಗುತ್ತಿದೆ ಎಂಬ ವರದಿಗಳ ಬಗ್ಗೆ ತನಿಖೆ ನಡೆಸುವಂತೆ ಭಾರತದ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರವು (ಎಫ್ಎಸ್ಎಸ್ಎಐ) ಕರ್ನಾಟಕ ಆಹಾರ ಸುರಕ್ಷತೆ ಇಲಾಖೆಗೆ ನಿರ್ದೇಶಿಸಿದ್ದು, ಈ ಬಗ್ಗೆ ವರದಿ ಸಲ್ಲಿಸುವಂತೆ ಸೂಚನೆ ನೀಡಿದೆ.
ರಾಜ್ಯದ ಕೆಲವು ರೆಸ್ಟೋರೆಂಟ್‌ಗಳಲ್ಲಿ ಇಡ್ಲಿ ಬೇಯಿಸಲು ಪ್ಲಾಸ್ಟಿಕ್ ಹಾಳೆಗಳನ್ನು ಬಳಸುತ್ತಿರುವ ಕುರಿತಾದ ವರದಿಗಳನ್ನು ಗಂಭೀರವಾಗಿ ಪರಿಗಣಿಸಿರುವ ಎಫ್ಎಸ್ಎಸ್ಎಐ, ಆದಷ್ಟು ಬೇಗ ವರದಿ ಸಲ್ಲಿಸಲು ಮತ್ತು ಪ್ಲಾಸ್ಟಿಕ್ ಹಾಳೆಗಳನ್ನು ಬಳಸುತ್ತಿರುವ ಹೋಟೆಲ್‌ಗಳ ವಿರುದ್ಧ ತಕ್ಷಣ ಕ್ರಮ ತೆಗೆದುಕೊಳ್ಳುವಂತೆ ರಾಜ್ಯ ಆಹಾರ ಸುರಕ್ಷತಾ ಇಲಾಖೆಗೆ ಸೂಚಿಸಿದೆ.
'ಪ್ಲಾಸ್ಟಿಕ್‌ನಿಂದ ಹಾನಿಕಾರಕ ರಾಸಾಯನಿಕಗಳು ಆಹಾರಕ್ಕೆ ಸೇರುತ್ತವೆ. ಹೀಗಾಗಿ, ಪ್ಲಾಸ್ಟಿಕ್ ಹಾಳೆಗಳನ್ನು ಬಳಸುವುದು ಆಹಾರದ ಸುರಕ್ಷತೆಯ ಬಗ್ಗೆ ಗಂಭೀರ ಕಳವಳಕ್ಕೆ ಕಾರಣವಾಗಿದೆ' ಎಂದು ಹೇಳಿದೆ.
'ಆಹಾರ ತಯಾರಿಕೆಯಲ್ಲಿ ಕಡಿಮೆ ಗುಣಮಟ್ಟದ ಅಥವಾ ಫುಡ್ ಗ್ರೇಡ್ ಅಲ್ಲದ ಪ್ಲಾಸ್ಟಿಕ್ ಅನ್ನು ಹೆಚ್ಚಿನ ಶಾಖಕ್ಕೆ ಒಡ್ಡಿದಾಗ ಬಿಸ್ಫೆನಾಲ್ ಎ (BPA) ಮತ್ತು ಥಾಲೇಟ್ ಒಳಗೊಂಡಂತೆ ಇತರ ವಿಷಕಾರಿ ರಾಸಾಯನಿಕಗಳು ಬಿಡುಗಡೆಯಾಗುವ ಸಾಧ್ಯತೆ ಇರುತ್ತದೆ. ಇವು ಆಹಾರಕ್ಕೆ ಸೇರಿದಾಗ ಗಂಭೀರ ಆರೋಗ್ಯ ಸಮಸ್ಯೆಗಳನ್ನು ಉಂಟುಮಾಡುತ್ತದೆ' ಎಂದು ಎಫ್‌ಎಸ್‌ಎಸ್‌ಎಐ ಸಿಇಒ ಜಿ ಕಮಲಾ ವರ್ಧನ್ ರಾವ್ ಹೇಳಿದ್ದಾರೆ.
ಹೋಟೆಲ್‌ಗಳು ಮತ್ತು ರೆಸ್ಟೋರೆಂಟ್‌ಗಳಲ್ಲಿ ಪ್ಲಾಸ್ಟಿಕ್ ಹಾಳೆ ಬಳಸಿ ತಯಾರಿಸಿದ ಇಡ್ಲಿ ಅಸುರಕ್ಷಿತ ಎನ್ನುವುದು ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆ ನಡೆಸಿದ ಪರೀಕ್ಷೆಯಿಂದ ದೃಢಪಟ್ಟಿದ್ದು, ರಾಜ್ಯದಲ್ಲಿ ಪ್ಲಾಸ್ಟಿಕ್ ಬಳಕೆಯನ್ನು ಇಲಾಖೆ ನಿಷೇಧಿಸಿದೆ. ಇಲಾಖೆಯ ಅಧಿಕಾರಿಗಳು 251 ಸ್ಥಳಗಳಲ್ಲಿ ಪರಿಶೀಲನೆ ನಡೆಸಿ, 52 ಕಡೆ ಪ್ಲಾಸ್ಟಿಕ್ ಹಾಳೆಗಳನ್ನು ಬಳಸಿ ಇಡ್ಲಿ ತಯಾರಿಸುತ್ತಿರುವುದು ಕಂಡುಬಂದಿದೆ. ಈ ಇಡ್ಲಿಗಳಲ್ಲಿ ಪ್ಲಾಸ್ಟಿಕ್‌ನಲ್ಲಿರುವ ಹಾನಿಕಾರಕ ಅಂಶಗಳು ಪತ್ತೆಯಾಗಿವೆ. ಇದರ ಬೆನ್ನಲ್ಲೇ ಎಫ್‌ಎಸ್‌ಎಸ್‌ಎಐ ಇದನ್ನು ಗಂಭೀರವಾಗಿ ಪರಿಗಣಿಸಿದೆ.
Advertisement