
ನಾಗ್ಪುರ: ಮಹಾರಾಷ್ಟ್ರದ ನಾಗ್ಪುರದಲ್ಲಿ ಸಂಭವಿಸಿದ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಎಂಟು ವಿಶ್ವ ಹಿಂದೂ ಪರಿಷತ್ (VHP) ಮತ್ತು ಬಜರಂಗ ದಳ ಕಾರ್ಯಕರ್ತರು ಕೊತ್ವಾಲಿ ಪೊಲೀಸರ ಮುಂದೆ ಬುಧವಾರ ಶರಣಾಗಿದ್ದಾರೆ. ಈ ಹಿಂದೆ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದ ಆರೋಪದ ಮೇಲೆ ಪೊಲೀಸರು ಅವರ ವಿರುದ್ಧ ಎಫ್‌ಐಆರ್ ದಾಖಲಿಸಿದ್ದರು.
ಔರಂಗಬಾದ್ ಎಂದೇ ಹೆಸರಾದ ಸಂಬಾಜಿನಗರದಲ್ಲಿನ ಮೊಘಲ್ ಸಾಮ್ರಾಟ ಔರಂಗಜೇಬ್ ಸಮಾಧಿ ತೆರವಿಗಾಗಿ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಆರೋಪಿಗಳು ಪೊಲೀಸರ ಮುಂದೆ ಶರಣಾಗಿದ್ದಾರೆ. ಪ್ರತಿಭಟನೆ ವೇಳೆ ಹಿಂಸಾಚಾರ ಉಂಟಾಗಿತ್ತು. ಪೊಲೀಸರು ಆರೋಪಿಗಳನ್ನು ಕಸ್ಟಡಿಗೆ ತೆಗೆದುಕೊಂಡು ನ್ಯಾಯಾಲಯದ ಮುಂದೆ ಹಾಜರುಪಡಿಸಿದರು.
ಇಂದು ಬೆಳಗ್ಗೆ ಹಿಂಸಾಚಾರದಲ್ಲಿ ಭಾಗಿಯಾಗಿದ್ದಕ್ಕಾಗಿ ಅಲ್ಪಸಂಖ್ಯಾತರ ಡೆಮಾಕ್ರಟಿಕ್ ಪಕ್ಷದ ನಾಯಕ ಫಾಹಿಮ್ ಶಮೀಮ್ ಖಾನ್ ಅವರನ್ನು ಪೊಲೀಸರು ಬಂಧಿಸಿದ್ದು, ಅವರನ್ನು ಮಾರ್ಚ್ 21ರವರೆಗೆ ಕಸ್ಟಡಿಗೆ ಒಪ್ಪಿಸಲಾಗಿದೆ.
ಔರಂಗಜೇಬ್ ಸಮಾಧಿ ತೆರವಿಗಾಗಿ ವಿಶ್ವ ಹಿಂದೂ ಪರಿಷತ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದ ನಂತರ ಸೋಮವಾರ ನಾಗ್ಪುರ ಪೊಲೀಸ್ ಠಾಣೆಯ ಹೊರಗೆ ಪ್ರತಿಭಟನೆಯ ನೇತೃತ್ವ ವಹಿಸಿದ್ದಕ್ಕಾಗಿ ಅವರನ್ನು ಬಂಧಿಸಲಾಗಿತ್ತು.ಹಿಂಸಾಚಾರದಲ್ಲಿ ಹಲವು ಪೊಲೀಸರು ಗಾಯಗೊಂಡಿರುವುದಕ್ಕೆ ಸಂಬಂಧಿಸಿದಂತೆ ಇಲ್ಲಿಯವರೆಗೂ 50 ಮಂದಿ ವಿರುದ್ಧ ಎಫ್ ಐಆರ್ ದಾಖಲಾಗಿದೆ. ಈ ಪೈಕಿ ಖಾನ್ ಹೆಸರನ್ನು ಉಲ್ಲೇಖಿಸಲಾಗಿದೆ.
ಗಲಭೆ ಭುಗಿಲೆಳುವುದರಲ್ಲಿ ಖಾನ್ ಪಾತ್ರ ವಹಿಸಿದ್ದಾರೆಯೇ ಎಂದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ ಎಂದು ಅಧಿಕಾರಿಯೊಬ್ಬರು ಬುಧವಾರ ತಿಳಿಸಿದ್ದಾರೆ.
ಛತ್ರಪತಿ ಸಂಭಾಜಿನಗರ ಜಿಲ್ಲೆಯಲ್ಲಿರುವ ಔರಂಗಜೇಬನ ಸಮಾಧಿ ತೆರವಿಗೆ ಒತ್ತಾಯಿಸಿ ಬಲಪಂಥೀಯ ಸಂಘಟನೆಯೊಂದು ನಡೆಸಿದ ಪ್ರತಿಭಟನೆ ಸಂದರ್ಭದಲ್ಲಿ ಸಮುದಾಯವೊಂದರ ಪವಿತ್ರ ಗ್ರಂಥವನ್ನು ಸುಟ್ಟುಹಾಕಲಾಗಿದೆ ಎಂಬ ವದಂತಿಗಳ ನಡುವೆ ಸೋಮವಾರ ಕೇಂದ್ರ ನಾಗ್ಪುರದ ಚಿಟ್ನಿಸ್ ಪಾರ್ಕ್‌ನಲ್ಲಿ ಹಿಂಸಾಚಾರ ಭುಗಿಲೆದ್ದಿತ್ತು. ಈ ವೇಳೆ ಪೊಲೀಸರ ಮೇಲೆ ಕಲ್ಲು ತೂರಾಟ ನಡೆದಿತ್ತು. ಹಿಂಸಾಚಾರದಲ್ಲಿ 34 ಪೊಲೀಸ್ ಸಿಬ್ಬಂದಿ ಗಾಯಗೊಂಡಿದ್ದಾರೆ.
Advertisement